ಸಾರಾಂಶ
ನವದೆಹಲಿ : ದೇಶದಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯ ಸುರಕ್ಷತೆಗೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಸಲಹೆ ನೀಡಲು ಕೇಂದ್ರ ಸರ್ಕಾರ ಸಮಿತಿಯೊಂದನ್ನು ರಚಿಸುವುದಾಗಿ ಪ್ರಕಟಿಸಿದೆ. ಈ ಸಮಿತಿಯ ಬಳಿ ವೈದ್ಯರು, ವೈದ್ಯಕೀಯ ಸಂಘಗಳ ಪ್ರತಿನಿಧಿಗಳು ಹಾಗೂ ಎಲ್ಲಾ ರಾಜ್ಯ ಸರ್ಕಾರಗಳು ತಮ್ಮ ಸಲಹೆಯನ್ನು ಹಂಚಿಕೊಳ್ಳಲು ಅವಕಾಶ ನೀಡುವುದಾಗಿ ತಿಳಿಸಿದೆ.
ಕೋಲ್ಕತಾದ ಆರ್.ಜಿ.ಕರ್ ಮೆಡಿಕಲ್ ಕಾಲೇಜಿನಲ್ಲಿ ನಡೆದ ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ದೇಶಾದ್ಯಂತ ಶನಿವಾರ ವೈದ್ಯರು ಕೆಲಸ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ, ಮುಷ್ಕರನಿರತ ವೈದ್ಯರ ಪ್ರತಿನಿಧಿಯಾಗಿ ರೆಸಿಡೆಂಟ್ ಡಾಕ್ಟರ್‌ಗಳ ಸಂಘ ಹಾಗೂ ಭಾರತೀಯ ವೈದ್ಯಕೀಯ ಸಂಘದ ಸದಸ್ಯರು ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾಗಿ ಚರ್ಚಿಸಿದರು. ಬಳಿಕ ಆರೋಗ್ಯ ಸಚಿವಾಲಯ ಪ್ರಕಟಣೆ ಹೊರಡಿಸಿದ್ದು, ಅದರಲ್ಲಿ, ‘ವೈದ್ಯಕೀಯ ಸಿಬ್ಬಂದಿಯ ಸುರಕ್ಷತೆಯ ಬಗ್ಗೆ ಸಲಹೆಗಳನ್ನು ನೀಡಲು ಸಮಿತಿ ರಚಿಸಲು ನಿರ್ಧರಿಸಲಾಗಿದೆ’ ಎಂದು ತಿಳಿಸಲಾಗಿದೆ.
‘ಆರೋಗ್ಯ ಸಿಬ್ಬಂದಿಯ ಸುರಕ್ಷತೆಗಾಗಿ ಈಗಾಗಲೇ 26 ರಾಜ್ಯಗಳು ಪ್ರತ್ಯೇಕ ಕಾಯ್ದೆಯನ್ನು ಪಾಸು ಮಾಡಿವೆ’ ಎಂದೂ ಆರೋಗ್ಯ ಸಚಿವಾಲಯ ಹೇಳಿದೆ.