ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ನುಡಿದಂತೆ ನಡೆದ ರಾಜ್ಯ ಕಾಂಗ್ರೆಸ್ ಸರ್ಕಾರ ಪರಿಣಾಮಕಾರಿಯಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಸಾರ್ಥಕತೆಯನ್ನು ಮೆರೆದಿದೆ. ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ, ಭ್ರಷ್ಟಾಚಾರ ಇಲ್ಲದೆ ಯಾವುದಾದರು ಯೋಜನೆಗಳು ದೇಶದಲ್ಲಿ ಸರಿಯಾಗಿ ಬಡವರು, ಮಧ್ಯಮ ವರ್ಗದವರಿಗೆ ತಲುಪಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.ಜಿಲ್ಲಾಡಳಿತ, ಜಿಪಂ, ಜಿಲ್ಲಾ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಹಯೋಗದಲ್ಲಿ ಬುಧವಾರ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಗ್ಯಾರಂಟಿ ಯೋಜನೆ’ ಕುರಿತ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು.
ಯಾವ ಯೋಜನೆಗೆ ಎಷ್ಟು ಹಣ?ಚಿಕ್ಕಬಳ್ಳಾಪುರ ಜಿಲ್ಲೆ ಈ ಯೋಜನೆಗಳ ಜಾರಿಯಲ್ಲಿ ಮುಂಚೂಣಿಯಲ್ಲಿದೆ. ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಯಡಿ 1138.64 ಕೋಟಿ ರು.ಸಂದಾಯ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ 292.23 ಕೋಟಿ ರು.ಗಳ ರಿಯಾಯ್ತಿ ನೀಡಲಾಗಿದೆ. ಶಕ್ತಿ ಯೋಜನೆಯಡಿ 7.77 ಕೋಟಿ ಉಚಿತ ಟಿಕೆಟ್ ಪಡೆದು ಪ್ರಯಾಣ ಮಾಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿ 1.56 ಲಕ್ಷ ಕುಟುಂಬಗಳಿಗೆ 265.29 ಕೋಟಿ ವೆಚ್ಚದ ಪಡಿತರ ವಿತರಣೆ ಮಾಡಲಾಗಿದೆ. ಯುವನಿಧಿ ಯೋಜನೆಯಡಿ 3641 ಅಭ್ಯರ್ಥಿಗಳನ್ನು ನೋಂದಾಯಿಸಿ ಉದ್ಯೋಗ ಭತ್ಯೆಯನ್ನು ನೀಡಲಾಗಿದೆ.
ಕೇವಲ ಗ್ಯಾರಂಟಿ ಯೋಜನೆಗಳನ್ನಷ್ಟೆ ಅಲ್ಲದೆ ಅಭಿವೃದ್ಧಿ ಕಾರ್ಯಗಳಿಗೂ ಹಣವನ್ನು ವೆಚ್ಚ ಮಾಡಿ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ವರ್ಷ 4 ಲಕ್ಷ ಕೋಟಿಗೂ ಅಧಿಕ ಬಜೆಟ್ ಮಂಡಿಸಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಮುಂದಿನ ತಿಂಗಳಲ್ಲಿ ಶಿಡ್ಲಘಟ್ಟ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣದ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯ ಆಗಲಿದೆ. ಜಿಲ್ಲಾ ಕೇಂದ್ರದಲ್ಲಿ ಅಂತರಾಷ್ಟ್ರೀಯ ಮಟ್ಟದ ಹೂವಿನ ಮಾರುಕಟ್ಟೆ ನಿರ್ಮಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು.ಪ್ರಚಾರ ವಾಹನಕ್ಕೆ ಚಾಲನೆ
ಕಾರ್ಯಕ್ರಮಕ್ಕೂ ಮುನ್ನ ಗಣ್ಯರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಗ್ಯಾರಂಟಿ ಯೋಜನೆಗಳ ಪ್ರಚಾರ ವಾಹನಕ್ಕೆ ಚಾಲನೆ ನೀಡಿದರು. ನಂತರ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಗಳು ತೆರೆದಿದ್ದ ಜಾಗೃತಿ ಮಳಿಗೆಗಳಿಗೆ ಚಾಲನೆ ನೀಡಿದರು. ನಾಟಕ ತಂಡಗಳ ಮೂಲಕ ಗ್ಯಾರಂಟಿ ಯೋಜನೆಗಳ ಕುರಿತು ನಾಟಕವನ್ನು ಪ್ರದರ್ಶಿಸಲಾಯಿತು. ಶಕ್ತಿ ಬಿಂದು (ಪಿಪಿಟಿ) ಪ್ರದರ್ಶನ ಮೂಲಕ ಗ್ಯಾರಂಟಿ ಯೋಜನೆಗಳ ಮಾಹಿತಿ ನೀಡುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಈ ವೇಳೆ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ, ರಾಜ್ಯ ಉಪಾಧ್ಯಕ್ಷರಾದ ಸೂರಜ್ ಹೆಗಡೆ, ಪುಷ್ಪ ಅಮರನಾಥ್, ಪಾಟೀಲ್ ,ದಿನೇಶ್ ಗೊಳಿಗೌಡ, ಜಿಲ್ಲಾಧ್ಯಕ್ಷ ಯಲುವಳ್ಳಿ ಎನ್. ರಮೇಶ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್ ಮಂಜುಳಾ , ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ, ಜಿಪಂ ಸಿಇಒ ಡಾ.ವೈ. ನವೀನ್ ಭಟ್, ಎಸ್ಪಿ ಕುಶಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ.ಎನ್. ಭಾಸ್ಕರ್ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಗ್ಯಾರೆಂಟಿ ಯೋಜನೆಗಳ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಅಧಿಕಾರಿಗಳು, ಮತ್ತಿತರರು ಇದ್ದರು.