ಕನ್ನಡಪ್ರಭ ವಾರ್ತೆ ಮದ್ದೂರು
ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ರೈತರೊಂದಿಗೆ ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆ ಬೆಂಬಲಿಸಿ ಮದ್ದೂರು ವಿಧಾನಸಭಾ ಕ್ಷೇತ್ರದ ಪಕ್ಷದ ಕಾರ್ಯಕರ್ತರು ಸೋಮವಾರ ಬಿಡದಿ ಚಲೋ ನಡೆಸಿದರು.ಮಾಜಿ ಸಚಿವ ಡಿ.ಸಿ.ತಮ್ಮಣ್ಣ ನೇತೃತ್ವದಲ್ಲಿ ಕ್ಷೇತ್ರದ 34 ಗ್ರಾಪಂ ವ್ಯಾಪ್ತಿಯ ಮುಖಂಡರು ಸಾವಿರಾರು ಕಾರ್ಯಕರ್ತರು ಬಸ್ ಸೇರಿದಂತೆ ವಿವಿದ ವಾಹನಗಳಲ್ಲಿ ಬಿಡದಿಗೆ ತೆರಳಿ ಟೌನ್ ಶಿಪ್ ವಿರೋಧಿಸಿ ಅಲ್ಲಿನ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿದರು.
ಈ ವೇಳೆ ಮಾತನಾಡಿದ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಸರ್ಕಾರ ಕೈಗಾರಿಕೆ ಅಥವಾ ಟೌನ್ ಶಿಪ್ ನಿರ್ಮಾಣ ಯೋಜನೆಗೆ ಭೂಸ್ವಾಧೀನ ಮಾಡಿಕೊಳ್ಳಬೇಕಾದರೆ ಶೇ.80ರಷ್ಟು ರೈತರ ಒಪ್ಪಿಗೆ ಪಡೆದು ಸ್ವಾಧೀನ ಪಡಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶವಿದೆ ಎಂದರು.ಆದರೆ, ಸರ್ಕಾರ ಈ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಭೂ ಸ್ವಾಧೀನಕ್ಕೆ ಮುಂದಾಗಿದೆ. ಬಿಡದಿ ರೈತರು ತಮಗಿರುವ ಅಲ್ಪಸ್ವಲ್ಪ ಜಮೀನಿನಲ್ಲಿ ವಾಣಿಜ್ಯ ಬೆಳೆಗಳಾದ ತೆಂಗು, ಅಡಿಕೆ, ರೇಷ್ಮೆ ತರಕಾರಿ ಜೊತೆಗೆ ಮಹಿಳೆಯರು ಹೈನುಗಾರಿಕೆ ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಸರ್ಕಾರ ರೈತರ ಮೇಲೆ ಗದಾ ಪ್ರಹಾರ ನಡೆಸಿ ಟೌನ್‌ಶಿಪ್ ಹೆಸರಲ್ಲಿ ಭೂಮಿಯನ್ನು ರಿಯಲ್ ಎಸ್ಟೇಟ್ ದಂಧೆಗೆ ಬಳಸಿಕೊಳ್ಳುವ ಹುನ್ನಾರ ನಡೆಸುತ್ತಿದೆ ಎಂದು ಟೀಕಿಸಿದರು.
ಯೋಜನೆಗೆ ಭೂಮಿ ನೀಡುವ ರೈತರ ಪ್ರತಿ ಎಕರೆಗೆ ಮೂರು ಕೋಟಿ ರು. ಪರಿಹಾರ ನೀಡುವುದಾಗಿ ಘೋಷಣೆ ಮಾಡಿ ಭೂಮಿಯನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವ ಸಣ್ಣಪುಟ್ಟ ಹಿಡುವಳಿ ರೈತರನ್ನು ಸರ್ವನಾಶ ಮಾಡಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಾದಯಾತ್ರೆಯಲ್ಲಿ ಮದ್ದೂರು ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಚಿಕ್ಕ ತಿಮ್ಮೇಗೌಡ, ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ, ಕೆ.ಟಿ. ರಾಜಣ್ಣ, ಕರಟಗೆರೆ ಹನುಮಂತು, ಹಾಗಲಹಳ್ಳಿ ಪುಟ್ಟಸ್ವಾಮಿ, ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ದಿವ್ಯ ರಾಮಚಂದ್ರ ಶೆಟ್ಟಿ, ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಭಾಗವಹಿಸಿದ್ದರು.