ಆ.23 ಇನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ
KannadaprabhaNewsNetwork | Published : Oct 15 2023, 12:45 AM IST
ಆ.23 ಇನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ
ಸಾರಾಂಶ
ದೇಶದ ಚಂದ್ರಯಾನ-3 ಯೋಜನೆ ಯಶಸ್ವಿಯಾದ ದಿನದ ಸ್ಮರಣಾರ್ಥ ಕೇಂದ್ರ ಸರ್ಕಾರ, ಆ.23ನೇ ತಾರೀಖನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಅಧಿಕೃತವಾಗಿ ಘೋಷಿಸಿದೆ
- ಕೇಂದ್ರ ಸರ್ಕಾರದಿಂದ ಅಧಿಕೃತ ಅಧಿಸೂಚನೆ - ಚಂದ್ರಯಾನ-3 ಯಶ ಕಂಡ ದಿನಕ್ಕೆ ವಿಶಿಷ್ಟ ಗೌರವ ನವದೆಹಲಿ: ದೇಶದ ಚಂದ್ರಯಾನ-3 ಯೋಜನೆ ಯಶಸ್ವಿಯಾದ ದಿನದ ಸ್ಮರಣಾರ್ಥ ಕೇಂದ್ರ ಸರ್ಕಾರ, ಆ.23ನೇ ತಾರೀಖನ್ನು ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಅಧಿಕೃತವಾಗಿ ಘೋಷಿಸಿದೆ. ಚಂದ್ರಯಾನ-3 ಯಶಸ್ಸನ್ನು ಸ್ಮರಿಸಲು ಹಾಗೂ ದೇಶದಲ್ಲಿ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಹಾಗೂ ಗಣಿತಕ್ಕೆ ಪ್ರೋತ್ಸಾಹ ನೀಡಲು ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಸರ್ಕಾರದ ಅಧಿಸೂಚನೆ ತಿಳಿಸಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಕೆಲವು ತಿಂಗಳ ಹಿಂದೆ ಮಹತ್ವದ ಚಂದ್ರಯಾನ-3 ವ್ಯೋಮನೌಕೆ ಉಡಾವಣೆ ಮಾಡಿತ್ತು. ಈ ನೌಕೆಯ ವಿಕ್ರಂ ಲ್ಯಾಂಡರ್, ಆ.23ರಂದು ಯಾವುದೇ ಅಡಚಣೆಯಿಲ್ಲದೇ ಸುಲಲಿತವಾಗಿ ಚಂದ್ರನ ದಕ್ಷಿಣ ಧ್ರುವದ ಮೇಲೆ ಲ್ಯಾಂಡ್ ಆಗಿತ್ತು. ಆಗ ಚಂದ್ರನ ದಕ್ಷಿಣ ಧ್ರುವದ ಮೇಲೆ ಇಳಿದ ಮೊದಲ ದೇಶ ಹಾಗೂ ಒಟ್ಟಾರೆ ಚಂದ್ರನ ಮೇಲೆ ಇಳಿದ ನಾಲ್ಕನೇ ದೇಶ ಎಂಬ ಕೀರ್ತಿಗೆ ಭಾರತ ಪಾತ್ರವಾಗಿತ್ತು. ಬಳಿಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರು ಇಸ್ರೋ ಕಚೇರಿಗೆ ಭೇಟಿ ನೀಡಿದಾಗ ಆ.23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಆಚರಿಸಲಾಗುವುದು ಎಂದು ಘೋಷಿಸಿದ್ದರು. ಇದಕ್ಕೆ ಆ.29ರಂದು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಈ ಬಗ್ಗೆ ಸರ್ಕಾರ ಶನಿವಾರ ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದೆ.