ಗ್ರಾಪಂ ವ್ಯಾಪ್ತಿಯಲ್ಲಿ ಮತದಾನ ಜಾಗೃತಿ

| Published : Apr 21 2024, 02:23 AM IST

ಸಾರಾಂಶ

ನರೇಗಾ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ತಿಳಿಸಿದ ಅವರು, ಕೂಲಿ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿ, ಮತದಾನ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗುವಂತೆ ಮಾಡಲು ಬಾದಾಮಿ ತಾಲೂಕಿನ ವಿವಿಧ ಗ್ರಾಮ ಪಂಚಾಯತ ವ್ಯಾಪ್ತಿಗಳಲ್ಲಿ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮತದಾನ ಜಾಗೃತಿ ಮೂಡಿಸಿದರು.

ಬಾದಾಮಿ ತಾಲೂಕಿನ ಕೆಂದೂರ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕೆಂದೂರ ಕೆರೆಗೆ ಭೇಟಿ ನೀಡಿ ಅಲ್ಲಿ ಕಾಮಗಾರಿ ಕೆಲಸದಲ್ಲಿ ತೊಡಗಿದ್ದ ಕೂಲಿ ಕಾರ್ಮಿಕರಲ್ಲಿ ಮತದಾನದ ಮಹತ್ವ ತಿಳಿಸಿದರು. ಜೊತೆಗೆ ನರೇಗಾ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ತಿಳಿಸಿದ ಅವರು, ಕೂಲಿ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿ, ಮತದಾನ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು.

ನಂದಿಕೇಶ್ವರ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಸರ್ಕಾರಿ ಪ್ರೌಢಶಾಲೆಯ ಅಡುಗೆ ಕೋಣೆ ಕಾಮಗಾರಿ ಪರಿಶೀಲಿಸಿದರು. ಕುಳಗೇರಿ ಬಸ್ ನಿಲ್ದಾಣದಲ್ಲಿ ಬಾದಾಮಿ ತಾಲೂಕು ಸ್ವೀಪ್ ವತಿಯಿಂದ ರಂಗೋಲಿ ಹಾಕುವ ಮೂಲಕ ನಿಲ್ದಾಣದಲ್ಲಿದ್ದ ಪ್ರಯಾಣಿಕರ ಗಮನ ಸೆಳೆಯಲಾಯಿತು. ನಿಮ್ಮ ಮತ ಅಮೂಲ್ಯವಾದುದು. ಮತದಾನಕ್ಕಿಂದ ಮತ್ತೊಂದಿಲ್ಲ ನಾನು ಖಚಿತವಾಗಿ ಮತದಾನ ಮಾಡುತ್ತೇನೆ ಸೇರಿದಂತೆ ಅನೇಕ ಘೋಷವಾಕ್ಯಗಳ ಫಲಕಗಳನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ತಾಲೂಕಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಶೇಷ ಮತಗಟ್ಟೆ ಸಿಇಓ ಭೇಟಿ: ಬಾದಾಮಿ ಆನಂದ ನಗರದಲ್ಲಿ ಬರುವ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಥಾಪಿಸಲಾದ ಮತಗಟ್ಟೆಯಲ್ಲಿ ಚಿತ್ರಕಲೆಯನ್ನು ಜಿ.ಪಂ ಸಿಇಒ ಶಶಿಧರ ಕುರೇರ ವೀಕ್ಷಣೆ ಮಾಡಿದರು.