ರಾಷ್ಟ್ರ ರಾಜಧಾನಿ ನವ ದೆಹಲಿಯಲ್ಲಿ ಮಾರುಕಟ್ಟೆಗೆ ಕರ್ನಾಟಕ ನಂದಿನಿ ಹಾಲು ಬಿಡುಗಡೆ

| Published : Nov 22 2024, 01:15 AM IST / Updated: Nov 22 2024, 09:15 AM IST

Nandini
ರಾಷ್ಟ್ರ ರಾಜಧಾನಿ ನವ ದೆಹಲಿಯಲ್ಲಿ ಮಾರುಕಟ್ಟೆಗೆ ಕರ್ನಾಟಕ ನಂದಿನಿ ಹಾಲು ಬಿಡುಗಡೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತದಿಂದ ಗುರುವಾರ ನಂದಿನಿ ವಿವಿಧ ಶ್ರೇಣಿಯ ಹಾಲನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದರು.

 ನವದೆಹಲಿ : ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತದಿಂದ ಗುರುವಾರ ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ ಮಾಡಿ ಮಾತನಾಡಿದರು.

ದೆಹಲಿಯಲ್ಲಿ ಕೆ.ಎಂ.ಎಫ್ ಮತ್ತು ಮಂಡ್ಯ ಹಾಲು ಒಕ್ಕೂಟದ ವಿವಿಧ ಶ್ರೇಣಿಯ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ಹಿಂದೆ ನಾನು ಪಶುಸಂಗೋಪನಾ ಸಚಿವನಾಗಿದ್ದು, ಒಂದು ವರ್ಷ ಕಾಲ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷನೂ ಆಗಿದ್ದೆ ಎಂದು ಸ್ಮರಿಸಿದ ಮುಖ್ಯಮಂತ್ರಿಗಳು ಪಶುಸಂಗೋಪನಾ ಸಚಿವನಾಗಿದ್ದಾಗಲೇ ಹಾಲು ಉತ್ಪಾದಕರಿಗೆ ಶೋಷಣೆಯಾಗುತ್ತಿದ್ದನ್ನು ಮನಃಗಂಡು ಶಾಶ್ವತ ಮಾರುಕಟ್ಟೆ ಕಲ್ಪಿಸಲು ಹಾಲು ಉತ್ಪಾದಕರ ಸಂಘಗಳನ್ನು ರಚಿಸಲಾಯಿತು ಎಂದರು.

ರಾಜ್ಯದಲ್ಲಿ ಪ್ರತಿದಿನ 92 ರಿಂದ 93 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದೆ. ರಾಜ್ಯದಲ್ಲಿ ಒಟ್ಟು 16 ಮಿಲ್ಕ್ ಯೂನಿಯನ್‌ಗಳಿವೆ. ರಾಜ್ಯದಲ್ಲಿ ಅಂದಾಜು 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಆಂಧ್ರಪ್ರದೇಶ, ಮಹಾರಾಷ್ಟ್ರಕ್ಕೆ ನಿತ್ಯ ತಲಾ 2.5 ಲಕ್ಷ ಲೀಟರ್ ಹಾಲು ಪೂರೈಕೆಯಾಗುತ್ತಿದೆ. ಇದೀಗ ಆರಂಭಿಕ ಹಂತದಲ್ಲಿ ನಿತ್ಯ 2.5 ಲಕ್ಷ ಲೀ. ಹಾಲು ನವದೆಹಲಿಗೆ ಪೂರೈಸುವ ಯೋಜನೆ ರೂಪಿಸಲಾಗಿದೆ. ಇನ್ನು 6 ತಿಂಗಳೊಳಗೆ ಇದನ್ನು 5 ಲಕ್ಷ ಲೀ.ಗೆ ಏರಿಸುವ ಗುರಿ ನಮ್ಮದು. ಹಾಲಿನ ಉತ್ಪಾದನೆಗಳಿಗೆ ಮಾರುಕಟ್ಟೆ ಬಹಳ ಮುಖ್ಯ ಎಂದರು.

ಈ ವೇಳೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ವೆಂಕಟೇಶ್, ಕೃಷಿ ಸಚಿವ ಚೆಲುವರಾಯಸ್ವಾಮಿ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷ ಭೀಮಣ್ಣ ನಾಯಕ್, ರಾಜ್ಯ ಸಭಾ ಸದಸ್ಯ ಈರಣ್ಣ ಕರಾಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಮಂಡ್ಯ ಹಾಲು ಒಕ್ಕೂಟದ ಅಧ್ಯಕ್ಷ ತಿಮ್ಮೇಗೌಡ, ಇತರರು ಇದ್ದರು.

ದೆಹಲಿ ಹಾಲು ತಲುಪಲು 56 ಗಂಟೆ ಬೇಕು

ಕರ್ನಾಟಕದಿಂದ ದೆಹಲಿವರೆಗಿನ 2500 ಕಿ.ಮೀ. ದೂರ ಹಾಲು ಸರಬರಾಜು ಮಾಡಲು ಎದುರಿಸಬೇಕಾದ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿದ ಸಿದ್ದರಾಮಯ್ಯ, ರಾಜ್ಯದಿಂದ ಕೆಎಂಎಫ್‌ನ ಒಂದು ಹಾಲಿನ ಟ್ಯಾಂಕರ್‌ ದೆಹಲಿ ತಲುಪಲು 56 ಗಂಟೆ ಬೇಕು. ನಾವು ಹಾಲಿನ ವಿಚಾರದಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕಿದೆ. ಸರ್ಕಾರದಿಂದ ಕೆಎಂಎಫ್‌ಗೆ ಈ ವಿಚಾರವಾಗಿ ಎಲ್ಲ ಸಹಕಾರ ಯಾವತ್ತೂ ಇದೆ ಎಂದರು.