ಸಾರಾಂಶ
ಬೆಳಗಾವಿ : ಒಂದು ವೇಳೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವುದೇ ಆದಲ್ಲಿ ವೀರಶೈವ ಲಿಂಗಾಯತರನ್ನು ಆ ಸ್ಥಾನಕ್ಕೆ ಪರಿಗಣಿಸಬೇಕು ಎಂದು ಶ್ರೀಶೈಲ ಪೀಠದ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಕಾಂಗ್ರೆಸ್ ಪಕ್ಷವನ್ನು ಒತ್ತಾಯಿಸಿದ್ದಾರೆ.
ಬೆಂಗಳೂರಲ್ಲಿ ಗುರುವಾರ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ವಿಶ್ವಒಕ್ಕಲಿಗ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರು ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ಬೇಡಿಕೆ ಇಟ್ಟ ಬೆನ್ನಲ್ಲೇ ಇದೀಗ ಶ್ರೀಶೈಲ ಜಗದ್ಗುರುಗಳು ಈ ರೀತಿಯ ಹೇಳಿಕೆ ನೀಡಿರುವುದು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಚಿಕ್ಕೋಡಿ ತಾಲೂಕಿನ ಯಡೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ಚನ್ನಸಿದ್ದರಾಮ ಶ್ರೀಗಳು, ರಾಜ್ಯ ಕಾಂಗ್ರೆಸ್ ಸರ್ಕಾರ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಹಾಗೂ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವುದೇ ಆಗಿದ್ದರೆ ಆ ಸ್ಥಾನಗಳಿಗೆ ವೀರಶೈವ ಲಿಂಗಾಯತ ಸಮುದಾಯದವರನ್ನು ಪರಿಗಣಿಸಬೇಕು. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕಿದ್ದಾರೆ. ಕಾಂಗ್ರೆಸ್‌ನ ಹಿರಿಯ ಮುಖಂಡರಾದ ಎಂ.ಬಿ.ಪಾಟೀಲ, ಈಶ್ವರ ಖಂಡ್ರೆ, ಎಸ್.ಎಸ್.ಮಲ್ಲಿಕಾರ್ಜುನ, ಶಾಮನೂರು ಶಿವಶಂಕರಪ್ಪ ಹೆಸರನ್ನು ಆದ್ಯತೆ ಮೇಲೆ ಪರಿಗಣಿಸಬೇಕು. ಈ ಸಂಬಂಧ ಕಾಶಿ, ಉಜ್ಜಯಿನಿ ಜಗದ್ಗುರುಗಳ ಜೊತೆಗೂ ಚರ್ಚೆ ಮಾಡಲಾಗಿದೆ ಎಂದು ಶ್ರೀಶೈಲ ಶ್ರೀಗಳು ಹೇಳಿದರು.
ಒಂದು ವೇಳೆ ಸರ್ಕಾರ ರಚನೆ ಆರಂಭದಲ್ಲೇ ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿ ಒಡಂಬಡಿಕೆ ಮಾಡಿಕೊಂಡಿದ್ದರೆ ಅದರ ಪ್ರಕಾರ ನಡೆದುಕೊಳ್ಳಬೇಕು ಎಂದು ಶ್ರೀಗಳು ಹೇಳಿದರು.