ಕನ್ನಡಪ್ರಭ ವಾರ್ತೆ ಹಾಸನ

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ‘ಹರ್‌ ಘರ್‌ ತಿರಂಗಾ’ ಅಭಿಯಾನವನ್ನು ಯಶಸ್ವಿಗೊಳಿಸುವ ಉದ್ದೇಶದಿಂದ ಮಾಜಿ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ. ಗೌಡ ಅವರು ಶುಕ್ರವಾರ ನಗರದಲ್ಲಿ ವಾಹನ ಚಾಲಕರು ಹಾಗೂ ಸಾರ್ವಜನಿಕರಿಗೆ ರಾಷ್ಟ್ರಧ್ವಜಗಳನ್ನು ವಿತರಿಸಿ, ವಾಹನಗಳಿಗೆ ಸ್ವತಃ ತಿರಂಗಾ ಕಟ್ಟುವ ಮೂಲಕ ಗಮನ ಸೆಳೆದರು.

ನಗರದ ಎಂ.ಜಿ. ರಸ್ತೆಯ ಗಾಂಧೀಜಿ ಪ್ರತಿಮೆ ಬಳಿ ನಡೆದ ಕಾರ್ಯಕ್ರಮದಲ್ಲಿ ಪ್ರೀತಂ ಜೆ. ಗೌಡ ಅವರು ಸಾರ್ವಜನಿಕರಿಗೆ ತಿರಂಗಾ ಧ್ವಜಗಳನ್ನು ಹಸ್ತಾಂತರಿಸಿದರು. ಬಳಿಕ ಹಲವು ವಾಹನಗಳಿಗೆ ಸ್ವತಃ ರಾಷ್ಟ್ರಧ್ವಜವನ್ನು ಕಟ್ಟುವ ಮೂಲಕ ಅಭಿಯಾನಕ್ಕೆ ಉತ್ತೇಜನ ನೀಡಿದರು. ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಪ್ರೀತಂ ಜೆ. ಗೌಡ, ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ‘ಹರ್‌ ಘರ್‌ ತಿರಂಗಾ’ ಅಭಿಯಾನವನ್ನು ಹಾಸನ ನಗರದಲ್ಲಿ ಪರಿಣಾಮಕಾರಿಯಾಗಿ ನಡೆಸಲು ಸಂಕಲ್ಪ ಮಾಡಲಾಗಿದೆ ಎಂದರು. ಹಾಸನ ನಗರ ಬಿಜೆಪಿ ಅಧ್ಯಕ್ಷ ಮಂಜು ಅವರ ನೇತೃತ್ವದಲ್ಲಿ ಪಕ್ಷದ ಹಿರಿಯರು ಹಾಗೂ ಕಾರ್ಯಕರ್ತರು ಮನೆಮನೆಗೆ ತೆರಳಿ ರಾಷ್ಟ್ರಧ್ವಜ ಹಾರಿಸುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಇದರ ಭಾಗವಾಗಿ ವಾಹನ ಚಾಲಕರು ಹಾಗೂ ಸಾರ್ವಜನಿಕರಿಗೆ ತಿರಂಗಾ ಧ್ವಜಗಳನ್ನು ವಿತರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರತಿಯೊಂದು ಮನೆ, ಅಂಗಡಿ, ಕಚೇರಿ ಹಾಗೂ ವಾಹನಗಳಲ್ಲೂ ರಾಷ್ಟ್ರಧ್ವಜ ರಾರಾಜಿಸುವಂತೆ ಮಾಡುವ ಉದ್ದೇಶದಿಂದ ಅಭಿಯಾನವನ್ನು ರೂಪಿಸಲಾಗಿದೆ. ದೇಶಭಕ್ತಿ ಮತ್ತು ರಾಷ್ಟ್ರಾಭಿಮಾನವನ್ನು ಪ್ರತಿಯೊಬ್ಬರಲ್ಲೂ ಮೂಡಿಸುವ ನಿಟ್ಟಿನಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನ ಮಹತ್ವದ್ದಾಗಿದೆ ಎಂದು ಅವರು ಹೇಳಿದರು. ಹಾಸನ ನಗರದಲ್ಲಿ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ವ್ಯಾಪಕವಾಗಿ ಕಾರ್ಯಕ್ರಮಗಳನ್ನು ನಡೆಸಿ ಜನರನ್ನು ಪಾಲ್ಗೊಳ್ಳುವಂತೆ ಮಾಡಲಾಗುವುದು. ಪ್ರತಿಯೊಬ್ಬರೂ ಸ್ವಾತಂತ್ರ್ಯ ದಿನದ ಸಂಭ್ರಮದಲ್ಲಿ ಭಾಗಿಯಾಗಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಬೇಕು ಎಂದು ಪ್ರೀತಂ ಜೆ. ಗೌಡ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ಆರ್. ಮೋಹನ್, ಪ್ರೀತಿವರ್ಧನ್, ಬಿ. ಎಚ್. ನಾರಾಯಣ್ ಗೌಡ, ಬಿ. ವೇದಾವತಿ, ಮಹೇಶ್, ಯೋಗೇಶ್, ಲಕ್ಷ್ಮೀಶ್, ನಾಗೇಂದ್ರ ಪ್ರಸಾದ್, ರೋಹಿತ್ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.