ಸಾರಾಂಶ
ಗುಂಡ್ಲುಪೇಟೆಯಲ್ಲಿ ನಡೆದ ವಲಯ ಮತ್ತು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ
ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣಕ್ಕೆ ಸಿಂಥೆಟಿಕ್ ಟ್ರ್ಯಾಕ್‌ಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಆಯೋಜಿಸಿದ್ದ ೨೦೨೪-೨೫ ನೇ ಸಾಲಿನ ಹಿರಿಯ ಮತ್ತು ಪ್ರೌಢಶಾಲೆಗಳ ವಲಯ ಮತ್ತು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಗುಂಡು ಎಸೆದು ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆ ಹೊರ ತರಲು ಕ್ರೀಡಾಕೂಟಗಳು ಸಹಕಾರಿ ಎಂದರು.
ಕ್ರೀಡಾಕೂಟದಲ್ಲಿ ಜಯ ಸಾಧಿಸಿದ ಕ್ರೀಡಾಪಟುಗಳು ಜಿಲ್ಲಾ ಮಟ್ಟ, ರಾಜ್ಯ ಮಟ್ಟದ ಜೊತೆಗೆ ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ, ಗೆಲುವು ಸಾಧಿಸಿ ಗುಂಡ್ಲುಪೇಟೆ ತಾಲೂಕಿಗೆ ಕೀರ್ತಿ ತರಬೇಕು ಎಂದು ಶುಭ ಹಾರೈಸಿದರು. ಕ್ರೀಡೆ ಬದುಕಿನ ಒಂದು ಭಾಗವಾಗಿದೆ. ಕ್ರೀಡೆಯಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಜೊತೆಗೆ ಕ್ರೀಡೆಯಿಂದ ಮನೋಭಾವ ಹೆಚ್ಚಿಸುವ ಜತೆಗೆ ಒತ್ತಡವೂ ಕಡಿಮೆಯಾಗುತ್ತದೆ ಎಂದರು.ಕ್ರೀಡಾಕೂಟದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶೇಖರ್, ಪುರಸಭೆ ಸದಸ್ಯ ಎನ್.ಕುಮಾರ್,ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಡಾ.ಸರೋಜಮ್ಮ,ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್, ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಂ.ಗುರುಪ್ರಸಾದ್,ದೈಹಿಕ ಶಿಕ್ಷಣ ಪರಿವೀಕ್ಷಕ ಮಲ್ಲನಾಯಕ,ಚಿಕ್ಕಮಲ್ಲಪ್ಪ ಹಲವರಿದ್ದರು.