ಸಾರಾಂಶ
ಕನ್ನಡಪ್ರಭ ವಾರ್ತೆ ಸಕಲೇಶಪುರ
ಪಟ್ಟಣದಲ್ಲಿ ಗುರುವಾರ ಸಂಜೆ ವಿಎಚ್‌ಪಿ, ಬಜರಂಗದಳ ವತಿಯಿಂದ ನಡೆಯಬೇಕಾಗಿದ್ದ ಪಂಜಿನ ಮೆರವಣಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿದ್ದ ವಿಶ್ವ ಹಿಂದೂ ಪರಿಷತ್ ರಾಜ್ಯ ಮುಖಂಡ ಶರಣ್ ಪಂಪ್‌ವೆಲ್ ಅವರ ಜಿಲ್ಲೆ ಪ್ರವೇಶಕ್ಕೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ನಿಷೇಧ ಹೇರಿದ್ದಾರೆ.ಬುಧವಾರ ಪಟ್ಟಣದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆ ವತಿಯಿಂದ ನಡೆದ ಅಖಂಡ ಭಾರತ ಸಂಕಲ್ಪ ದಿನಾಚರಣೆ ಕಾರ್ಯಕ್ರಮಕ್ಕೆ ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಆಗಮಿಸಿ ಭಾಷಣ ಮಾಡಬೇಕಾಗಿತ್ತು. ಆದರೆ ಜಿಲ್ಲಾಧಿಕಾರಿ ಆದೇಶದಂತೆ, ಆಗಸ್ಟ್ ೧೫ರ ಬೆಳಗ್ಗೆ ೮ ಗಂಟೆಯವರೆಗೆ ಹಾಸನ ಜಿಲ್ಲೆಗೆ ಇಬ್ಬರು ನಾಯಕರಿಗೂ ಪ್ರವೇಶ ನಿಷೇಧವಿದ್ದು, ಕಲಂ ೧೬೩ ಬಿಎನ್ಎಸ್ಎಸ್ ಕಾಯ್ದೆ ೨೦೨೩ರ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಪ್ರಚೋಧನಕಾರಿ ಭಾಷಣ ಮಾಡುವ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪ್ರವೇಶ ನಿಷೇಧ ಹೇರುವಂತೆ ಹಾಸನ ಜಿಲ್ಲಾ ಪೊಲೀಸ್ ಅಧಿಕಾರಿ (ಎಸ್ಪಿ) ಮಹಮ್ಮದ್ ಸುಜೀತಾ ಜಿಲ್ಲಾಧಿಕಾರಿಗೆ ಶಿಫಾರಸ್ಸು ಮಾಡಿದ್ದರು.ಶಾಸಕ ಎಚ್.ಟಿ.ಮಂಜು ಆಕ್ಷೇಪಹಿಂದೂ ಮುಖಂಡರ ತಾಲೂಕು ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿರುವುದಕ್ಕೆ ಶಾಸಕ ಸಿಮೆಂಟ್ ಮಂಜು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಕಲೇಶಪುರದಲ್ಲಿ ಹಿಂದೂ ಪರ ಸಂಘಟನೆಗಳು ಪ್ರಬಲವಾಗಿದ್ದು, ಹಲವಾರು ವರ್ಷಗಳಿಂದ ಅಖಂಡ ಭಾರತ ಕಾರ್ಯಕ್ರಮ ನಡೆದುಕೊಂಡು ಬರುತ್ತಿದೆ. ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಆದರೆ ವಿನಾಕಾರಣ ಕಾಂಗ್ರೆಸ್ ಸರ್ಕಾರ ಜಿಲ್ಲಾಡಳಿತಕ್ಕೆ ಒತ್ತಡ ಹೇರಿ ಹಿಂದೂ ಮುಖಂಡರ ಪ್ರವೇಶಕ್ಕೆ ನಿರ್ಬಂಧ ಹೇರಿರುವುದು ಖಂಡನೀಯ. ಕೇವಲ ಹಿಂದೂ ಸಂಘಟನೆಗಳ ಮುಖಂಡರಿಗೆ ಮಾತ್ರ ನಿರ್ಬಂಧ ಹೇರುವುದು ಎಷ್ಟು ಸರಿ? ಮುಂದಿನ ದಿನಗಳಲ್ಲಿ ಜನ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಪತ್ರಿಕಾ ಹೇಳಿಕೆ ನೀಡಿದ್ದಾರೆ.