ಸಾರಾಂಶ
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಇಂದು ಸರ್ವರನ್ನೂ ಸಮಾನವಾಗಿ ಕಾಣುವ ತತ್ವದ ಸಂವಿಧಾನದ ರಕ್ಷಕರ ಅಗತ್ಯವಿದೆ ಎಂದು ರೋಮನ್ ಕ್ಯಾಥೊಲಿಕ್ ಚರ್ಚ ಫಾದರ್ ಪ್ರಕಾಶ ಮಾರಸ್ ಹೇಳಿದರು.ಚರ್ಚಿಗೆ ಭೇಟಿ ನೀಡಿದ್ದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲರಿಗೆ ಶುಭ ಕೋರಿ ಮಾತನಾಡಿದ ಅವರು, ವಿವಿಧತೆಯಲ್ಲಿ ಏಕತೆ ಕಾಣುವುದು ಭಾರತದ ವಿಶೇಷ. ಎಲ್ಲ ಸಮಾಜಗಳನ್ನು ಒಗ್ಗೂಡಿಸುವ ಕೆಲಸ ಆಗಬೇಕೇ ಹೊರತು, ವಿಘಟನೆ ಪ್ರಯತ್ನ ಮಾಡಬಾರದು. ನಾಯಕತ್ವ ವಹಿಸಿಕೊಂಡವರು ಸಮಾಜ ರಕ್ಷಣೆ ಮಾಡಬೇಕು. ಅಂತಹ ಗುಣ ಸಂಯುಕ್ತಾ ಪಾಟೀಲ ಅವರಲ್ಲಿ ಕಾಣಬಹುದು ಎಂದು ಹೇಳಿದರು.
ಉತ್ತಮ ನಾಯಕರನ್ನು ಆಯ್ಕೆ ಮಾಡುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ. ಈ ಹೊಣೆಗಾರಿಕೆ ಸಮರ್ಥವಾಗಿ ನಿಭಾಯಿಸಿದರೆ ದೇಶಕ್ಕೆ ಉಜ್ವಲ ಭವಿಷ್ಯ ಸಿಗಲಿದೆ. ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಒಳ್ಳೆಯ ಅಭ್ಯರ್ಥಿ ದೊರಕಿದ್ದಾರೆ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಗುಣಲಕ್ಷಣಗಳು ಅವರಲ್ಲಿವೆ. ಕಿರಿಯ ವಯಸ್ಸಿನಲ್ಲಿಯೇ ಡಿಸಿಸಿ ಬ್ಯಾಂಕ್ ನಿರ್ದೇಶಕಿಯಾಗಿ, ಸ್ಪರ್ಶ ಫೌಂಡೇಶನ್ ಅಧ್ಯಕ್ಷೆಯಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.ಈ ಫೌಂಡೇಶನ್ ಮೂಲಕ ಹಲವು ಕುಟುಂಬಗಳು ಬದುಕು ಕಟ್ಟಿಕೊಳ್ಳಲು ನೆರವಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ನೀವು ಹಾಕುವ ಒಂದು ಮತದಲ್ಲಿ ಈ ದೇಶದ ಭವಿಷ್ಯವೇ ಅಡಗಿದೆ. ಈ ಅವಕಾಶ ಬಳಕೆ ಮಾಡಿಕೊಂಡು ಸಮರ್ಥರನ್ನು ಸಂಸತ್ತಿಗೆ ಕಳುಹಿಸಬೇಕು. ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಹೇಳಿದರು.
ಸಂಯುಕ್ತಾ ಪಾಟೀಲ ಮಾತನಾಡಿ, ದೇಶ ಇಂದು ಸಂದಿಗ್ಧ ಪರಿಸ್ಥಿತಿಯಲ್ಲಿದೆ. ಧರ್ಮದ ಆಧಾರದ ಮೇಲೆ ದೇಶ ವಿಭಜನೆ ಮಾಡುವ ಪ್ರಯತ್ನದ ವಿರುದ್ಧ ಹೋರಾಟ ಮಾಡಬೇಕಾಗಿದೆ. ದೇಶ ಉಳಿಯಬೇಕಾದರೆ ಸಂವಿಧಾನ ಉಳಿಯಬೇಕು. ವಿವಿಧತೆಯಲ್ಲಿ ಏಕತೆ ಹೊಂದಿರುವ ಭಾರತದ ವೈಶಿಷ್ಟ್ಯವನ್ನು ಕಾಪಾಡಿಕೊಳ್ಳಬೇಕು. ಈ ಕಾರಣಕ್ಕಾಗಿ ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬರಬೇಕಾಗಿದೆ ಎಂದರು.ವಯಸ್ಸಿನಲ್ಲಿ ಕಿರಿಯಳು, ಆದರೆ ಕನಸು ದೊಡ್ಡದಿದೆ. ಬಾಗಲಕೋಟೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನನ್ನದೇ ಆದ ಕನಸಿದೆ. ಕುಡಚಿ ಬಾಗಲಕೋಟೆ ರೈಲ್ವೆ ಮಾರ್ಗ ಅನುಷ್ಠಾನ, ಯುಕೆಪಿ ಸಂತ್ರಸ್ತರಿಗೆ ಪರಿಹಾರ, ಯುವಕರಿಗೆ ಉದ್ಯೋಗ ಕಲ್ಪಿಸಲು ಕೈಗಾರಿಕೆಗಳ ಸ್ಥಾಪನೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.
ಶೈಕ್ಷಣಿಕ ಕ್ಷೇತ್ರಕ್ಕೆ ಕ್ರೈಸ್ತ ಸಮಾಜದ ಕೊಡುಗೆ ಬಹು ದೊಡ್ಡದು. ದೇಶದೆಲ್ಲೆಡೆ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿ ಶೈಕ್ಷಣಿಕ ಕ್ರಾಂತಿಗೆ ಬಹು ದೊಡ್ಡ ಕೊಡುಗೆ ನೀಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಜಿಪಂ ಮಾಜಿ ಅಧ್ಯಕ್ಷೆ ಬಾಯಕ್ಕ ಮೇಟಿ, ಯುವ ಮುಖಂಡ ಮಲ್ಲಿಕಾರ್ಜುನ ಚರಂತಿಮಠ, ಸಂತೋಷ ಹೊಕ್ರಾಣಿ ಮತ್ತಿತರರು ಇದ್ದರು.