ಸಾರಾಂಶ
ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಕರಡನ್ನು ಅಂಗೀಕರಿಸಲು ವಿಶೇಷ ಅಧಿವೇಶನ ಕರೆಯಲಾಗಿದೆ. ಇದು ಅಧಿವೇಶನದಲ್ಲಿ ಅಂಗೀಕಾರವಾದರೆ ಈ ಕಾಯ್ದೆಯನ್ನು ಅಂಗೀಕರಿಸಿದ ದೇಶದ ಮೊದಲ ರಾಜ್ಯ ಆಗುವ ಸಾಧ್ಯತೆಯಿದೆ.
ಡೆಹ್ರಾಡೂನ್: ಏಕರೂಪ ನಾಗರಿಕ ಸಂಹಿತೆಯನ್ನು ಉತ್ತರಾಖಂಡದಲ್ಲಿ ಜಾರಿಗೊಳಿಸಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಫೆ.5ರಿಂದ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.
ಇದರೊಂದಿಗೆ ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತಂದ ಮೊದಲ ರಾಜ್ಯ ಎಂಬ ಶ್ರೇಯಕ್ಕೆ ಪಾತ್ರವಾಗಲಿದೆ. ಈ ಕಾಯ್ದೆಯನ್ನು ಜಾರಿಗೆ ತರುವುದಾಗಿ ಧಾಮಿ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದರು.
ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು. ‘ನಿವೃತ್ತ ಸುಪ್ರೀಂ ಕೋರ್ಟ್ ನ್ಯಾ. ರಂಜನ ಪ್ರಕಾಶ್ ದೇಸಾಯಿ ನೇತೃತ್ವದ ಸಮಿತಿ ಕರಡು ಪ್ರತಿಯನ್ನು ಫೆ.2ರಂದು ಸರ್ಕಾರಕ್ಕೆ ಸಲ್ಲಿಸಲಿದೆ.
ಅದನ್ನು ಮೊದಲಿಗೆ ಸಂಪುಟ ಸಭೆಯಲ್ಲಿ ಮಂಡಿಸಿ ಅಂಗೀಕರಿಸಲಾಗುವುದು. ನಂತರ ಫೆ.5ರಂದು ಈ ಕರಡನ್ನು ಅಂಗೀಕರಿಸುವುದಕ್ಕಾಗಿಯೇ ವಿಶೇಷ ಅಧಿವೇಶನವನ್ನು ಕರೆಯಲಾಗಿದ್ದು, ಅಲ್ಲಿ ಸೂಕ್ತ ಚರ್ಚೆಯ ನಂತರ ಏಕರೂಪ ನಾಗರಿಕ ಸಂಹಿತೆಯನ್ನು ಕಾಯ್ದೆಯ ರೂಪಕ್ಕೆ ತರಲಾಗುವುದು’ ಎಂದು ತಿಳಿಸಿದರು.