ಸಾರಾಂಶ
ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ವತಿಯಿಂದ ಮಡಿಕೇರಿ ನಗರದ ಗಾಂಧಿ ಮೈದಾನದಿಂದ ಮುಖ್ಯ ರಸ್ತೆಯಲ್ಲಿ ಜಾಥಾ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಮಡಿಕೇರಿ
ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ–2025 ರ ಅಂಗವಾಗಿ ಬುಧವಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ವತಿಯಿಂದ ಮಡಿಕೇರಿ ನಗರದ ಗಾಂಧಿ ಮೈದಾನದಿಂದ ಮುಖ್ಯ ರಸ್ತೆಯಲ್ಲಿ ಜಾಥಾ ಕಾರ್ಯಕ್ರಮ ನಡೆಯಿತು.ಜಿಲ್ಲಾಧಿಕಾರಿ ವೆಂಕಟ್ ರಾಜಾವರು ಜಾಥಾಗೆ ಚಾಲನೆ ನೀಡಿದರು. ಜಾಥಾವು ಸ್ಕೌಟ್ಸ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳು, ಚಾಲನಾ ತರಬೇತಿ ಶಾಲೆಗಳು, ಆಟೋರಿಕ್ಷಾ/ ಟ್ಯಾಕ್ಸಿ/ ಚಾಲಕ ಮಾಲೀಕರ ಸಂಘ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಜರುಗಿತು. ರಾಜು ಕಲಾವಿದರ ತಂಡದ ವತಿಯಿಂದ ರಸ್ತೆ ನಾಟಕಗಳ ಮುಖೇನ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು. ಪ್ರಮುಖ ಪಟ್ಟಣಗಳಲ್ಲಿ ಕರಪತ್ರ ಹಂಚಿಕೆ, ಬ್ಯಾನರ್ ಮತ್ತು ಫ್ಲೆಕ್ಸ್ ಅಳವಡಿಕೆ ಕಾರ್ಯಕ್ರಮಗಳು, ಶಾಲಾ-ಕಾಲೇಜುಗಳಲ್ಲಿ ಚಿತ್ರಕಲೆ, ರಸಪ್ರಶ್ನೆ ಸ್ಪರ್ಧೆಗಳನ್ನು ಜರುಗಿಸಿದ್ದು, ಮಕ್ಕಳಲ್ಲಿ ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಲಾಯಿತು.
ಜಾಥಾಗೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಸಾರ್ವಜನಿಕರು ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ ರಸ್ತೆ ಅಪಘಾತಗಳನ್ನು ತಡೆಯುವುದರಲ್ಲಿ ಯಶಸ್ವಿಯಾಗುವಂತೆ ಹಾಗೂ ಸಂಚಾರಿ ನಿಯಮಗಳನ್ನು ಪಾಲನೆ ಮಾಡುವಂತೆ, ಹೆಲ್ಮೆಟ್, ಸೀಟ್ ಬೆಲ್ಟ್ ಕಡ್ಡಾಯವಾಗಿ ಧರಿಸುವಂತೆ ತಿಳಿಸಿದರು.ಪ್ರಾದೇಶಿಕ ಸಾರಿಗೆ ಅಧಿಕಾರಿ ವಿ.ನಾಗರಾಜಾಚಾರ್, ಮೋಟಾರು ವಾಹನ ನಿರೀಕ್ಷಕರಾದ ಶಿವಕುಮಾರ್, ಪ್ರದೀಪ್ ಕುಮಾರ್, ಅಧೀಕ್ಷಕರಾದ ಕೆ.ಎ.ಸಲೀಮಾ, ಎನ್.ಮೋಹನ ಕುಮಾರ್, ಡಿ.ಕೆ.ರೀಟಾ ಇತರರು ಇದ್ದರು.