ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ
ಕೃಷಿ ವಿರೋಧಿ ಕಾಯ್ದೆ ಸೇರಿದಂತೆ ವಿವಿಧ ಕಾಯ್ದೆಗಳನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲಿಸಿ ಶುಕ್ರವಾರ ಬೆಳಗಾವಿ ನಗರದಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ, ವಿವಿಧ ರೈತಪರ ಸಂಘಟನೆಗಳ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ನಗರದ ಡಾ.ಅಂಬೇಡ್ಕರ ಉದ್ಯಾನದಿಂದ ಪ್ರತಿಭಟನೆ ರ್‍ಯಾಲಿ ಆರಂಭಿಸಿದ ಪ್ರತಿಭಟನಾಕಾರರು, ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೆಲ ಸಮಯ ಪ್ರತಿಭಟನೆ ನಡೆಸಿದರು. ಇದರಿಂದಾಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಲ್ಲದೇ ಸಂಚಾರ ದಟ್ಟಣೆಯೂ ಹೆಚ್ಚಾಗಿತ್ತು. ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್‍ಯಾಲಿ ನಡೆಸಿದರು. ರ್‍ಯಾಲಿಯುದ್ದಕ್ಕೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ದೆಹಲಿ ಗಡಿ ಭಾಗದಲ್ಲಿ ರೈತರ ಬದುಕಿಗಾಗಿ ಪಂಜಾಬ, ಹರಿಯಾಣ ಮತ್ತು ಉತ್ತರ ಭಾರತದ ರೈತರ ಹೋರಾಟಕ್ಕೆ ದಮನಕಾರಿ ನೀತಿಯನ್ನು ಅನುಸರಿಸಿ ರೈತರ ಮೇಲೆ ಕೇಂದ್ರ ಸರ್ಕಾರ ನಿರಂತರ ದಬ್ಬಾಳಿಕೆ ಮಾಡುತ್ತಿದೆ. ರಾಜ್ಯಾದ್ಯಂತ ಕೇಂದ್ರ ಸರ್ಕಾರದ ಈ ನೀತಿಯನ್ನು ಖಂಡಿಸುತ್ತಿರುವುದಾಗಿ ಇಲ್ಲಿನ ಪ್ರತಿಭಟನಾಕಾರರು ತಿಳಿಸಿದರು. ಕೇಂದ್ರ ಸರ್ಕಾರ ಆಡಳಿತಕ್ಕೆ ಬರುವ ಮುಂಚೆ ಎಂಎಸ್‌ಪಿಯನ್ನು ಖಾತರಿ ಪಡಿಸುತ್ತೇವೆಂದು ಹೇಳಿದ್ದರು. ರೈತರ ಸಮಸ್ಯೆ ಬಗೆಹರಿಸುತ್ತೇನೆಂದು ಆಶ್ವಾಸನೆ ನೀಡಿದ್ದರು. ಆದರೆ, ಅಧಿಕಾರಕ್ಕೆ ಬಂದ ನಂತರ ರೈತರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಇದು ಹೀಗೆ ಮುಂದುವರೆದರೆ ಉತ್ತರ ಭಾರತದ ಪ್ರಾರಂಭವಾದ ಚಳುವಳಿ ದಕ್ಷಿಣ ಭಾಗದಲ್ಲೂ ಆರಂಭಿಸಬೇಕಾಗುತ್ತದೆ. ರಾಜ್ಯದಲ್ಲಿ ನಾವು ವಿಧಾನಸಭೆ ಚುನಾವಣೆ ವೇಳೆ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದೇವೆ. ಅದರಂತೆ ಮುಂಬರುವ ಲೋಕಸಭೆಯಲ್ಲಿ ಪಾಠ ಕಲಿಸುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.ರೈತರಿಗೆ ಡಾ. ಸ್ವಾಮಿನಾಥನ್ ವರದಿ ಪ್ರಕಾರ ಬೆಂಬಲ ಬೆಲೆ ಕೊಡಬೇಕು. ಕೃಷಿ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಪ್ರತಿ ಕುಟುಂಬಕ್ಕೆ 200 ದಿನಗಳ ಕೆಲಸ ಕೊಡಬೇಕು. ರೈತರು ಹಾಗೂ ಕಾರ್ಮಿಕರ ಮೇಲಿರುವ ಸಾಲ ಮನ್ನಾ ಮಾಡಬೇಕು. ಅಸಂಘಟಿತ ಕ್ಷೇತ್ರದ ಕಾರ್ಮಿಕರಿಗೂ ಸರ್ಕಾರಿ ಕಾರ್ಮಿಕರ ಜತೆ ಸಮಾನತೆ ಕೊಡಬೇಕು. ಇದಕ್ಕೆ ಕನಿಷ್ಠ ಕೂಲಿಯನ್ನು 1 ದಿನಕ್ಕೆ ₹ 00 ನಿಗದಿಪಡಿಸಿ ಘೋಷಣೆ ಮಾಡಬೇಕು. ದೆಹಲಿ ಗಡಯಲ್ಲಿ ಕುಳಿತಿರುವ ರೈತ ಕಾರ್ಮಿಕ ಸಂಘಟನೆಗಳ ಎಲ್ಲ ಬೇಡಿಕೆಗಳ ಈಡೇರಿಕೆಗೆ ಶೀಘ್ರವೇ ಕೇಂದ್ರ ಸರ್ಕಾರ ಕೈಮ ಕೈಗೊಳ್ಳಬೇಕು. ಜತೆಗೆ ಕಳೆದ 100 ದಿನದಲ್ಲಿ ನಡೆದಿರುವ ಪೊಲೀಸ್ ದೌರ್ಜನ್ಯವನ್ನು ತಕ್ಷಣ ನಿಲ್ಲಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭನಾಕಾರರು ಆಗ್ರಹಿಸಿದರು.
ಈ ಪ್ರತಿಭಟನೆಲ್ಲಿ ವಿಶ್ವೇಶ್ವರಯ್ಯ ಹಿರೇಮಠ, ಸಿದಗೌಡ ಮೋದಗಿ ಸೇರಿದಂತೆ ಮೊದಲಾದವರು ಭಾಗವಹಿಸಿದ್ದರು.