ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ

ಅಂತಾರಾಷ್ಟ್ರೀಯ ಮಾದಕ ವಸ್ತು ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನಾಚರಣೆಯ ಅಂಗವಾಗಿ ಜೂ. 25, 26ರಂದು ಜಿಲ್ಲೆಯಾದ್ಯಂತ ವಿಶೇಷ ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಪ್ರಭು ತಿಳಿಸಿದರು.

ನಗರದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಗುರುವಾರ ಆಯೋಜಿಸಿದ್ದ ವಿಶೇಷ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿ, ಯುವಜನರನ್ನು ಮಾದಕ ವಸ್ತುಗಳ ದುಷ್ಪರಿಣಾಮಗಳಿಂದ ರಕ್ಷಿಸುವುದು ಮತ್ತು ಮಾದಕ ವಸ್ತು ಮುಕ್ತ ಸಮಾಜ ನಿರ್ಮಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಡ್ರಗ್ಸ್‌ಗೆ ನೋ ಹೇಳಿ- ಜೀವನಕ್ಕೆ ಯೆಸ್ ಹೇಳಿ ಹಾಗೂ ಮಾದಕ ವಸ್ತು ಮುಕ್ತ ಚಿಕ್ಕಬಳ್ಳಾಪುರ ಜಿಲ್ಲೆಯ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸೋಣ ಎಂಬ ಸಂದೇಶವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ವಿನೂತನ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದರು.

ಯುವಜನರನ್ನು ಆಕರ್ಷಿಸುವ ಉದ್ದೇಶದಿಂದ ಸೇ ನೋ ಟೂ ಡ್ರಗ್ಸ್ ಸೆಲ್ಫಿ ಪಾಯಿಂಟ್‌ಗಳನ್ನೂ ನಿರ್ಮಿಸಲಾಗಿದೆ. ತಂತ್ರಜ್ಞಾನದ ನೆರವಿನಿಂದ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಇ-ಪ್ರತಿಜ್ಞೆ ಸ್ವೀಕರಿಸುವ ವ್ಯವಸ್ಥೆ ಕಲ್ಪಿಸಲಾಗಿದ್ದು, ಭಾಗವಹಿಸುವವರಿಗೆ ತಕ್ಷಣವೇ ಡಿಜಿಟಲ್ ಪ್ರಮಾಣಪತ್ರ ನೀಡಲಾಗುತ್ತಿದೆ. ಯುವಜನರಲ್ಲಿ ಜಾಗೃತಿ ಮೂಡಿಸುವ ಹೊಸ ಪ್ರಯತ್ನಕ್ಕೆ ಚಾಲನೆ ನೀಡಲಾಗಿದೆ. ಮಾದಕ ವಸ್ತುಗಳ ವಿರುದ್ಧ ಕಠಿಣ ಕ್ರಮದ ಸಂದೇಶವಾಗಿ, ಕಾನೂನುಬದ್ಧ ಪ್ರಕ್ರಿಯೆಯಂತೆ 60 ಕೆ.ಜಿ.ಗೂ ಅಧಿಕ ಗಾಂಜಾವನ್ನು ನಾಶಪಡಿಸುವ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ. ಜಿಲ್ಲಾದ್ಯಂತ ಮಾದಕ ವಸ್ತುಗಳ ವಿರುದ್ಧ ನಿರಂತರ ಕಾರ್ಯಾಚರಣೆ ಮುಂದುವರಿದಿದ್ದು, ಇಂತಹ ಅಕ್ರಮ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಎಸ್ಪಿ ಕುಶಲ್ ಚೌಕ್ಷೆ ಮಾತನಾಡಿ, ಮಾದಕ ವಸ್ತು ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ, ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಗಳು, ಜಾಗೃತಿ ಮೆರವಣಿಗೆಗಳು ಹಾಗೂ ಅರಿವು ಮೂಡಿಸುವ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಜೂ, 26ರಂದು ವಿದ್ಯಾರ್ಥಿಗಳು, ಯುವಜನರು, ಸಾರ್ವಜನಿಕರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಯ ಭಾಗವಹಿಸುವಿಕೆಯಲ್ಲಿ ಮಾದಕ ವಸ್ತು ವಿರೋಧಿ ವಾಕಥಾನ್ ಆಯೋಜಿಸಲಾಗುತ್ತಿದೆ. ಇದೇ ವೇಳೆ ಪೊಲೀಸ್ ಇಲಾಖೆಯ ಸಿಬ್ಬಂದಿಯೊಬ್ಬರು ರಚಿಸಿ ಹಾಡಿರುವ ಸೇ ನೋ ಟೂ ಡ್ರಗ್ಸ್ ಕನ್ನಡ ರ್‍ಯಾಪ್ ಗೀತೆಯನ್ನು ಬಿಡುಗಡೆ ಮಾಡಿ ಜಾಗೃತಿ ಮೂಡಿಸಲಾಗುತ್ತಿದೆ. ಸಮಾಜದಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವ್ಯಾಪಕ ಅರಿವು ಮೂಡಿಸಿ, ಆರೋಗ್ಯಕರ ಜೀವನಶೈಲಿಯತ್ತ ಜನರನ್ನು ಪ್ರೇರೇಪಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದರು.


ಜಾಗೃತಿ ಜಾಥಾ ಕಾರ್ಯಕ್ರಮವು ನಗರದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಿಂದ ಜಿಲ್ಲಾ ಕನ್ನಡ ಭವನದವರೆಗೆ ಯಶಸ್ವಿಯಾಗಿ ಜರುಗಿತು ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಜಾಗೃತಿ ಫಲಕಗಳನ್ನು ಹಿಡಿದು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಜಿಪಂ ಸಿಇಒ ಡಾ. ವೈ.ನವೀನ್ ಭಟ್, ಎಎಸ್ಪಿ ಜಗನ್ನಾಥರೈ, ಡಿವೈಎಸ್ ಪಿ ರಮೇಶ್, ಪೊಲೀಸ್ ಅಧಿಕಾರಿಗಳು, ಕ್ರೀಡಾಪಟು ಮಂಚನಬಲೆ ಶ್ರೀನಿವಾಸ್ ಮತ್ತಿತರರು ಇದ್ದರು. ಸಿಕೆಬಿ-3 ನಗರದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ವಿಶೇಷ ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಜಿ. ಪ್ರಭು ಚಾಲನೆ ನೀಡಿದರು.