ಸಹಭಾಗಿತ್ವದೊಂದಿಗೆ ಚುರುಕಾಗಿ ಕಾರ್ಯನಿರ್ವಹಿಸಿ

| Published : Mar 31 2024, 02:04 AM IST

ಸಾರಾಂಶ

ಪ್ರತಿ ತಂಡಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಟ್ಟೆಚ್ಚರ ವಹಿಸಬೇಕು. ಪ್ರತಿದಿನದ ವೆಚ್ಚದ ವಿವರಗಳನ್ನು ನಿಖರವಾಗಿ ಸಲ್ಲಿಸಬೇಕು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ನೇಮಕಗೊಂಡ ಪ್ರತಿ ತಂಡಗಳ ನಡುವೆ ಸಹಭಾಗಿತ್ವ ಅಗತ್ಯವಾಗಿದೆ. ಇದರ ಜೊತೆಗೆ ಎಲ್ಲರೂ ಚುರುಕಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ಸೂಚನೆ ನೀಡಿದರು.

ಶನಿವಾರ ನಗರಸಭೆ ನೂತನ ಸಭಾಭವನದಲ್ಲಿ ಬಾಗಲಕೋಟೆ ಮತಕ್ಷೇತ್ರದ ಚುನಾವಣಾ ಪೂರ್ವ ತಯಾರಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಾರತ ಚುನಾವಣಾ ಆಯೋಗವು ನೀಡಿದ ನಿರ್ದೇಶನಗಳನ್ನು ಪಾಲಿಸಬೇಕು. ಚುನಾವಣೆಗಾಗಿ ನೇಮಕಗೊಂಡ ಫ್ಲೈಯಿಂಗ್ ಸ್ಕ್ವಾಡ್, ಸ್ಟ್ಯಾಟಿಕ್ ಸರ್ವಲನ್ಸ್‌ ತಂಡ, ವಿಡಿಯೋ ಸರ್ವೆಲೆನ್ಸ್ ತಂಡ, ವಿಡಿಯೋ ವೀಕ್ಷಣಾ ತಂಡಗಳು ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು. ಅಂದಾಗ ಮಾತ್ರ ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಪ್ರತಿ ತಂಡಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಟ್ಟೆಚ್ಚರ ವಹಿಸಬೇಕು. ಪ್ರತಿದಿನದ ವೆಚ್ಚದ ವಿವರಗಳನ್ನು ನಿಖರವಾಗಿ ಸಲ್ಲಿಸಬೇಕು. ತಮಗೆ ವಹಿಸಿದ ಜವಾಬ್ದಾರಿಯನ್ನು ನಿರ್ವಹಿಸುವ ಮೂಲಕ ಪ್ರಕರಣ ದಾಖಲಿಸುವಾಗ ಪ್ರತಿ ಮಾಹಿತಿ ಗಣನೆಗೆ ತೆಗೆದುಕೊಳ್ಳಬೇಕು. ಪ್ರತಿಯೊಂದು ಅಂಶಗಳು ದಾಖಲು ಆಗಿರಬೇಕು. ಚುನಾವಣಾ ವೆಚ್ಚದಿಂದ ಯಾವುದೇ ವೆಚ್ಚ ಬಿಟ್ಟು ಹೋಗದಂತೆ ನೋಡಿಕೊಳ್ಳುವ ಮೂಲಕ ಚುನಾವಣೆ ಕಾರ್ಯ ಯಶಸ್ವಿಯಾಗಿ ನಡೆಯುವಂತೆ ಮಾಡಬೇಕು ಎಂದು ಸೂಚಿಸಿದರು.

ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದಲ್ಲಿ ಒಟ್ಟು 267 ಮತಗಟ್ಟೆಗಳು ಬರುತ್ತವೆ. ಪ್ರತಿ ಮತಗಟ್ಟೆಗಳಲ್ಲಿ ಅಗತ್ಯವಿರುವ ಮೂಲ ಸೌಲಭ್ಯಗಳು ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಏನಾದರೂ ದುರಸ್ತಿ ಇದ್ದಲ್ಲಿ ಪಟ್ಟಿ ಮಾಡಿ ಮೂರು ದಿನಗಳಲ್ಲಿ ಸಲ್ಲಿಸಬೇಕು. ಚುನಾವಣೆಗೆ ಸಂಬಂಧಿಸಿದ ದೂರು ನಿರ್ವಹಣೆ ಕೇಂದ್ರ ಹಾಗೂ ಸಿ-ವಿಜಿಲ್ ಬಗ್ಗೆ ಅರಿವು ಮೂಡಿಸಬೇಕು. ಅಂದಾಗ ಮಾತ್ರ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಬಾಗಲಕೋಟೆ ಮತಕ್ಷೇತ್ರದಲ್ಲಿ ಕಡಿಮೆ ಮತದಾನವಾದ ಮತಗಟ್ಟೆಗಳ ಮಾಹಿತಿ ಇಟ್ಟುಕೊಂಡು ಆ ಭಾಗದಲ್ಲಿ ಹೆಚ್ಚಿನ ಮತದಾನವಾಗುವಂತೆ ಮಾಡಬೇಕು. ಮತದಾರರ ಪಟ್ಟಿಯಲ್ಲಿರುವ ಪ್ರತಿಯೊಂದು ಮತದಾರರು ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವಂತೆ ಪ್ರೇರಣೆ ನೀಡಬೇಕು. ಚುನಾವಣಾ ಆಯೋಗವು ವಿಶೇಷ ಚೇತನರಿಗೆ ಪೂರಕ ಸೌಲಭ್ಯಗಳನ್ನು ಒದಗಿಸಲು ತಿಳಿಸಿದ್ದು, ಸೌಲಭ್ಯಗಳನ್ನು ಒದಗಿಸುವ ಕಾರ್ಯವಾಗಬೇಕು ಎಂದರು.

ಜಿಲ್ಲಾ ಎಂಸಿಸಿ, ಸ್ವೀಪ್ ನೋಡಲ್ ಅಧಿಕಾರಿಯೂ ಆಗಿರುವ ಜಿಪಂ ಸಿಇಒ ಶಶಿಧರ ಕುರೇರ ಮಾತನಾಡಿ, ಚುನಾವಣೆಯ ನಾಮಪತ್ರ ಸಲ್ಲಿಕೆಯಿಂದ ಹಿಡಿದು ಪ್ರತಿ ಪ್ರಕ್ರಿಯೆಯು ಕೇಂದ್ರ ಸ್ಥಾನದಲ್ಲಿ ಆಗುತ್ತಿರುವುದರಿಂದ ಪ್ರತಿ ತಂಡಗಳು ಹೆಚ್ಚಿನ ಕೆಲಸ ಮಾಡಬೇಕಾಗುತ್ತದೆ. ಎಸ್ಎಸ್ಟಿ, ಎಫ್ಎಸ್ಟಿ ತಂಡಗಳ ಕಾರ್ಯ ಚುರುಕುಗೊಳಿಸಲು ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಅವರು ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ತಿಳಿಸಿದರು.

ಸಭೆಯಲ್ಲಿ ಜಿ.ಪಂ ಉಪಕಾರ್ಯದರ್ಶಿ ಅಮರೇಶ ನಾಯಕ, ಜಿ.ಪಂ ಯೋಜನಾ ನಿರ್ದೇಶಕ ಶಿವಪುರಿ, ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ತಹಸೀಲ್ದಾರ ಅಮರೇಶ ಪಮ್ಮಾರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ನೋಡಲ್ ಅಧಿಕಾರಿಗಳು, ವಿವಿಧ ತಂಡಗಳ ಅಧಿಕಾರಿಗಳು ಇದ್ದರು.

---

ಕೋಟ್...

ಪ್ರತಿ ತಂಡಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಟ್ಟೆಚ್ಚರ ವಹಿಸಬೇಕು. ಪ್ರತಿದಿನದ ವೆಚ್ಚದ ವಿವರಗಳನ್ನು ನಿಖರವಾಗಿ ಸಲ್ಲಿಸಬೇಕು. ತಮಗೆ ವಹಿಸಿದ ಜವಾಬ್ದಾರಿಯನ್ನು ನಿರ್ವಹಿಸುವ ಮೂಲಕ ಪ್ರಕರಣ ದಾಖಲಿಸುವಾಗ ಪ್ರತಿ ಮಾಹಿತಿ ಗಣನೆಗೆ ತೆಗೆದುಕೊಳ್ಳಬೇಕು. ಪ್ರತಿಯೊಂದು ಅಂಶಗಳು ದಾಖಲು ಆಗಿರಬೇಕು. ಚುನಾವಣಾ ವೆಚ್ಚದಿಂದ ಯಾವುದೇ ವೆಚ್ಚ ಬಿಟ್ಟು ಹೋಗದಂತೆ ನೋಡಿಕೊಳ್ಳುವ ಮೂಲಕ ಚುನಾವಣೆ ಕಾರ್ಯ ಯಶಸ್ವಿಯಾಗಿ ನಡೆಯುವಂತೆ ಮಾಡಬೇಕು.

- ಜಾನಕಿ ಕೆ.ಎಂ . ಜಿಲ್ಲಾ ಚುನಾವಣಾಧಿಕಾರಿ