ಸಾರಾಂಶ
ಕನ್ನಡಪ್ರಭ ವಾರ್ತೆ ಹಾಸನ
ವರ್ಷದಿಂದ ವರ್ಷಕ್ಕೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆಯಲ್ಲಿ ಇಳಿಮುಖ ಆಗುತ್ತಿರುವುದರಿಂದ ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ನ್ಯಾಷನಲ್ ಹ್ಯೂಮನ್ ರೈಟ್ಸ್ ವೆಲ್‌ಫೇರ್ ಟ್ರಸ್ಟ್ ವತಿಯಿಂದ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುವ ಆಂದೋಲನ ಏರ್ಪಡಿಸಿರುವುದಾಗಿ ಹ್ಯೂಮನ್ ರೈಟ್ಸ್ ರಾಜ್ಯಾಧ್ಯಕ್ಷ ಇಮ್ರಾನ್ ಖಾನ್ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕಡಿಮೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ನ್ಯಾಷನಲ್ ಹ್ಯೂಮನ್ ರೈಟ್ಸ್ ವೆಲ್‌ಫೇರ್ ಟ್ರಸ್ಟ್ ವತಿಯಿಂದ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಮಕ್ಕಳ ದಾಖಲಾತಿ ಹೆಚ್ಚಿಸಲು ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಸಿಗುತ್ತಿರುವ ಸೌಲಭ್ಯಗಳ ಮಾಹಿತಿಯನ್ನು ಕರಪತ್ರಗಳಲ್ಲಿ ಭಿತ್ತರಿಸಿ ಹಾಗೂ ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಮನೆ ಮನೆಗೆ ಹೋಗಿ ಅರಿವು ಮೂಡಿಸಿ ಪೋಷಕರ ಮನವೊಲಿಸುವ ನಿಟ್ಟಿನಲ್ಲಿ ದಾಖಲಾತಿ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದರು. ನ್ಯಾಷನಲ್ ಹ್ಯೂಮನ್ ರೈಟ್ಸ್ ವತಿಯಿಂದ ಕೊರೋನಾ ಕಾಲದಲ್ಲಿ ಸೋಂಕಿತರಿಗಾಗಿ ಕೇಂದ್ರಗಳನ್ನು ಸ್ಥಾಪಿಸಿ ಚಿಕಿತ್ಸೆ ಕೊಡಿಸಲಾಗಿದೆ. ಹಸಿದವರಿಗೆ ಊಟ, ತಿಂಡಿ ನೀಡಲಾಗಿದೆ. ಆಗಾಗ್ಗೆ ಆರೋಗ್ಯ ಶಿಬಿರಗಳು, ಬಡವರಿಗೆ ಸಹಾಯ ಮಾಡುವುದು ಹಾಗೂ ಸರಕಾರಿ ಶಾಲೆಗಳಿಗೆ ಪ್ರೋತ್ಸಾಹ ನೀಡುವ ಕೆಲಸ ಮಾಡಲಾಗುತ್ತಿದೆ. ಇನ್ನು ಅನೇಕ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಅನ್ನು ಕೊಡುಗೆಯಾಗಿ ನೀಡಲಾಗಿದೆ. ಸಮಾಜ ಸೇವೆಗಳಲ್ಲಿ ನಮ್ಮ ಟ್ಸಸ್ಟ್ ಅನೇಕ ಕಾರ್ಯಕ್ರಮಗಳನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ನ್ಯಾಷನಲ್ ಹ್ಯೂಮನ್ ರೈಟ್ಸ್ ವೆಲ್‌ಫೇರ್ ಟ್ರಸ್ಟ್ ಜಿಲ್ಲಾಧ್ಯಕ್ಷ ರೆಹಮನ್ ಖಾನ್, ನಗರ ಅಧ್ಯಕ್ಷ ಅಬ್ದೂಲ್ ಖಾಲಿದ್, ಜಬ್ಬೂಲ್ ಶರೀಫ್, ಉಪಾಧ್ಯಕ್ಷ ಹರೀಶ್, ಕಾರ್ಯದರ್ಶಿ ಫಾರುಸೇನ್ ಶರೀಫ್ ಇತರರು ಉಪಸ್ಥಿತರಿದ್ದರು.