ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ಜೀವನದಲ್ಲಿ ಯಶಸ್ಸು ಸಾಧಿಸಬೇಕಾದರೆ ಸತತ ಪ್ರಯತ್ನ ಮತ್ತು ಪೂರ್ವ ಸಿದ್ಧತೆ ಅತ್ಯಗತ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಪ್ರತಿಪಾದಿಸಿದ್ದಾರೆ.ಪದವಿ ಪೂರ್ವ ಶಿಕ್ಷಣ ಇಲಾಖೆ, ಸರ್ಕಾರಿ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಯುವ ಸಾಂಸ್ಕೃತಿಕ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಶಿಸ್ತು, ಶ್ರದ್ಧೆ ಮತ್ತು ಸಮಯಪ್ರಜ್ಞೆ ಅತೀ ಮುಖ್ಯ. ಆದ್ದರಿಂದ ಇವುಗಳನ್ನು ಅಳವಡಿಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳುವತ್ತ ಗಮನಹರಿಸಬೇಕು ಎಂದು ಸಲಹೆ ಮಾಡಿದರು.ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡಲು ಅವಕಾಶ ಮಾಡಿಕೊಳ್ಳಬೇಕು. ಸತತ ಪ್ರಯತ್ನ ಇದ್ದಲ್ಲಿ ಪ್ರಶಸ್ತಿ ಹಾಗೂ ಉದ್ಯೋಗ ದೊರೆಯಲಿದೆ. ಯುವ ವಯಸ್ಸಿನಲ್ಲಿ ಜೀವನ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು. ಒಳ್ಳೆಯ ಪುಸ್ತಕಗಳನ್ನು ಅಧ್ಯಯನ ಮಾಡಬೇಕು ಎಂದು ಸಲಹೆ ಮಾಡಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಮಂಜುಳಾ ಮಾತನಾಡಿ, ಈ ಬಾರಿ ಪಿಯು ಪರೀಕ್ಷೆ ವೆಬ್‌ಕಾಸ್ಟಿಂಗ್ ಇರಲಿದ್ದು, ಮಾನಸಿಕವಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಿದ್ಧರಾಗಿರಬೇಕು. ಕೊಡಗು ಜಿಲ್ಲೆ ಪಿಯು ಪರೀಕ್ಷಾ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆಯುವಂತಾಗಬೇಕು ಎಂದರು.ವಿರಾಜಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಹಾಗೂ ಕೊಡಗು ಜಿಲ್ಲಾ ಪ್ರಾಚಾರ್ಯರ ಸಂಘದ ಕಾರ್ಯದರ್ಶಿ ಎನ್.ಕೆ.ಜ್ಯೋತಿ ಮಾತನಾಡಿ, ಪಿಯು ಪರೀಕ್ಷಾ ಫಲಿತಾಂಶದಲ್ಲಿ ಕೊಡಗು ಜಿಲ್ಲೆ ನಾಲ್ಕನೇ ಸ್ಥಾನದಲ್ಲಿದೆ. ಇನ್ನೂ ಅತ್ಯುತ್ತಮ ಸ್ಥಾನ ಪಡೆಯಲು ಎಲ್ಲರೂ ಓದಿನ ಕಡೆ ಗಮನಹರಿಸಬೇಕು ಎಂದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಪಿ.ಆರ್.ವಿಜಯ್ ಮಾತನಾಡಿ, ಶಿಸ್ತಿನ ಜೊತೆಗೆ ತಾಳ್ಮೆ ಇರಬೇಕು. ಮರಳಿ ಪ್ರಯತ್ನ ಮಾಡಬೇಕು. ದುಶ್ಚಟಗಳಿಂದ ದೂರವಿರಬೇಕು ಎಂದರು.ಜಿಲ್ಲಾ ಮಟ್ಟದ ಯುವ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸುಮಾರು 450 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ರಸಪ್ರಶ್ನೆ, ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ, ಏಕಪಾತ್ರ ಅಭಿನಯ, ಭಾವಗೀತೆ, ಜಾನಪದ ಗೀತೆ, ಚಿತ್ರಕಲೆ, ಭಕ್ತಿಗೀತೆ, ಆಶುಭಾಷಣ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡರು.
ಯುವ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ಜಯಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಲಾಯಿತು. (ಪ್ರಥಮ ಬಹುಮಾನ ರು.1,500, ದ್ವಿತೀಯ ರು.1,200 ಮತ್ತು ತೃತೀಯ ರು.900)ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಯುವ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.