ಸಾರಾಂಶ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ಕು ಮಂದಿ ಉಗ್ರರು ಹತರಾಗಿದ್ದಾರೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ಕು ಮಂದಿ ಉಗ್ರರು ಹತರಾಗಿದ್ದಾರೆ. ಈ ಸಂದರ್ಭದಲ್ಲಿ ಉಗ್ರರ ಗುಂಡೇಟಿಗೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಮೊಡೆರ್ಗಾಮ್ ಗ್ರಾಮದಲ್ಲಿ ಉಗ್ರರು ಬಂದಿರುವ ಮಾಹಿತಿ ಆಧರಿಸಿ ಶೋಧ ಕಾರ್ಯಾಚರಣೆ ನಡೆಯುತ್ತಿತ್ತು. ಆಗ ಭದ್ರತಾ ಸಿಬ್ಬಂದಿಯ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. ಈ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ಉಗ್ರರ ಪತ್ತೆಗೆ ಶೋಧ ಕಾರ್ಯ ನಡೆಸಿದ ಭದ್ರತಾ ಪಡೆಗಳು ನಾಲ್ವರು ಉಗ್ರರನ್ನು ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ವೇಳೆ, ಚಿನ್ನಿಗಾಂ ಎಂಬಲ್ಲೂ ಪ್ರತ್ಯೇಕ ಎನ್‌ಕೌಂಟರ್ ನಡೆದಿದೆ.
ಈ ಪ್ರದೇಶಲ್ಲಿ ಇತ್ತೀಚೆಗೆ ಭಯೋತ್ಪಾದಕ ಚಟುವಟಿಕೆಗಳು ಉಲ್ಬಣಿಸಿವೆ. ಕಳೆದ ತಿಂಗಳಷ್ಟೇ, ದೋಡಾ ಜಿಲ್ಲೆಯ ಗಂಧೋ ಪ್ರದೇಶದಲ್ಲಿ ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದವು.