ಸಾರಾಂಶ
ಗ್ರಾಮ ಪಂಚಾಯಿತಿಯ ಎಲ್ಲ ಗ್ರಾಮಗಳಲ್ಲಿ ಶಾಸಕರಾದ ಎಚ್.ಎ.ಇಕ್ಬಾಲ್ ಹುಸೇನ್ ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಜನ ಮನ್ನಣೆಗೆ ಪಾತ್ರರಾಗಿದ್ದಾರೆ.
ಕನ್ನಡಪ್ರಭ ವಾರ್ತೆ ರಾಮನಗರ
ತಾಲೂಕಿನ ಹುಲಿಕೆರೆ- ಗುನ್ನೂರು ಗ್ರಾಪಂ ವ್ಯಾಪ್ತಿಯ ಅವ್ವೇರಹಳ್ಳಿ, ಕೋಟಹಳ್ಳಿ, ಕೆ.ಜಿ.ಹೊಸಹಳ್ಳಿ, ಅಮ್ಮನಪುರ ಸೇರಿ ವಿವಿಧ ಗ್ರಾಮಗಳಲ್ಲಿ ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ ಬುಧವಾರ ಗುದ್ದಲಿ ಪೂಜೆ ನೆರವೇರಿಸಿದರು.ನಂತರ ಕೆ.ಜಿ.ಹೊಸಹಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ಕ್ಷೇತ್ರಕ್ಕೆ ನೀಡಿದ್ದ 20 ಕೋಟಿ ವಿಶೇಷ ಅನುದಾನದಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೆ ಒಂದು ಕೋಟಿಯಂತೆ ಅನುದಾನ ನೀಡಿದ್ದೇನೆ. ಇಂದು ಹುಲಿಕೆರೆ ಗುನ್ನೂರು ಗ್ರಾಪಂಗೆ ನೀಡಿದ್ದ 1 ಕೋಟಿ ರು.ಗಳ ಅನುದಾನದಲ್ಲಿ ಕೆಆರ್ ಐಡಿಎಲ್ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿರುವುದಾಗಿ ಹೇಳಿದರು.
ಹುಲಿಕೆರೆ- ಗುನ್ನೂರು ಗ್ರಾಪಂ ಅಧ್ಯಕ್ಷ ಗಿರೀಶ್ ಮಾತನಾಡಿ, ಗ್ರಾಮ ಪಂಚಾಯಿತಿಯ ಎಲ್ಲ ಗ್ರಾಮಗಳಲ್ಲಿ ಶಾಸಕರಾದ ಎಚ್.ಎ.ಇಕ್ಬಾಲ್ ಹುಸೇನ್ ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಜನ ಮನ್ನಣೆಗೆ ಪಾತ್ರರಾಗಿದ್ದಾರೆ. ನಮ್ಮ ಗ್ರಾಪಂನ ಕೆಲವು ಗ್ರಾಮಗಳು ಅರಣ್ಯದಂಚಿನಲ್ಲಿದ್ದು, ಜನರ ರಕ್ಷಣೆ ಮಾಡಲು ಮುಂಜಾಗೃತಾ ಕ್ರಮ ವಹಿಸುವ ಜೊತೆಗೆ ಮತ್ತಷ್ಟು ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವಂತೆ ಶಾಸಕರಲ್ಲಿ ಮನವಿ ಮಾಡಿರುವುದಾಗಿ ತಿಳಿಸಿದರು.ಈ ವೇಳೆ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಕೆ.ರಾಜು, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ವಿ.ಎಚ್.ರಾಜು, ಹುಲಿಕೆರೆ ಗುನ್ನೂರು ಗ್ರಾಪಂ ಅಧ್ಯಕ್ಷ ಗಿರೀಶ್, ಬನ್ನಿಕುಪ್ಪೆ ಗ್ರಾಪಂ ಅಧ್ಯಕ್ಷ ರವಿಕುಮಾರ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿಎನ್ಆರ್ ವೆಂಕಟೇಶ್, ಕೈಲಾಂಚ ಹೋಬಳಿ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾಗೇಶ್, ಪಿಡಿಓ ಶಶಿಕಲಾ ಸೇರಿದಂತೆ ಚುನಾಯಿತ ಪ್ರತಿನಿಧಿಗಳು, ಗ್ರಾಪಂ ಸದಸ್ಯರು, ವಿವಿಧ ಇಲಾಖಾ ಅಧಿಕಾರಿಗಳು ಇದ್ದರು.