ಸಾರಾಂಶ
ಜಮ್ಮು-ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದು, ಐವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ನಡೆದ ಎರಡು ಪ್ರತ್ಯೇಕ ಗುಂಡಿನ ದಾಳಿಗಳಲ್ಲಿ 17 ಮಂದಿ ಸಾವನ್ನಪ್ಪಿದ್ದಾರೆ.
ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಅಡಿಗಮ್ ಪ್ರದೇಶದಲ್ಲಿ ಶನಿವಾರ ಭದ್ರತಾ ಸಿಬ್ಬಂದಿ ಹಾಗೂ ಉಗ್ರರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಪೊಲೀಸ್ ಅಧಿಕಾರಿ ಸೇರಿದಂತೆ ಐವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.
ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿ, ಸ್ಥಳೀಯ ಪೊಲೀಸರು ಹಾಗೂ ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್) ಜಂಟಿಯಾಗಿ ಶೋಧ ಕಾರ್ಯ ನಡೆಸುವ ವೇಳೆ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಎರಡೂ ಗುಂಪುಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ. ಮೃತಪಟ್ಟ ಉಗ್ರರ ಗುರುತು ಪತ್ತೆಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.==
ದ. ಆಫ್ರಿಕಾದಲ್ಲಿ 2 ಸಾಮೂಹಿಕ ಗುಂಡಿನ ದಾಳಿಗೆ 17 ಮಂದಿ ಬಲಿಜೋಹಾನ್ಸ್ಬರ್ಗ್: ದಕ್ಷಿಣ ಆಫ್ರಿಕಾದ ಗ್ರಾಮೀಣ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ನಡೆದ 2 ಸಾಮೂಹಿಕ ಗುಂಡಿನ ದಾಳಿಯಲ್ಲಿ 15 ಮಂದಿ ಮಹಿಳೆಯರು ಸೇರಿದಂತೆ 17 ಮಂದಿ ಸಾವನ್ನಪ್ಪಿದ್ದಾರೆ. ಓರ್ವ ಗಂಭೀರ ಸ್ಥಿತಿಯಲ್ಲಿದ್ದಾನೆ.ಈ ಘಟನೆ ಬಳಿಕ ಶಂಕಿತ ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಗ್ನೇಯ ದಕ್ಷಿಣ ಆಫ್ರಿಕಾದ ಪೂರ್ವ ಕೇಪ್ ಪ್ರಾಂತ್ಯದ ಲುಸಿಕಿಸಿಕಿ ನಗರದಲ್ಲಿನ ಅಕ್ಕ ಪಕ್ಕದ 2 ಮನೆಗಳಲ್ಲಿ ಗುಂಡಿನ ದಾಳಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋವೊಂದನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.ಈ ಗುಂಡಿನ ದಾಳಿಯಲ್ಲಿ ಒಂದು ಮನೆಯಲ್ಲಿ 12 ಮಹಿಳೆಯರು ಮತ್ತು ಒಬ್ಬ ಪುರುಷ ಹಾಗೂ ಇನ್ನೊಂದು ಮನೆಯಲ್ಲಿ 3 ಮಹಿಳೆಯರು ಮತ್ತು ಒಬ್ಬ ಪುರುಷ ಸಾವನ್ನಪ್ಪಿದ್ದಾರೆ.==
ಉಗ್ರರ ಬೆದರಿಕೆ: ಮುಂಬೈ ಪ್ರಮುಖ ಸ್ಥಳಗಳಲ್ಲಿ ಭದ್ರತೆ ಹೆಚ್ಚಳಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಭಯೋತ್ಪಾದಕ ದಾಳಿಯ ಬೆದರಿಕೆ ಬಗ್ಗೆ ಕೇಂದ್ರೀಯ ಏಜೆನ್ಸಿಗಳು ಮಾಹಿತಿ ನೀಡಿವೆ. ಇದರ ಬೆನ್ನಲ್ಲೇ ಪೊಲೀಸರು ಮುಂಬೈನ ಜನ ನಿಬಿಡ ಪ್ರದೇಶ ಮತ್ತು ಧಾರ್ಮಿಕ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಿದ್ದಾರೆ.ಪ್ರಮುಖವಾಗಿ ಮುಂಬೈನ ಹಲವು ಧಾರ್ಮಿಕ ಸ್ಥಳಗಳಲ್ಲಿ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ. ಅಲ್ಲದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದಲ್ಲಿ ಮಾಹಿತಿ ನೀಡುವಂತೆ ಆಡಳಿತ ಮಂಡಳಿಗೆ ಸೂಚಿಸಿದ್ದಾರೆ. ಇನ್ನು ಧಾರ್ಮಿಕ ಸ್ಥಳ ಹಾಗೂ ಜನ ಸಂಚಾರ ಹೆಚ್ಚಿರುವ ಪ್ರದೇಶಗಳಲ್ಲಿ ಮಾಕ್ ಡ್ರಿಲ್ ಮಾಡಲು ಪೊಲೀಸ್ ಸಿಬ್ಬಂದಿಗಳಿಗೆ ಅಧಿಕಾರಿಗಳು ಸೂಚಿಸಿದ್ದಾರೆ.