ಸಾರಾಂಶ
ಪಹಲ್ಗಾಂನಲ್ಲಿ 26 ಪ್ರವಾಸಿಗರ ನರಮೇಧ ಮಾಡಿದ ಉಗ್ರರ ಬೇಟೆಯಾಡುವ ಭಾರತದ ಪ್ರಯತ್ನಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಅಮೆರಿಕ ಘೋಷಿಸಿದೆ
ವಾಷಿಂಗ್ಟನ್: ಪಹಲ್ಗಾಂನಲ್ಲಿ 26 ಪ್ರವಾಸಿಗರ ನರಮೇಧ ಮಾಡಿದ ಉಗ್ರರ ಬೇಟೆಯಾಡುವ ಭಾರತದ ಪ್ರಯತ್ನಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಅಮೆರಿಕ ಘೋಷಿಸಿದೆ. ಈ ಮೂಲಕ ಉಗ್ರರ ಮಟ್ಟಹಾಕಲು ಭಾರತ ಸರ್ಕಾರ ಕೈಗೊಂಡಿರುವ ವಿವಿಧ ಕ್ರಮಗಳನ್ನು ಬೆಂಬಲಿಸಿದೆ.
ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಅಮೆರಿಕದ ಗುಪ್ತಚರ ಸಂಸ್ಥೆ ಮುಖ್ಯಸ್ಥ ತುಳಸಿ ಗಬ್ಬಾರ್ಡ್, ‘ಹಿಂದೂಗಳನ್ನು ಕೊಂದ ಭಯಾನಕ ಇಸ್ಲಾಮಿಕ್ ದಾಳಿ ವಿರುದ್ಧ ಅಮೆರಿಕ ಭಾರತದೊಂದಿಗೆ ಒಗ್ಗಟ್ಟಿನಿಂದ ನಿಲ್ಲಲಿದೆ. ಈ ಘೋರ ದಾಳಿಗೆ ಕಾರಣರಾದವರನ್ನು ನೀವು ಬೇಟೆಯಾಡುವಾಗ ನಾವು ನಿಮ್ಮೊಂದಿಗೆ ಇರುತ್ತೇವೆ’ ಎಂದಿದ್ದಾರೆ. ಜೊತೆಗೆ ಭಯೋತ್ಪಾದಕ ದಾಳಿಯಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಈಗಾಗಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಫ್ರಾನ್ಸ್ ಅಧ್ಯಕ್ಷ ಎಮ್ಯಾನುವೆಲ್ ಮ್ಯಾಕ್ರನ್ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಸೇರಿದಂತೆ ಹಲವು ಜಾಗತಿಕ ನಾಯಕರು ದಾಳಿಗೆ ಕಾರಣರಾದವರನ್ನು ಶಿಕ್ಷಿಸುವ ಪ್ರಧಾನಿ ಮೋದಿಯವರ ಪ್ರಯತ್ನಗಳನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.