ಸಾರಾಂಶ
ನವದೆಹಲಿ : ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಹೀಗಾಗಿ, ಜಾಮೀನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಜಾರಿ ನಿರ್ದೇಶನಾಲಯ (ಇ.ಡಿ)ಕ್ಕೆ ಮುಖಭಂಗವಾಗಿದೆ.
‘ಹೇಮಂತ್ ಸೊರೇನ್‌ಗೆ ಜಾಮೀನು ಮಂಜೂರು ಮಾಡಿದ ಜಾರ್ಖಂಡ್ ಹೈಕೊರ್ಟ್‌ನ ಜೂ.28ರ ಆದೇಶ ಸಕಾರಣವಾಗಿದೆ ಮತ್ತು ಸಮರ್ಪಕವಾಗಿದೆ. ಆ ವಿಷಯದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ. ಆದರೆ, ಜಾಮೀನು ನೀಡುವಾಗ ಹೈಕೋರ್ಟ್ ವ್ಯಕ್ತಪಡಿಸಿದ ಅಭಿಪ್ರಾಯಗಳು ಜಾಮೀನು ಅರ್ಜಿಗೆ ಮಾತ್ರ ಸೀಮಿತವಾಗಬೇಕು, ವಿಚಾರಣಾ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಬಾರದು ಎಂದು ತಿಳಿಸಿದೆ.
ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ. ಈ ವರ್ಷದ ಜನವರಿಯಲ್ಲಿ ಹೇಮಂತ್ ಸೊರೇನ್ ಅವರನ್ನು ಬಂಧಿಸಿತ್ತು. ಬಂಧನಕ್ಕೂ ಮುನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅವರು, ಜೂನ್‌ನಲ್ಲಿ ಜಾಮೀನು ಪಡೆದು ಹೊರಬಂದ ನಂತರ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.