ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲರ ಜವಾಬ್ದಾರಿ

| Published : Sep 04 2024, 01:50 AM IST

ಸಾರಾಂಶ

ತಮ್ಮ ಸುತ್ತ ಮುತ್ತಲಲ್ಲಿ ಮಕ್ಕಳ ಹಕ್ಕುಗಳಿಗೆ ದಕ್ಕೆ ಯಾಗುತ್ತಿರುವುದು ಕಂಡು ಬಂದರೆ ಸಕ್ಷಮ ಪ್ರಾಧಿಕಾರಗಳಿಗೆ ಅಥವಾ ಮಕ್ಕಳ ಸಹಾಯವಾಣಿ 1098ಗೆ ಮಾಹಿತಿ ನೀಡುವಂತೆ ಸಾರ್ವಜನಿಕರನ್ನು ಪ್ರೇರೇಪಿಸಬೇಕು. ಅಂತಹವರ ವಿವರವನ್ನು ಗೌಪ್ಯವಾಗಿಡಬೇಕು. ತಂದೆ ತಾಯಿಯರು, ಪೋಷಕರು ತಮ್ಮ ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯಬೇಕು.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಮಕ್ಕಳ ಸಮಸ್ಯೆ ಹಾಗೂ ನ್ಯೂನ್ಯತೆಗಳನ್ನು ಪರಿಹರಿಸುವ ಮೂಲಕ ಅವರಿಗೆ ರಕ್ಷಣೆ ನೀಡುವುದು ನಮ್ಮೆಲ್ಲರ ಸಾಮಾಜಿಕ ಜವಾಬ್ದಾರಿ ಎಂದು ರಾಜ್ಯ ಮಕ್ಕಳ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ತಿಳಿಸಿದರು.

ಮಂಗಳವಾರ ಜಿಲ್ಲಾಡಳಿತ ಭವನದ ಸರ್ ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆದ ‘ಮಕ್ಕಳ ಹಕ್ಕುಗಳ ರಕ್ಷಣೆ’ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ನೀರು, ಪರಿಸರ, ಮಕ್ಕಳು ಈ ಮೂರನ್ನು ಬಿಟ್ಟು ಸಮಾಜವನ್ನು ಕಲ್ಪನೆ ಮಾಡಿಕೊಳ್ಳುವುದು ಸಾಧ್ಯವಿಲ್ಲ ಎಂದರು.

ಮಕ್ಕಳ ಶೋಷಣೆ ತಡೆಗಟ್ಟಿದುರಂತವೆಂದರೆ ಪೋಷಕರು ಮಕ್ಕಳ ಜೊತೆ ಸಮಯ ಕಳೆಯುವುದನ್ನು ಕಡಿಮೆಯಾಗುತ್ತಿದೆ. ಮಕ್ಕಳ ಹಕ್ಕುಗಳು ಉಲ್ಲಂಘನೆ ಪ್ರಕರಣಗಳು, ದೌರ್ಜನ್ಯ ಪ್ರಕರಣಗಳು ನಡೆಯುವುದನ್ನು ದಿನ ನಿತ್ಯ ನಡೆಯುತ್ತಿವೆ. ಮಕ್ಕಳ ಸ್ನೇಹಿ ಇಲಾಖೆಗಳಾದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಕ್ಕಳ ರಕ್ಷಣ ಘಟಕ ಸೇರಿದಂತೆ ಇತರ ಇಲಾಖೆಗಳ ಸಹಯೋಗದಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಬಾಲ್ಯ ವಿವಾಹ, ಭ್ರೂಣ ಹತ್ಯೆ, ಲಿಂಗಪತ್ತೆ ಪ್ರಕರಣ ತಡೆಗಟ್ಟಲು ಪ್ರಯತ್ನಿಸಬೇಕು ಎಂದರು.

ತಮ್ಮ ಸುತ್ತ ಮುತ್ತಲಲ್ಲಿ ಮಕ್ಕಳ ಹಕ್ಕುಗಳಿಗೆ ದಕ್ಕೆ ಯಾಗುತ್ತಿರುವುದು ಕಂಡು ಬಂದರೆ ಸಕ್ಷಮ ಪ್ರಾಧಿಕಾರಗಳಿಗೆ ಅಥವಾ ಮಕ್ಕಳ ಸಹಾಯವಾಣಿ 1098ಗೆ ಮಾಹಿತಿ ನೀಡುವಂತೆ ಸಾರ್ವಜನಿಕರನ್ನು ಪ್ರೇರೇಪಿಸಬೇಕು. ಅಂತಹವರ ವಿವರವನ್ನು ಗೌಪ್ಯವಾಗಿಡಬೇಕು. ತಂದೆ ತಾಯಿಯರು, ಪೋಷಕರು ತಮ್ಮ ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯಬೇಕು. ಮಕ್ಕಳಿಗೆ ಅನ್ಯಾಯವಾಗುತ್ತಿದ್ದಲ್ಲಿ ಸಕ್ಷಮ ಪ್ರಾಧಿಕಾರಗಳನ್ನು ಸಂಪರ್ಕಿಸಿ ನ್ಯಾಯ ಕೊಡಿಸುವಂತಹ ಪ್ರವೃತ್ತಿಯನ್ನು ಎಲ್ಲರೂ ರೂಢಿಸಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ 124 ಪೋಕ್ಸೋ ಪ್ರಕರಣ

ಜನವರಿ 2024ರ ಮಾಹೆಯಿಂದ ಈವರೆಗೆ 124 ಪೋಕ್ಸೋ ಪ್ರಕರಣಗಳು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದಾಖಲಾಗಿದ್ದು, ಈ ಪೈಕಿ 101 ಪ್ರಕರಣಗಳನ್ನು ಸೂಕ್ತ ಕ್ರಮ ಕೈಗೊಂಡು ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಇನ್ನುಳಿದ 23 ಪ್ರಕರಣಗಳನ್ನು ತ್ವರಿತಗತಿಯಲ್ಲಿ ತನಿಖೆಯನ್ನು ಪೂರ್ಣಗೊಳಿಸಿ ತಪ್ಪಿತಸ್ಥರಿಗೆ ಕಾನೂನು ರೀತ್ಯ ಶಿಕ್ಷೆ ಕೊಡಿಸುವ ಮೂಲಕ ಸಂತ್ರಸ್ತ ಮಕ್ಕಳಿಗೆ ನ್ಯಾಯ ಒದಗಿಸಬೇಕು ಎಂದು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು. ಕೋವಿಡ್ ನಿಂದ ತಂದೆ ತಾಯಿಗಳನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಯೋಜನೆಯಡಿ 10ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಚಿಂತಾಮಣಿ ವಿದ್ಯಾರ್ಥಿನಿ ಭಾಗ್ಯಲಕ್ಷ್ಮಿ ಅವರಿಗೆ ಲ್ಯಾಪ್ ಟಾಪ್ ನ್ನು ವಿತರಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೆಂಕಟೇಶರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದರೆಡ್ಡಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೌತಾಜ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರಾಮರಾಜೆಅರಸು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.