ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 5 ಜನ ಭಾಜನ

| Published : Sep 05 2024, 12:41 AM IST

ಸಾರಾಂಶ

ಅದ್ಧೂರಿ ಶಿಕ್ಷಕರ ದಿನಾಚರಣೆಗೆ ಶಿಕ್ಷಣ ಇಲಾಖೆ ಸಿದ್ಧತೆ: ಬಿಇಒ ಸುರೇಶ್

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದ್ದು, ಶಿಕ್ಷಕರ ದಿನಾಚರಣೆ ಅಂಗವಾಗಿ ತಾಲೂಕಿನ 5 ಶಿಕ್ಷಕರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದ್ದು, ಅವರನ್ನು ಶಿಕ್ಷಣ ಇಲಾಖೆ ಪರವಾಗಿ ಹಾರ್ಥಿಕವಾಗಿ ಅಭಿನಂದಿಸುವುದಾಗಿ ಕ್ಷೇತ್ರ ಶಿಕ್ಷಣಧಿಕಾರಿ ಕೆ.ಎಸ್.ಸುರೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷವೂ ಜಿಲ್ಲಾ ಮಟ್ಟದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ನೀಡುತ್ತಿದ್ದು, ಈ ಬಾರಯೂ ತಾಲೂಕಿನ 5 ಶಿಕ್ಷಕರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಶಿಕ್ಷಕರಿಗೆ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ನೀಡುವ ಮೂಲಕ ಶಿಕ್ಷಕರ ಪ್ರಾಮಾಣಿಕ ಕಾರ್ಯವನ್ನು ಇಲಾಖೆ ಪ್ರಶಂಸಿಸಿದೆ. ಇದು ಎಲ್ಲಾ ಶಿಕ್ಷಕರಿಗೂ ಅವರ ವೃತ್ತಿ ಬದುಕಿನಲ್ಲಿ ಇನ್ನೂ ಹೆಚ್ಚು ಸಾಧನೆಗೆ ಪ್ರೇರಣೆಯಾಗಲಿದೆ ಎಂದು ತಿಳಿಸಿದರು.

ತಾಲೂಕಿನ ಮೈಲನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಎನ್.ರಾಧಮಣಿ, ಗೋಪನಹಳ್ಳಿ(ಯಾದವನಗರ)ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಂ.ಮಲ್ಲಿಕಾರ್ಜುನ್, ಸಿದ್ದಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಡಿ.ಪುಪ್ಪಲತಾ, ಆದರ್ಶ ವಿದ್ಯಾಲಯದ ಸಹ ಶಿಕ್ಷಕ ಜಿ.ಎಂ.ವೀರಭದ್ರಪ್ಪ, ಹರವಿಗೊಂಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಚ್.ಸುರೇಶ್ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನಾರಾಗಿದ್ದಾರೆ.

ವಿಶೇಷ ಪ್ರಶಸ್ತಿಯನ್ನು ಬುಕ್ಲೂರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವನಗೌಡ ಪಡೆದಿದ್ದು, ಪ್ರಶಸ್ತಿ ವಿಜೇತ ಎಲ್ಲಾ ಶಿಕ್ಷಕರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಶುಭಹಾರೈಸಿದ್ದಾರೆ.

ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಸೆ.5ರ ಗುರುವಾರ ಬೆಳಗ್ಗೆ 8.30ಕ್ಕೆ ನಗರದ ಪ್ರವಾಸಿಮಂದಿರದಲ್ಲಿ ಬೃಹತ್ ಮೆರವಣಿಗೆಗೆ ನಗರಸಭೆ ಅಧ್ಯಕ್ಷೆ ಜೈತುಂಬಿ ಚಾಲನೆ ನೀಡಲಿದ್ದು, ಎಲ್ಲಾ ಶಿಕ್ಷಕರು ಮೆರವಣಿಗೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.