ಸಾರಾಂಶ
ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಅಧ್ಯಕ್ಷೆ ರೇಖಾ ಶರ್ಮಾ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಮಾಡಲು ದ್ರೌಪದಿ ಮುರ್ಮು ಅವರನ್ನು ಕೋರಿದ್ದಾರೆ
ನವದೆಹಲಿ: ತೀವ್ರ ಹಿಂಸಾಚಾರದಿಂದ ನಲುಗುತ್ತಿರುವ ಸಂದೇಶ್‌ಖಾಲಿ ಪ್ರದೇಶವನ್ನು ತಿಳಿಗೊಳಿಸುವ ನಿಟ್ಟಿನಲ್ಲಿ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತವನ್ನು ಜಾರಿಗೆ ತರಬೇಕೆಂದು ರಾಷ್ಟ್ರೀಯ ಮಹಿಳಾ ಆಯೋಗದ ಆಧ್ಯಕ್ಷೆ ರೇಖಾ ಶರ್ಮಾ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿದ್ದಾರೆ.
ತಮ್ಮ ಇತ್ತೀಚಿನ ಸಂದೇಶ್‌ಖಾಲಿ ಭೇಟಿಯ ವರದಿಯನ್ನು ರಾಷ್ಟ್ರಪತಿಗೆ ಸಲ್ಲಿಸಿದ ಬಳಿಕ ಪ್ರತಿಕ್ರಿಯಿಸಿದ ಶರ್ಮಾ, ‘ಸಂದೇಶ್‌ಖಾಲಿಯಲ್ಲಿ ಈ ಹಿಂದೆಯೂ ಹಲವು ಬಾರಿ ದೌರ್ಜನ್ಯ ನಡೆದಿದ್ದರೂ ಪಶ್ಚಿಮ ಬಂಗಾಳ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವಂತೆ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಲಾಗಿದೆ’ ಎಂದು ರೇಖಾ ಶರ್ಮಾ ತಿಳಿಸಿದರು. ಇದಕ್ಕೂ ಮೊದಲು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗ, ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವೂ ಕೂಡ ರಾಷ್ಟ್ರಪತಿ ಆಡಳಿತ ಜಾರಿಗೆ ಮನವಿ ಸಲ್ಲಿಸಿತ್ತು.