ಭಾರೀ ಜನಸ್ತೋಮ ಜತೆ ‘ಕೈ’ ಅಭ್ಯರ್ಥಿ ಸ್ಟಾರ್‌ ಚಂದ್ರು ನಾಮಪತ್ರ ಸಲ್ಲಿಕೆ

| Published : Apr 02 2024, 01:00 AM IST

ಭಾರೀ ಜನಸ್ತೋಮ ಜತೆ ‘ಕೈ’ ಅಭ್ಯರ್ಥಿ ಸ್ಟಾರ್‌ ಚಂದ್ರು ನಾಮಪತ್ರ ಸಲ್ಲಿಕೆ
Share this Article
  • FB
  • TW
  • Linkdin
  • Email

ಸಾರಾಂಶ

ಸೋಮವಾರ ಬೆಳಗ್ಗೆ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೀಗೌಡ ಬೆಂಗಳೂರಿನಲ್ಲಿ ಆದಿಚುಂಚನಗಿರಿ ಮಠದ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಮಂಡ್ಯಕ್ಕೆ ಆಗಮಿಸಿದರು. ಮೊದಲಿಗೆ ನಗರದ ಶ್ರೀವಿದ್ಯಾಗಣಪತಿ ದೇವಸ್ಥಾನಕ್ಕೆ ತೆರಳಿ ವಿಘ್ನೇಶ್ವರನಿಗೆ ಪ್ರಥಮ ಪೂಜೆ ಸಲ್ಲಿಸಿ ಬಳಿಕ ಗುತ್ತಲು ಗ್ರಾಮದಲ್ಲಿರುವ ಶ್ರೀಅರ್ಕೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಅರ್ಪಿಸಿದರು.

ಕನ್ನಡಪ್ರಭ ವಾರ್ತೆ ಮಂಡ್ಯ

ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಭಾರೀ ಜನ ಸಾಗರದೊಂದಿಗೆ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿಗೆ ಆಗಮಿಸಿ ಉಮೇದುವಾರಿಕೆ ಸಲ್ಲಿಸಿದರು.

ಸೋಮವಾರ ಬೆಳಗ್ಗೆ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೀಗೌಡ ಬೆಂಗಳೂರಿನಲ್ಲಿ ಆದಿಚುಂಚನಗಿರಿ ಮಠದ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಮಂಡ್ಯಕ್ಕೆ ಆಗಮಿಸಿದರು. ಮೊದಲಿಗೆ ನಗರದ ಶ್ರೀವಿದ್ಯಾಗಣಪತಿ ದೇವಸ್ಥಾನಕ್ಕೆ ತೆರಳಿ ವಿಘ್ನೇಶ್ವರನಿಗೆ ಪ್ರಥಮ ಪೂಜೆ ಸಲ್ಲಿಸಿ ಬಳಿಕ ಗುತ್ತಲು ಗ್ರಾಮದಲ್ಲಿರುವ ಶ್ರೀಅರ್ಕೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಅರ್ಪಿಸಿದರು. ಆ ನಂತರ ಶ್ರೀ ಲಕ್ಷ್ಮೀ ಜನಾರ್ದನಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಶ್ರೀಕಾಳಿಕಾಂಬ ದೇವಸ್ಥಾನಕ್ಕೆ ಆಗಮಿಸಿದರು.

ಶ್ರೀಕಾಳಿಕಾಂಬ ದೇವಾಲಯದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸುವ ಸಮಯದಲ್ಲಿ ಅಭ್ಯರ್ಥಿ ವೆಂಕಟರಮಣೇಗೌಡ ಅವರೊಂದಿಗೆ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕರಾದ ಪಿ.ರವಿಕುಮಾರ್, ಪಿ.ಎಂ.ನರೇಂದ್ರಸ್ವಾಮಿ ಅವರೂ ಹಾಜರಿದ್ದರು.

ಪೂಜೆ ಮುಗಿದ ಬಳಿಕ ತೆರೆದ ವಾಹನದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳುವುದಕ್ಕೆ ಸಿದ್ಧರಾದರು. ಮೆರವಣಿಗೆಯಲ್ಲಿ ಸಾಗಿದ ಅಭ್ಯರ್ಥಿ ಸ್ಟಾರ್ ಚಂದ್ರು ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ರಾಜ್ಯ ಸಭೆಯ ಸದಸ್ಯ ಜಿ.ಸಿ ಚಂದ್ರಶೇಖರ್, ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ಕದಲೂರು ಉದಯ್, ಪಿ.ರವಿಕುಮಾರ್, ಗೌರಿಬಿದನೂರು ಶಾಸಕ ಪುಟ್ಟಸ್ವಾಮಿಗೌಡ, ಶರತ್ ಬಚ್ಚೇಗೌಡ, ರಮೇಶ್‌ಬಾಬು ಬಂಡಿಸಿದ್ದೇಗೌಡ, ದಿನೇಶ್ ಗೂಳಿಗೌಡ, ಮರಿತಿಬ್ಬೇಗೌಡ, ರೈತ ಮುಖಂಡರಾದ ಸುನೀತಾ ಪುಟ್ಟಣ್ಣಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು. ಪಕ್ಷದ ಕಾರ್ಯಕರ್ತರ ಹರ್ಷೋದ್ಗಾರ, ಜೈಕಾರದ ನಡುವೆ ಮೆರವಣಿಗೆ ಜನಸಾಗರದ ನಡುವೆ ಸಾಗಿತು.

ಪೂಜಾ ಕುಣಿತ, ನಂದಿಕೋಲು, ಸೋಮನ ಕುಣಿತ, ಗಾರುಡಿ ಗೊಂಬೆ, ಮಹಿಷ ಸೇರಿದಂತೆ ಹಲವಾರು ಜಾನಪದ ಕಲಾ ತಂಡಗಳು ಪಾಲ್ಗೊಂಡು ಮೆರವಣಿಗೆಗೆ ಮೆರುಗು ನೀಡಿದವು. ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಜನರು ಮೆರವಣಿಗೆಯಲ್ಲಿ ಸಾಗಿಬಂದರು. ಹೆದ್ದಾರಿಯುದ್ದಕ್ಕೂ ಜನವೋ ಜನ. ತೆರೆದ ವಾಹನದಲ್ಲಿ ಅಭ್ಯರ್ಥಿಯ ಜೊತೆ ಸಚಿವರು, ಶಾಸಕರು ಸೇರಿದಂತೆ ಪ್ರಮುಖ ಮುಖಂಡರು ಜನರತ್ತ ಕೈಬೀಸುತ್ತಾ, ಕೈ ಮುಗಿಯುತ್ತಾ ಮತ ಹಾಕುವಂತೆ ಮನವಿ ಮಾಡಿದರು.

ನಗರದ ಎಸ್.ಡಿ.ಜಯರಾಂ ವೃತ್ತಕ್ಕೆ ಮೆರವಣಿಗೆ ಆಗಮಿಸಿದಾಗ ಬೃಹತ್ ಮೂಸಂಬಿ ಹಾರವನ್ನು ಕಾಂಗ್ರೆಸ್ ನಾಯಕರಿಗೆ ಹಾಕಿ ಸ್ವಾಗತಿಸಿದರೆ, ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಭಾರೀ ಗಾತ್ರದ ಸೇಬಿನ ಹಾರದ ಸ್ವಾಗತ ನೀಡಲಾಯಿತು.

ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಲಾಯಿತು. ನಾಮಪತ್ರ ಸಲ್ಲಿಕೆ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಎನ್.ಚಲುವರಾಯಸ್ವಾಮಿ, ಶಾಸಕರಾದ ಪಿಎಂ ನರೇಂದ್ರಸ್ವಾಮಿ, ಕದಲೂರು ಉದಯ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಶಿವಣ್ಣ ಹಾಗೂ ರೈತ ಮುಖಂಡರಾದ ಸುನೀತಾ ಪುಟ್ಟಣ್ಣಯ್ಯ ಹಾಜರಿದ್ದರು.