ಸಾರಾಂಶ
ನವದೆಹಲಿ : ಬಿಹಾರದ ಬೆನ್ನಲ್ಲೇ ಇದೀಗ ಕೇಂದ್ರ ಚುನಾವಣಾ ಆಯೋಗ ದೇಶಾದ್ಯಂತ ಮತದಾರರ ಪಟ್ಟಿ ವಿಶೇಷ ವರಿಷ್ಕರಣೆಗೆ ಸನ್ನದ್ಧವಾಗಿದೆ. ಮುಂದಿನವಾರದಿಂದಲೇ ದೇಶಾದ್ಯಂತ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಕೈಹಾಕುವ ಸಾಧ್ಯತೆ ಇದೆ. ಮೊದಲ ಹಂತದಲ್ಲಿ ಮುಂದಿನ ವರ್ಷ ಚುನಾವಣೆ ಎದುರಿಸಲಿರುವ ರಾಜ್ಯಗಳೂ ಸೇರಿ ಒಟ್ಟು 10ರಿಂದ 15 ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ ಕಾರ್ಯ ನಡೆಸಲಿದೆ.
ಅಸ್ಸಾಂ, ತಮಿಳುನಾಡು, ಪುದುಚೇರಿ, ಕೇರಳ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ 2026ರಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಈ ರಾಜ್ಯಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಆಗುವುದು ಬಹುತೇಕ ನಿಶ್ಚಿತ. ಇವುಗಳ ಜತೆಗೆ ಇನ್ನೂ ಕೆಲವು ರಾಜ್ಯಗಳು ಸೇರಿ ಒಟ್ಟು 10ರಿಂದ 15 ರಾಜ್ಯಗಳ ಮೊದಲ ಪಟ್ಟಿಯನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ
ಯಾವ ರಾಜ್ಯಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿದೆ ಅಥವಾ ನಡೆಯಲಿದೆಯೋ ಅಲ್ಲಿ ಸದ್ಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಸುವುದಿಲ್ಲ. ಏಕೆಂದರೆ ಆ ಸಂದರ್ಭದಲ್ಲಿ ಆ ರಾಜ್ಯಗಳ ತಳಹಂತದ ವ್ಯವಸ್ಥೆಯು ಮತದಾರರ ಪಟ್ಟಿ ಪರಿಷ್ಕರಣೆಗೆ ಹೆಚ್ಚಿನ ಗಮನ ನೀಡುವುದು ಕಷ್ಟವಾಗಲಿದೆ. ಈ ರಾಜ್ಯಗಳಲ್ಲಿ ಮುಂದಿನ ಹಂತದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಯಲಿದೆ ಎಂದು ಹೇಳಲಾಗಿದೆ.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿ ಈಗಾಗಲೇ ಚುನಾವಣಾ ಆಯೋಗ ಎಲ್ಲಾ ರಾಜ್ಯಗಳ ಚುನಾವಣಾ ಅಧಿಕಾರಿಗಳ ಜತೆಗೆ ಎರಡು ಸಭೆಗಳನ್ನು ನಡೆಸಿದೆ. ಹಲವು ರಾಜ್ಯಗಳು ಈಗಾಗಲೇ ಹಿಂದಿನ ಮತದಾರರ ಪಟ್ಟಿ ಪರಿಷ್ಕರಣೆಯ ಪಟ್ಟಿಯನ್ನು ವೆಬ್‌ಸೈಟ್‌ಗಳಲ್ಲಿ ಪ್ರಕಟಿಸಿದೆ.
ಬಾಂಗ್ಲಾದೇಶ ಅಕ್ರಮ ವಲಸಿಗರನ್ನು ಪತ್ತೆಹಚ್ಚುವ ಉದ್ದೇಶದಿಂದ ಮತದಾರರ ಪಟ್ಟಿ ಪರಿಷ್ಕರಣೆಗೆ ಹೆಚ್ಚಿನ ಮಹತ್ವ ಬಂದಿದೆ.
)

;Resize=(128,128))