ಸಾರಾಂಶ
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಆಡಳಿತದಲ್ಲಿ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳು ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದನ್ನು ಸಹಿಸುವುದಿಲ್ಲ ಎಂದು ಸಚಿವ ಕೆ.ಎನ್. ರಾಜಣ್ಣ ಹಾಗೂ ಕೆಲ ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಅವರು ಶಾಸಕರು, ಸಚಿವರೊಂದಿಗೆ ಸಭೆ ನಡೆಸಿದ ಬೆನ್ನಲ್ಲೇ ಹಿರಿಯ ಅಧಿಕಾರಿಗಳನ್ನೂ ಕರೆಸಿಕೊಂಡು ಮಾತನಾಡಿದ್ದಾರೆ. ತನ್ಮೂಲಕ ಆಡಳಿತದಲ್ಲಿ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳು ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದನ್ನು ಸಹಿಸುವುದಿಲ್ಲ ಎಂದು ಸಚಿವ ಕೆ.ಎನ್. ರಾಜಣ್ಣ ಹಾಗೂ ಕೆಲ ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ದೂರು ನೀಡಿದ್ದಾರೆ ಎನ್ನಲಾಗಿದೆ.ರಾಜ್ಯ ಕಾಂಗ್ರೆಸ್ ಉಸ್ತುವಾರಿಯ ಧೋರಣೆ ತಾವೇ ‘ಸೂಪರ್ ಸಿಎಂ’ ಎಂಬಂತಿದೆ. ಸುರ್ಜೇವಾಲಾ ಅವರು ಕೆಲ ಪ್ರಮುಖ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಅಧಿಕಾರಿಗಳನ್ನು ಕರೆಸಿ ಮಾತನಾಡಿದ್ದಾರೆ ಎಂಬ ಆರೋಪವಿದೆ.
ಈ ಬಗ್ಗೆ ಹೈಕಮಾಂಡ್ ಗಮನಕ್ಕೆ ತರಬೇಕು. ಮುಖ್ಯಮಂತ್ರಿಗಳ ಅಧಿಕಾರ ವ್ಯಾಪ್ತಿಗೆ ಪಕ್ಷದ ಉಸ್ತುವಾರಿ ಬರುವುದು ಸಂವಿಧಾನಬಾಹಿರ. ಇಂತಹ ನಡೆಯನ್ನು ಯಾವುದೇ ಕಾರಣಕ್ಕೂ ಸಹಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಧಿಕಾರಿಗಳೊಂದಿಗೆ ಸುರ್ಜೇವಾಲಾ ಅವರು ನಡೆಸಿದ್ದಾರೆನ್ನಲಾದ ಸಭೆ ಕುರಿತು ಆಡಳಿತ ಪಕ್ಷದ ಸಚಿವರಲ್ಲೇ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಇನ್ನು ಜೆಡಿಎಸ್ ಪಕ್ಷ ಕೂಡ ಈ ಕುರಿತು ಕಾಂಗ್ರೆಸ್ ಕೂಡಲೇ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿತ್ತು. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ತಾಳ್ಮೆ ಕಳೆದುಕೊಂಡಿರುವ ಕೆಲ ಸಚಿವರು ಮುಖ್ಯಮಂತ್ರಿಗಳೊಂದಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.