ಸಾರಾಂಶ
ಬೆಂಗಳೂರು : ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ನೀಡಿರುವ ತೀರ್ಪು ರಾಜಕೀಯ ಪ್ರೇರಿತ ಎಂದು ಸಚಿವ ಜಮೀರ್ ಅಹ್ಮದ್ ನೀಡಿದ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ.
ಈ ಬಗ್ಗೆ ಹಿರಿಯ ಸಚಿವರು ಸಂಪುಟ ಸಭೆಯಲ್ಲೂ ಆಕ್ಷೇಪ ವ್ಯಕ್ತಪಡಿಸಿದ್ದು, ಬಳಿಕ ತಮ್ಮ ಮಾತಿಗೆ ಕ್ಷಮೆಯಾಚಿಸಲು ಸಿದ್ಧ ಎಂದು ಜಮೀರ್ ಸ್ಪಷ್ಟನೆ ನೀಡಿದ್ದಾರೆ.
ಮುಡಾ ಪ್ರಕರಣದ ಸಂಬಂಧ ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ಬುಧವಾರ ಪ್ರತಿಕ್ರಿಯೆ ನೀಡುವ ವೇಳೆ ಸಚಿವ ಜಮೀರ್ ಅಹಮದ್ ಖಾನ್ ಅವರು, ಇದೊಂದು ‘ಪೊಲಿಟಿಕಲ್ ಜಡ್ಜ್‌ಮೆಂಟ್’ ಎಂದು ಹೇಳಿದ್ದರು. ಸಚಿವರ ಹೇಳಿಕೆ ಬಗ್ಗೆ ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಜತೆಗೆ ಕಾಂಗ್ರೆಸ್‌ನ ಹಿರಿಯ ನಾಯಕರು ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಂತೆ ಗುರುವಾರ ಜಮೀರ್ ಅಹಮದ್ ಖಾನ್ ಸ್ಪಷ್ಟನೆ ನೀಡಿದರು.
ತೀರ್ಪಿನ ಬಗ್ಗೆ ಹೇಳಿಲ್ಲ:ಹೈಕೋರ್ಟ್ ತೀರ್ಪು ಬಂದ ನಂತರ ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿವೆ ಎಂಬುದು ತಮ್ಮ ಅಭಿಪ್ರಾಯವಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ತನಿಖೆ ನಡೆಯಲಿ, ಕಾನೂನು ಹೋರಾಟ ನಡೆಸುತ್ತೇನೆ ಎಂದು ಹೇಳಿದ್ದಾರೆ. ಎಲ್ಲ ಸಚಿವರು ಮುಖ್ಯಮಂತ್ರಿಗಳ ಜೊತೆಗಿದ್ದಾರೆ. ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದೆ. ಅದನ್ನು ಹೊರತುಪಡಿಸಿ ನ್ಯಾಯಾಲಯದ ತೀರ್ಪಿನ ಬಗ್ಗೆ ಯಾವುದೇ ಅಭಿಪ್ರಾಯ ತಿಳಿಸಿಲ್ಲ, ರಾಜಕೀಯ ಪ್ರೇರಿತ ಆರೋಪ ಇದಾಗಿದೆ ಎಂಬುದೇ ನನ್ನ ವಾದವಾಗಿತ್ತು ಎಂದು ಜಮೀರ್ ಅಹ್ಮದ್ ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟನೆ ನೀಡಿದರು.
ಸಂಪುಟ ಸಭೆಯಲ್ಲೂ ಸ್ಪಷ್ಟನೆ:ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವ ಜಮೀರ್ ಅವರ ಹೇಳಿಕೆ ಬಗ್ಗೆ ಹಿರಿಯ ಸಚಿವರು ನೇರವಾಗಿ ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಜಮೀರ್, ಕೋರ್ಟ್ ತೀರ್ಪು ಉದ್ದೇಶಿಸಿ ತಾವು ಆ ರೀತಿ ಹೇಳಲಿಲ್ಲ, ಬದಲಾಗಿ ರಾಜಕೀಯ ಪ್ರೇರಿತ ಆರೋಪ ಎಂಬ ಭಾವನೆಯಿಂದ ಹೇಳಿದ್ದಾಗಿ ಸಮಜಾಯಿಷಿ ನೀಡಿದರೆಂದು ಗೊತ್ತಾಗಿದೆ.