ಜೆಜೆಎಂ ಕಾಮಗಾರಿ ಗುಣಮಟ್ಟ ಕಾಪಾಡಿ

| Published : Jul 25 2025, 12:30 AM IST

ಸಾರಾಂಶ

ಪ್ರತಿ ಮನೆಗೂ ನಳ ಸಂಪರ್ಕ ಕಲ್ಪಿಸಬೇಕು ಹಾಗೂ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಪೈಪ್ ಲೈನ್ ಅಳವಡಿಸಲು ರಸ್ತೆಗಳನ್ನು ಅಗೆದಿದ್ದು, ಆ ಕಾಮಗಾರಿ ಪೂರ್ಣಗೊಂಡ ಬಳಿಕ ಯಥಾಸ್ಥಿತಿಯಲ್ಲಿ ರಸ್ತೆಗಳನ್ನು ಕಾಂಕ್ರಿಟ್ ಹಾಕಿ ಮುಚ್ಚಬೇಕು. ಪೈಪ್ ಲೈನ್ ಹಾಗೂ ನಲ್ಲಿಗಳು ಹಾಳಾದಲ್ಲಿ ತಕ್ಷಣವೇ ದುರಸ್ತಿ ಕೈಗೊಳ್ಳಬೇಕು

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಜಿಲ್ಲೆಯ ಗುಡಿಬಂಡೆ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲ್ ಜೀವನ್ ಮಿಷನ್(ಜೆಜೆಎಂ) ಗ್ರಾಮೀಣ ಯೋಜನೆಯಡಿ ಕೈಗೊಂಡಿರುವ ಹಲವು ಕಾಮಗಾರಿಗಳನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಡಾ. ವೈ. ನವೀನ್ ಭಟ್ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೊದಲಿಗೆ ದಪ್ಪರ್ತಿ ಗ್ರಾಮ ಪಂಚಾಯಿತಿಯ ಮ್ಯಾಕಲಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ಜಲ್ ಜೀವನ್ ಮಿಷನ್ ಯೋಜನೆಯಡಿ ಅಳವಡಿಸಲಾಗಿರುವ ನಳ(ನಲ್ಲಿ) ಸಂಪರ್ಕ ಹಾಗೂ ಕಾಮಗಾರಿಗಳನ್ನು ಪರಿಶೀಲಿಸಿದರು. ಕಾಮಗಾರಿ ಗುಣಮಟ್ಟ ಕಾಪಾಡಿ

ಇದೇ ವೇಳೆ ಮಾತನಾಡಿದ ಅವರು, ಪ್ರತಿ ಮನೆಗೂ ನಳ ಸಂಪರ್ಕ ಕಲ್ಪಿಸಬೇಕು ಹಾಗೂ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಪೈಪ್ ಲೈನ್ ಅಳವಡಿಸಲು ರಸ್ತೆಗಳನ್ನು ಅಗೆದಿದ್ದು, ಆ ಕಾಮಗಾರಿ ಪೂರ್ಣಗೊಂಡ ಬಳಿಕ ಯಥಾಸ್ಥಿತಿಯಲ್ಲಿ ರಸ್ತೆಗಳನ್ನು ಕಾಂಕ್ರಿಟ್ ಹಾಕಿ ಮುಚ್ಚಬೇಕು. ಪೈಪ್ ಲೈನ್ ಹಾಗೂ ನಲ್ಲಿಗಳು ಹಾಳಾದಲ್ಲಿ ತಕ್ಷಣವೇ ದುರಸ್ತಿ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಭಿಯಂತರರು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು. ನಂತರ ಕೊಂಡಾವಲಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ, ಅಲ್ಲಿ ಜಲ್ ಜೀವನ್ ಮಿಷನ್ ಗ್ರಾಮೀಣ ಯೋಜನೆಯಡಿ ನಿರ್ಮಾಣ ಮಾಡಲಾದ ಓವರ್ ಹೆಡ್ ಟ್ಯಾಂಕ್ ನ್ನು ವೀಕ್ಷಿಸಿದರು. ನಂತರ ಅದೇ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಿರ್ಮಾಣ ಮಾಡಲಾದ ಚರಂಡಿ ಕಾಮಗಾರಿಗಳನ್ನು ಹಾಗೂ ಕುರಿ ಸಾಕಾಣಿಕಾ ಘಟಕಗಳನ್ನು ಪರಿಶೀಲಿಸಿದರು. ಈ ವೇಳೆ ರೈತರೊಂದಿಗೆ ಸಂವಾದ ನಡೆಸಿದರು. ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ

ಬಳಿಕ ಸರ್ಕಾರಿ ಶಾಲೆ ಅಂಗನವಾಡಿಗಳಿಗೆ ಭೇಟಿ ನೀಡಿ, ಮಕ್ಕಳು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರೊಂದಿಗೆ ಸಮಾಲೋಚನೆ ನಡೆಸಿದ ಅವರು, ಶಾಲೆಯಲ್ಲಿ ಬಿಸಿಯೂಟ, ಮೊಟ್ಟೆ ಹಾಗೂ ಪೌಷ್ಟಿಕ ಆಹಾರ ನೀಡುವ ಬಗ್ಗೆ ಮಾಹಿತಿ ಪಡೆದರು. ಇದೇ ವೇಳೆ ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿ ಕುಟುಂಬಗಳಿಗೆ ವೈಯಕ್ತಿಕ ಶೌಚಾಲಯ, ಪ್ರತಿದಿನದ ಕಸ ವಿಲೇವಾರಿ ಬಗ್ಗೆ ಮಾಹಿತಿ ಪಡೆದು, ಸೂಕ್ತ ತ್ಯಾಜ್ಯ ವಿಲೇವಾರಿ ಮಾಡುವಂತೆ ಸಂಬಂಧ ಪಟ್ಟ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು. ನೀರಿನ ಘಟಕ ನಿರ್ವಹಣೆ

ತದನಂತರ ತಿರುಮಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಮಚೇರ್ಲು, ಪೆಮ್ಮನಹಳ್ಳಿ ಹಾಗೂ ಬೋಗೇನಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ, ಮನೆ ಮನೆ ಗಂಗೆ ಕಾಮಗಾರಿಗಳನ್ನು ಪರಿಶೀಲಿಸಿ, ಯಾವುದೇ ಕಾರಣಕ್ಕೂ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ನೀರಿನ ವ್ಯತ್ಯಯ ಆಗದಂತೆ ಘಟಕಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಬೇಕು ಎಂದು ಪಂಚಾಯಿತಿ ಪಿಡಿಒ ರವರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ರಾಮಕೃಷ್ಣಪ್ಪ, ಗುಡಿಬಂಡೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನಾಗಮಣಿ, ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಜೆಜೆಎಂ, ನರೇಗಾ, ಸ್ವಚ್ಛ ಭಾರತ್ ಮಿಷನ್ ಯೋಜನೆಗಳ ಜಿಲ್ಲಾ ಸಮಾಲೋಚಕರು ಹಾಗೂ ತಾಂತ್ರಿಕ ಸಿಬ್ಬಂದಿ ಇದ್ದರು.