ಆಶಾ ಕಾರ್ಯಕರ್ತೆಯರಿಗೆ ಮಾಸಿಕ ೧೫ ಸಾವಿರ ರು., ನಿಶ್ಚಿತ ಗೌರವಧನ ನೀಡುವುದು ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ನ.೧೭ರಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ರಾಜ್ಯಮಟ್ಟದ ಅನಿರ್ದಿಷ್ಟಾವಧಿ ಅಹೋರಾತ್ರಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಎಐಯುಟಿಯುಸಿ ರಾಜ್ಯ ಸಮಿತಿ ಉಪಾಧ್ಯಕ್ಷೆ ಎಂ.ಉಮಾದೇವಿ ಹೇಳಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಆಶಾ ಕಾರ್ಯಕರ್ತೆಯರಿಗೆ ಮಾಸಿಕ ೧೫ ಸಾವಿರ ರು., ನಿಶ್ಚಿತ ಗೌರವಧನ ನೀಡುವುದು ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ನ.೧೭ರಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ರಾಜ್ಯಮಟ್ಟದ ಅನಿರ್ದಿಷ್ಟಾವಧಿ ಅಹೋರಾತ್ರಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಎಐಯುಟಿಯುಸಿ ರಾಜ್ಯ ಸಮಿತಿ ಉಪಾಧ್ಯಕ್ಷೆ ಎಂ.ಉಮಾದೇವಿ ಹೇಳಿದರು.ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ೧೭-೧೮ ವರ್ಷಗಳಿಂದ ಗ್ರಾಮೀಣ ಪ್ರದೇಶಗಳು ಹಾಗೂ ನಗರಗಳ ಕೊಳಚೆ ಪ್ರದೇಶಗಳಲ್ಲಿ ಬಡಜನರ ಮನೆ ಬಾಗಿಲಿಗೆ ಆರೋಗ್ಯ ಸೇವೆ ತಲುಪಿಸುವ ಮಹತ್ತರ ಜವಾಬ್ದಾರಿಯನ್ನು ಆಶಾ ಕಾರ್ಯಕರ್ತೆಯರು ನಿರ್ವಹಿಸುತ್ತಿದ್ದಾರೆ. ಕೊರೋನಾ ಸಂದರ್ಭದಲ್ಲಿ ಮುಂಚೂಣಿ ಕಾರ್ಯಕರ್ತೆಯರಾಗಿ ಜೀವದ ಹಂಗು ತೊರೆದು ಸೇವೆ ಸಲ್ಲಿಸಿರುವ ಅವರ ಕೊಡುಗೆ ಅಪಾರವಾಗಿದೆ ಎಂದರು.
ಹಗಲು, ರಾತ್ರಿ ಎನ್ನದೆ, ರಜೆ ಹಾಗೂ ಹಬ್ಬದ ದಿನಗಳನ್ನೂ ಲೆಕ್ಕಿಸದೆ ದುಡಿಯುವ ಆಶಾ ಕಾರ್ಯಕರ್ತೆಯರಿಗೆ ಮಾತ್ರ ಸಮರ್ಪಕ ಗೌರವಧನ ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು,ಆಶಾ ಕಾರ್ಯಕರ್ತೆಯರು ನಿರ್ವಹಿಸುವ ಕೆಲಸಕ್ಕೆ ತಕ್ಕಂತೆ ಪ್ರತಿ ತಿಂಗಳು ನಿಗದಿತ ಗೌರವಧನ ಸಿಗುತ್ತಿಲ್ಲ. ಪ್ರೋತ್ಸಾಹಧನ ಮೂರು, ನಾಲ್ಕು ತಿಂಗಳಿಗೊಮ್ಮೆ ಬಿಡುಗಡೆಯಾಗುತ್ತಿದ್ದು, ಹಲವು ಕೆಲಸಗಳ ಪ್ರೋತ್ಸಾಹಧನವೂ ಬಾಕಿ ಉಳಿದಿದೆ. ಇದರಿಂದ ಕುಟುಂಬ ನಿರ್ವಹಣೆ, ಮಕ್ಕಳ ಶಿಕ್ಷಣ ಹಾಗೂ ದೈನಂದಿನ ಜೀವನದ ಖರ್ಚುಗಳನ್ನು ನಿಭಾಯಿಸುವುದು ಕಷ್ಟಕರವಾಗಿದೆ ಎಂದರು,
ಕಳೆದ ಒಂಬತ್ತು ವರ್ಷಗಳಲ್ಲಿ ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ಗೌರವಧನವನ್ನು ಕೇವಲ ೧,೫೦೦ ಮಾತ್ರ ಹೆಚ್ಚಿಸಿದೆ. ಆದರೆ ಕೆಲಸದ ಹೊರೆ ಮಾತ್ರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೇರಳ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಹಾಗೂ ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಆಶಾ ಕಾರ್ಯಕರ್ತೆಯರಿಗೆ ಸುಮಾರು ೧೨ ಸಾವಿರ ನಿಶ್ಚಿತ ಗೌರವಧನ ನೀಡಲಾಗುತ್ತಿದೆ. ಕೇಂದ್ರದ ಪ್ರೋತ್ಸಾಹಧನ ಸೇರಿ ಕೆಲವೆಡೆ ೧೬ ಸಾವಿರ ರು.ನಿಂದ ೨೦ ಸಾವಿರ ರು.ವರೆಗೆ ಮಾಸಿಕ ಆದಾಯ ದೊರೆಯುತ್ತಿದೆ. ಕರ್ನಾಟಕದಲ್ಲಿಯೂ ಕನಿಷ್ಠ ೧೫ ಸಾವಿರ ರು. ನಿಶ್ಚಿತ ಗೌರವಧನ ನೀಡಬೇಕೆಂಬುದು ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಯಾಗಿದೆ ಎಂದರು .ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹಲವು ಬಾರಿ ಹೋರಾಟ, ಪ್ರತಿಭಟನೆ ಹಾಗೂ ಮನವಿ ಸಲ್ಲಿಸಿದ್ದಾರೆ. ಈ ಹಿಂದಿನ ಹೋರಾಟದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿಗಳು ೧೦ ಸಾವಿರ ರು.ನಿಶ್ಚಿತ ಗೌರವಧನ ನೀಡುವುದಾಗಿ ಘೋಷಿಸಿದ್ದರೂ, ಅದು ಈವರೆಗೆ ಸಮರ್ಪಕವಾಗಿ ಕಾರ್ಯರೂಪಕ್ಕೆ ಬಂದಿಲ್ಲ ಎಂದರು.
ಜಿಲ್ಲಾಧ್ಯಕ್ಷೆ ಕವಿತಾ ಮಾತನಾಡಿ, ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಮಾಸಿಕ ೧೫ ಸಾವಿರ ರು. ನಿಶ್ಚಿತ ಗೌರವಧನ ನೀಡಬೇಕು. ಸಮಸ್ತ ಆಪ್ ಮೂಲಕ ಮೊಬೈಲ್ ಕೆಲಸಗಳನ್ನು ಕಡ್ಡಾಯವಾಗಿ ಮಾಡಿಸುವುದನ್ನು ಕೈಬಿಡಬೇಕು. ಇಲ್ಲವೇ ಮೊಬೈಲ್ ಒದಗಿಸಿ, ಮೊಬೈಲ್ ಕಾರ್ಯಗಳಿಗೆ ಪ್ರತ್ಯೇಕ ಪ್ರೋತ್ಸಾಹಧನ ನೀಡಬೇಕು. ನಿವೃತ್ತಿ ಹೊಂದಿರುವ ಆಶಾ ಕಾರ್ಯಕರ್ತೆಯರಿಗೆ ಬಾಕಿ ಇರುವ ಇಡಿಗಂಟು ತಕ್ಷಣ ಬಿಡುಗಡೆ ಮಾಡಬೇಕು. ಆಶಾ ನಿಧಿ ಮೂಲಕ ಬರಬೇಕಾದ ಕೇಂದ್ರ ಸರ್ಕಾರದ ಬಾಕಿ ಪ್ರೋತ್ಸಾಹಧನವನ್ನು ಕೂಡಲೇ ಪಾವತಿಸಬೇಕು ಎಂದರು.ಮಾರ್ಗಸೂಚಿಗೆ ವಿರುದ್ಧವಾಗಿ ಹಿಂಪಡೆದಿರುವ ಆಶಾ ಸುಗಮಕಾರರ ಸೇವೆಯನ್ನು ಸೂಕ್ತ ವೇತನದೊಂದಿಗೆ ಮುಂದುವರಿಸಬೇಕು. ೨೦೨೪-೨೫ನೇ ಸಾಲಿನಲ್ಲಿ ಹೆಚ್ಚಳವಾದ ಮಾಸಿಕ ೧,೫೦೦ರ ಒಂದು ವರ್ಷದ ಬಾಕಿ ಮೊತ್ತವನ್ನು ಪಾವತಿಸಬೇಕು. ಸೇವಾ ನಿವೃತ್ತಿ ಪಡೆಯುವ ಆಶಾ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ೫ ಲಕ್ಷ ರು.ಇಡಿಗಂಟು ನೀಡಬೇಕು ಎಂದು ತಿಳಿಸಿದರು.
ನ.೧೭ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆರಂಭವಾಗುವ ಅನಿರ್ದಿಷ್ಟ ಹೋರಾಟಕ್ಕೆ ರಾಜ್ಯದ ಎಲ್ಲ ಆಶಾ ಕಾರ್ಯಕರ್ತೆಯರು ಒಗ್ಗಟ್ಟಿನಿಂದ ಪಾಲ್ಗೊಳ್ಳಬೇಕು. ಸಾರ್ವಜನಿಕರು, ಸಂಘ-ಸಂಸ್ಥೆಗಳು ಹಾಗೂ ನಾಗರಿಕರು ಆಶಾ ಕಾರ್ಯಕರ್ತೆಯರ ನ್ಯಾಯಯುತ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.ಕಾರ್ಯದರ್ಶಿ ಎನ್.ಮಂಜುಳಾ ಇದ್ದರು.