ಸಾರಾಂಶ
ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಕಿತ್ತು ಅದನ್ನು ಧರ್ಮಾಧಾರಿತವಾಗಿ ಹಂಚಿಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಹರಿಹಾಯ್ದಿದ್ದಾರೆ.
ಹಿಸಾರ್ (ಹರ್ಯಾಣ): ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಕಿತ್ತು ಅದನ್ನು ಧರ್ಮಾಧಾರಿತವಾಗಿ ಹಂಚಿಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಹರಿಹಾಯ್ದಿದ್ದಾರೆ.ಸೋಮವಾರ ಹರ್ಯಾಣದ ಹಿಸಾರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮೋದಿ, ಕರ್ನಾಟಕದಲ್ಲಿ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿ ನೀಡಿದ್ದನ್ನು ಪ್ರಸ್ತಾಪಿಸಿದರು. ‘ಕರ್ನಾಟಕದ ಕಾಂಗ್ರೆಸ್ ಸರ್ಕಾರ ಎಸ್‌ಸಿ, ಎಸ್‌ಟಿ, ಒಬಿಸಿ ಹಕ್ಕುಗಳನ್ನು ಕಿತ್ತುಕೊಂಡು ಧರ್ಮದ ಆಧಾರದ ಮೇಲೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಿದೆ.
ಆದರೆ ಅಂಬೇಡ್ಕರ್ ಅವರು ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಲಾಗುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದರು. ನಮ್ಮ ಸಂವಿಧಾನ ಧರ್ಮಾಧಾರಿತ ಮೀಸಲು ನಿಷೇಧಿಸಿದೆ. ಕಾಂಗ್ರೆಸ್ ಸರ್ಕಾರ ಒಂದು ಸಮುದಾಯದ ತುಷ್ಟೀಕರಣಕ್ಕಾಗಿ ಸಂವಿಧಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.‘ನಮ್ಮ ಸಂವಿಧಾನದಲ್ಲಿ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ಸಮುದಾಯಗಳಿಗೆ ಮೀಸಲಾತಿ ನೀಡಲಾಗಿದೆ. ಆದರೆ ರಾಜಕೀಯ ಆಟವಾಡುತ್ತಿರುವ ಕಾಂಗ್ರೆಸ್ ಬಾಬಾಸಾಹೇಬ್ ಅಂಬೇಡ್ಕರ್ ಕಂಡ ಕನಸಿಗೆ ಹಾಗೂ ಸಂವಿಧಾನದ ನಿಬಂಧನೆಗಳ ಬೆನ್ನಿಗೆ ಚೂರಿ ಹಾಕುತ್ತಿದೆ’ ಎಂದು ಟೀಕಿಸಿದರು.
ಭ್ರಷ್ಟಾಚಾರದಲ್ಲಿ ಕರ್ನಾಟಕ ನಂ1: ಮೋದಿ ಚಾಟಿ
ಯಮುನಾನಗರ (ಹರ್ಯಾಣ): ‘ಕರ್ನಾಟಕದ ಕಾಂಗ್ರೆಸ್ ಸರ್ಕಾರ, ರಾಜ್ಯವನ್ನು ಭ್ರಷ್ಟಾಚಾರದಲ್ಲಿ ನಂ.1 ಮಾಡಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಸೋಮವಾರ ಇಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ‘ಕರ್ನಾಟಕದ ಮುಖ್ಯಮಂತ್ರಿಯ ಆಪ್ತರೊಬ್ಬರೇ ಇತ್ತೀಚೆಗೆ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಭ್ರಷ್ಟಾಚಾರದಲ್ಲಿ ನಂ.1 ಮಾಡಿದೆ. ಇದು ಕಾಂಗ್ರೆಸ್‌ನ ಭ್ರಷ್ಟಾಚಾರವನ್ನು ತೋರಿಸುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಇತ್ತೀಚೆಗೆ ನೀಡಿದ್ದರು ಎನ್ನಲಾದ ಹೇಳಿಕೆಯೊಂದನ್ನು ಉಲ್ಲೇಖಿಸಿ ಕುಟುಕಿದರು.
ಇತ್ತೀಚೆಗೆ ಸರ್ಕಾರಿ ಕಾರ್ಯಕ್ರಮವೊಂದಲ್ಲಿ ಮಾತನಾಡಿದ್ದ ರಾಯರೆಡ್ಡಿ, ‘ರಾಜ್ಯದಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಭ್ರಷ್ಟಾಚಾರ ಎಗ್ಗಿಲ್ಲದೇ ನಡೆಯುತ್ತಿದೆ. ಹಿಂದೆಲ್ಲಾ ಕಟ್ಟಡಗಳು 5-6 ದಶಕ ಬಾಳಿಕೆ ಬರುತ್ತಿದ್ದವು. ಆದರೆ ಈಗ 10 ವರ್ಷಕ್ಕೆಲ್ಲಾ ಕುಸಿದು ಬೀಳುತ್ತಿದೆ. ಇದಕ್ಕೆ ಭ್ರಷ್ಟಾಚಾರವೇ ಕಾರಣ. ಭ್ರಷ್ಟಾಚಾರದಲ್ಲಿ ಕರ್ನಾಟಕ ನಂ.1 ಆಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು ಎಂದು ವರದಿಯಾಗಿತ್ತು. ಬಳಿಕ ಅವರು, ‘ನಾನು ಆ ರೀತಿ ಹೇಳಿಲ್ಲ. ಮಾಧ್ಯಮಗಳಲ್ಲಿ ತಪ್ಪಾಗಿ ವರದಿಯಾಗಿದೆ’ ಎಂದು ಸ್ಪಷ್ಟನೆ ನೀಡಿದ್ದರು.
ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ದರ ಏರಿಕೆ ಹೊರೆ: ಮೋದಿ
ಯಮುನಾನಗರ (ಹರ್ಯಾಣ): ಕರ್ನಾಟಕ ಸೇರಿದಂತೆ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಸಾರ್ವಜನಿಕರಿಗೆ ದರ ಏರಿಕೆಯ ಮೂಲಕ ದ್ರೋಹ ಬಗೆಯಲಾಗುತ್ತಿದೆ. ಅಭಿವೃದ್ಧಿ ಚಟುವಟಿಕೆಗಳು ಪೂರ್ಣ ಸ್ಥಗಿತವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸೋಮವಾರ ಇಲ್ಲಿ ಆಧುನಿಕ ಉಷ್ಣ ವಿದ್ಯುತ್ ಘಟಕದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಪ್ರಧಾನಿ, ‘ಕಾಂಗ್ರೆಸ್ ಅಧಿಕಾರದಲ್ಲಿರುವ ಕರ್ನಾಟಕದಲ್ಲಿ ವಿದ್ಯುತ್‌ನಿಂದ ಹಿಡಿದು ಬಸ್ ಟಿಕೆಟ್ ದರದ ವರೆಗೆ ಎಲ್ಲವೂ ದುಬಾರಿಯಾಗುತ್ತಿದೆ. ರಾಜ್ಯ ಸರ್ಕಾರವು ವಿವಿಧ ತೆರಿಗೆಗಳನ್ನು ಹೇರುತ್ತಿರುವುದರಿಂದ ಹಣದುಬ್ಬರವಾಗುತ್ತಿದೆ. ಈ ಬಗ್ಗೆ ಜನ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಳ್ಳುತ್ತಿದ್ದು, ಕಾಂಗ್ರೆಸ್ ಸರ್ಕಾರದ ಬಣ್ಣ ಬಯಲು ಮಾಡುತ್ತಿದ್ದಾರೆ’ ಎಂದರು.
ಕರ್ನಾಟಕ ಸರ್ಕಾರ ಇತ್ತೀಚೆಗೆ ಡೀಸೆಲ್ ಬೆಲೆ, ವಿದ್ಯುತ್ ದರ, ನೀರಿನ ದರ, ಬಸ್ ಟಿಕೆಟ್, ಮೆಟ್ರೋ ರೈಲು ಪ್ರಯಾಣ ದರ ಹೆಚ್ಚಿಸಿತ್ತು.