ಸಾರಾಂಶ
ಬೆಂಗಳೂರು : ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ(ಕೋಮುಲ್) ನೇಮಕಾತಿ ಹಗರಣ ಸಂಬಂಧ ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಹಾಗೂ ಇತರರಿಗೆ ಸೇರಿದ ಸುಮಾರು 1.32 ಕೋಟಿ ರು. ಮೌಲ್ಯದ ಸ್ಥಿರ ಮತ್ತು ಚರಾಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.
ಕೋಮುಲ್‌ನಲ್ಲಿ 2023ನೇ ಸಾಲಿನಲ್ಲಿ ನಡೆದ ನೇಮಕಾತಿಯಲ್ಲಿ ಅವ್ಯವಹಾರ ನಡೆದಿರುವ ಆರೋಪ ಸಂಬಂಧ 2024ರ ಜನವರಿ 8ರಂದು ಮಾಲೂರು ತಾಲೂಕಿನ ಕೊಮ್ಮನಹಳ್ಳಿಯಲ್ಲಿರುವ ಶಾಸಕರ ನಿವಾಸ, ಆಪ್ತ ಸಹಾಯಕ ಹರೀಶ್ ನಿವಾಸ ಹಾಗೂ ಕೋಮುಲ್ ಕಚೇರಿ ಸೇರಿ 10 ಸ್ಥಳಗಳಲ್ಲಿ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ಶೋಧಿಸಿದ್ದರು. ಈ ವೇಳೆ ನೇಮಕಾತಿ ಅವ್ಯವಹಾರದ ಬಗ್ಗೆ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದ್ದರು. ಈ ಸಂಬಂಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು.
ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ಕೋಮುಲ್ ಅರ್ಜಿ ಆಹ್ವಾನಿಸಿ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿತ್ತು. ಈ ವೇಳೆ ಶಾಸಕ ಕೆ.ವೈ.ನಂಜೇಗೌಡ ಅವರು ತಮ್ಮ ಪ್ರಭಾವ ಬಳಸಿ ತಮಗೆ ಬೇಕಾದವರಿಗೆ ಕೆಲಸ ಕೊಡಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಇದರಲ್ಲಿ ಕೋಟ್ಯಂತರ ರು. ಅಕ್ರಮ ಹಣ ವರ್ಗಾಣೆಯಾಗಿರುವುದು ಪತ್ತೆಯಾಗಿತ್ತು. ಇದರಲ್ಲಿ ಶಾಸಕರಿಗೂ ಪಾಲು ಹೋಗಿರುವ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಇ.ಡಿ ಅಧಿಕಾರಿಗಳು ತನಿಖೆ ನಡೆಸಿ ಪ್ರಕರಣದ ಆರೋಪಿ ಶಾಸಕ ಕೆ.ವೈ.ನಂಜೇಗೌಡ ಹಾಗೂ ಇತರರ ಸ್ಥಿರ ಮತ್ತು ಚರಾಸ್ತಿಗಳನ್ನು ಜಪ್ತಿ ಮಾಡಿದ್ದಾರೆ.