ಬೆಂಗಳೂರು, ಮಂಗ್ಳೂರಲ್ಲಿ 14ಕ್ಕೆ ಪ್ರಧಾನಿ ಮೋದಿ ಶೋ

| Published : Apr 08 2024, 06:27 AM IST

Narendra Modi

ಸಾರಾಂಶ

ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಎರಡನೇ ಬಾರಿ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರು ಏ.14ರಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕೂಟದಲ್ಲಿ ಮತ್ತಷ್ಟು ಉತ್ಸಾಹ ಹೆಚ್ಚಿಸಲಿದೆ.

ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಎರಡನೇ ಬಾರಿ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರು ಏ.14ರಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕೂಟದಲ್ಲಿ ಮತ್ತಷ್ಟು ಉತ್ಸಾಹ ಹೆಚ್ಚಿಸಲಿದೆ.

ಮೋದಿ ಅವರು ಬೆಂಗಳೂರು ಮತ್ತು ಮಂಗಳೂರಿನಲ್ಲಿ ಪಕ್ಷದ ಪರ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದು, ಮಂಗಳೂರಿನಲ್ಲಿ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರಿನಲ್ಲಿ ರೋಡ್ ಶೋ ನಡೆಸುವ ಕುರಿತಂತೆ ಇನ್ನೂ ರೂಪರೇಷೆ ಸಿದ್ಧವಾಗಿಲ್ಲ. ಇನ್ನೆರಡು ದಿನಗಳಲ್ಲಿ ಅಂತಿಮಗೊಳಿಸಲಾಗುವುದು ಎಂದು ತಿಳಿದು ಬಂದಿದೆ.

ಚುನಾವಣೆಯ ಕಾವು ಏರುವ ಮೊದಲೇ ಮೋದಿ ಅವರು ಮಾ.16ರಂದು ಕಲಬುರಗಿಗೆ ಆಗಮಿಸಿ ಪಕ್ಷದ ಪರ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಿದ್ದರು. ಅದೇ ದಿನ ಚುನಾವಣಾ ವೇಳಾಪಟ್ಟಿ ಘೋಷಣೆಯಾಯಿತು. ನಂತರ ಮಾ.18ರಂದು ಶಿವಮೊಗ್ಗಕ್ಕೆ ಆಗಮಿಸಿ ಪಕ್ಷದ ಸಮಾವೇಶದಲ್ಲಿ ಭಾಗವಹಿಸಿದ್ದರು. ಆದರೆ, ಆಗಿನ್ನೂ ಚುನಾವಣೆಯ ಕಾವು ಏರಿರಲಿಲ್ಲ. ಅಭ್ಯರ್ಥಿಗಳ ಘೋಷಣೆಯೂ ಪೂರ್ಣ ಪ್ರಮಾಣದಲ್ಲಿ ಆಗಿರಲಿಲ್ಲ.

ಇದೀಗ ಮೊದಲ ಹಂತದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿದಿದ್ದು, ಭರದ ಪ್ರಚಾರ ಆರಂಭವಾಗಿದೆ. ಟಿಕೆಟ್ ಹಂಚಿಕೆ ಕುರಿತಂತೆ ಉಂಟಾಗಿದ್ದ ಗೊಂದಲಗಳೂ ಹೆಚ್ಚೂ ಕಡಮೆ ಅಂತ್ಯವಾಗಿದೆ. ಕಳೆದ ವಾರವಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಿ ಪಕ್ಷದ ಹಿರಿಯ ನಾಯಕರ ಸಭೆ ನಡೆಸಿ ಎಲ್ಲ ಗೊಂದಲಗಳಿಗೂ ತೆರೆ ಎಳೆದಿದ್ದರು. ಅಲ್ಲದೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್‌.ಮಂಜುನಾಥ್ ಪರ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ರೋಡ್‌ ಶೋ ಕೂಡ ನಡೆಸಿದ್ದರು.

ಈಗ ಪ್ರಧಾನಿ ಮೋದಿ ಅವರು ಪ್ರಚಾರಕ್ಕೆ ಆಗಮಿಸುತ್ತಿರುವುದು ಉಭಯ ಪಕ್ಷಗಳಲ್ಲಿ ಸಾಕಷ್ಟು ಭರವಸೆ ಮೂಡಿಸಿದ್ದು, ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಿಸುವ ನಿರೀಕ್ಷೆಯಿದೆ.