ಸಾರಾಂಶ
ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿರುವ ಕಾರಣ ಜಿಲ್ಲೆಯಲ್ಲಿ ವಿಶೇಷವಾಗಿ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಗ್ವಿಜಯ್ ಬೋಡ್ಕೆ ಹೇಳಿದರು. ರಾಮನಗರದಲ್ಲಿ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು.
ಅಂತರ ಇಲಾಖೆಗಳ ಸಮನ್ವಯ ಸಮಿತಿ ಸಭೆಕನ್ನಡಪ್ರಭ ವಾರ್ತೆ ರಾಮನಗರ
ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿರುವ ಕಾರಣ ಜಿಲ್ಲೆಯಲ್ಲಿ ವಿಶೇಷವಾಗಿ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಗ್ವಿಜಯ್ ಬೋಡ್ಕೆ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯತ್‌ನ ಮಿನಿ ಸಭಾಂಗಣದಲ್ಲಿ ಆಯೋಜಿಲಾಗಿದ್ದ ಅಂತರ ಇಲಾಖೆಗಳ ಸಮನ್ವಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ವೃಂದದವರು ಜಿಲ್ಲೆಯಲ್ಲಿ ಡೆಂಘೀ ಹರಡದಂತೆ ಎಲ್ಲಾ ರೀತಿಯ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಸಾರ್ವಜನಿಕರಲ್ಲಿ ಈ ಬಗ್ಗೆ ನಿರಂತರವಾಗಿ ಜಾಗೃತಿ ಮೂಡಿಸಬೇಕು, ಮುಂಜಾಗ್ರತಾ ಕ್ರಮವಾಗಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು, ಸಂಬಂಧಿಸಿದ ಇಲಾಖೆಗಳು ಈ ಬಗ್ಗೆ ಕಾಳಜಿ ವಹಿಸಬೇಕು ಎಂದರು.ನವಜಾತ ಶಿಶು, ಅಂಗನವಾಡಿ, ಸರ್ಕಾರಿ/ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 0-18 ವರ್ಷದೊಳಗಿನ ಮಕ್ಕಳ ಆರೋಗ್ಯ ತಪಾಸಣೆ ಮಾಡಬೇಕು, ಆರೋಗ್ಯದ ಸಮಸ್ಯೆಗಳು ಕಂಡುಬಂದರೆ ವೈದ್ಯಕೀಯ ಚಿಕಿತ್ಸೆ ನೀಡಿ ಗುಣಪಡಿಸುವಂತೆ ನಿರ್ದೇಶನ ನೀಡಿದರು.
ಜಿಲ್ಲೆಯ ಎಲ್ಲಾ ತಾಲೂಕು ಆರೋಗ್ಯ ಅಧಿಕಾರಿಗಳು ಆಯಾ ತಾಲೂಕಿನಲ್ಲಿ ಶಸ್ತ್ರ ಚಿಕಿತ್ಸೆಗೊಳಗಾಗಿರುವ ಮಕ್ಕಳ ಆರೋಗ್ಯದ ವರದಿಯನ್ನು ಕಾಲ ಕಾಲಕ್ಕೆ ನೀಡಬೇಕು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸಹಾಯದಿಂದ ಚಿಕಿತ್ಸೆ ಬಾಕಿ ಉಳಿದ ಮಕ್ಕಳನ್ನು ಗುರುತಿಸಿ ಅವರ ಆರೋಗ್ಯದ ಸ್ಥಿತಿಗತಿಯ ಮಾಹಿತಿ ಪಡೆಯಬೇಕು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಆರೋಗ್ಯದ ಬಗ್ಗೆ ನಿಗಾವಹಿಸಬೇಕು ಎಂದರು.ಮಕ್ಕಳ ಶಸ್ತ್ರ ಚಿಕಿತ್ಸೆಯು ಸೂಕ್ಷ್ಮ ವಿಷಯವಾಗಿದ್ದು, ಜಿಲ್ಲಾ ಶಸ್ತ್ರ ಚಿಕಿತ್ಸಾಧಿಕಾರಿಗಳು ಅವುಗಳನ್ನು ಮುಂಚೆಯೆ ಪತ್ತೆಹಚ್ಚಿ ನೂನ್ಯತೆಗೆ ಒಳಗಾದ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ದಿಗ್ವಿಜಯ್ ಬೋಡ್ಕೆ ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಿರಂಜನ್, ಆರ್.ಸಿ.ಎಚ್ ಅಧಿಕಾರಿ ಡಾ. ರಾಜು, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ಮಂಜುನಾಥ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಶಶಿಧರ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಕುಮಾರ್, ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ತಾಲೂಕು ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.