ತುಮಕೂರು ಆರೋಗ್ಯ ಅಭಿಯಾನ : 10 ಸಾವಿರ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಸಂಕಲ್ಪ - ಜಿಲ್ಲಾಧಿಕಾರಿ

| Published : Aug 08 2024, 01:41 AM IST / Updated: Aug 08 2024, 12:57 PM IST

ತುಮಕೂರು ಆರೋಗ್ಯ ಅಭಿಯಾನ : 10 ಸಾವಿರ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಸಂಕಲ್ಪ - ಜಿಲ್ಲಾಧಿಕಾರಿ
Share this Article
  • FB
  • TW
  • Linkdin
  • Email

ಸಾರಾಂಶ

ತುಮಕೂರಿನ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಕಣ್ಣಿನ ಪೊರೆ ವಿಶೇಷ ಶಸ್ತ್ರಚಿಕಿತ್ಸಾ ಶಿಬಿರ

 ತುಮಕೂರು  : ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ತುಮಕೂರು ಆರೋಗ್ಯ ಅಭಿಯಾನದ ಅಂಗವಾಗಿ ಪ್ರಸಕ್ತ ವರ್ಷದಲ್ಲಿ 10 ಸಾವಿರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಕೈಗೊಳ್ಳುವ ಸಂಕಲ್ಪ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಕಣ್ಣಿನ ಪೊರೆ ವಿಶೇಷ ಶಸ್ತ್ರಚಿಕಿತ್ಸಾ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಂದಿನ ಶಿಬಿರದಲ್ಲಿ ಕಣ್ಣಿನ ಪೊರೆ ಸಮಸ್ಯೆ ಇರುವವರನ್ನು ಪತ್ತೆ ಹಚ್ಚುವುದರೊಂದಿಗೆ ಅಸಾಂಕ್ರಾಮಿಕ ರೋಗಿಗಳಿಗೆ ಔಷಧಿ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು. 

ಸರ್ಕಾರ ಜಾರಿಗೆ ತರುವ ಅರೋಗ್ಯ ಯೋಜನೆಗಳನ್ನು ಗ್ರಾಮೀಣ ಭಾಗದ ಜನರಿಗೆ ತಲುಪಿಸುವ ಮೂಲಕ ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ. ಜಿಲ್ಲೆಯ 330 ಗ್ರಾಮ ಪಂಚಾಯಿತಿ, 27ಲಕ್ಷ ಮನೆಗಳಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಸಮೀಕ್ಷೆ ಮಾಡಿ ಹಿರಿಯ ನಾಗರಿಕರಿಗೆ ಸೂಕ್ತ ಚಿಕಿತ್ಸೆ ಪಡೆಯಲು ಸೇತುವೆಯಾಗಿರುವ ಆಶಾ ಕಾರ್ಯಕರ್ತೆಯರು ಹಾಗೂ ಪಿಎಚ್ ಸಿ ಡಾಕ್ಟರ್ ಗಳು ಅಭಿಯಾನದ ಕೇಂದ್ರ ಬಿಂದುಗಳಾಗಿವೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ,ಆರೋಗ್ಯ ಅಭಿಯಾನದಲ್ಲಿ ಈಗಾಗಲೇ ತಪಾಸಣೆ ಮಾಡಿರುವವರಲ್ಲಿ 12000 ಜನರಲ್ಲಿ ಮಧುಮೇಹ, 13,000 ಜನರಲ್ಲಿ ರಕ್ತದೊತ್ತಡ, 333 ಜನರಲ್ಲಿ ವಿವಿಧ ರೀತಿಯ ಕ್ಯಾನ್ಸರ್, 520 ಜನರಲ್ಲಿ ರಕ್ತ ಹೀನತೆ, 900 ಜನರಲ್ಲಿ ಕ್ಷಯ ಮತ್ತು ಕುಷ್ಠ ರೋಗ ಸೇರಿದಂತೆ ಮತ್ತಿತರ ಅನಾರೋಗ್ಯ ಸಮಸ್ಯೆ ಇರುವುದು ಕಂಡು ಬಂದಿದೆ. ರೋಗ ಕಂಡುಬಂದವರ ಮನೆ ಬಾಗಿಲಿಗೆ ಔಷಧಿ ತಲುಪಿಸುವ ಕಾರ್ಯ ಕೈಗೊಳ್ಳಲಾಗುವುದು. 

ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ತುಮಕೂರು ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ 30 ವರ್ಷ ಮೇಲ್ಪಟ್ಟ 17 ಲಕ್ಷ ಮಂದಿಯ ಆರೋಗ್ಯ ತಪಾಸಣೆ ಮಾಡುವ ಗುರಿಯನ್ನು ಹೊಂದಲಾಗಿದ್ದು, ಈಗಾಗಲೇ 5.22ಲಕ್ಷ ಜನರ ಆರೋಗ್ಯ ತಪಾಸಣೆ ಮಾಡಲಾಗಿದೆ ಎಂದು ತಿಳಿಸಿದರು.ಜಿಲ್ಲೆಯ 2ಲಕ್ಷ ಮಕ್ಕಳಿಗೆ ಸಮಗ್ರ ಆರೋಗ್ಯ ತಪಾಸಣೆ ಮಾಡಲಾಗಿದ್ದು, ದೃಷ್ಟಿ ದೋಷವುಳ್ಳ 5 ಸಾವಿರ ಮಕ್ಕಳಿಗೆ ಕನ್ನಡಕ ವಿತರಣೆ ಮಾಡಲಾಗುವುದು. 3 ಕೋಟಿ ರು. ವೆಚ್ಚದಲ್ಲಿ ಮಾತು ಬಾರದ ಹಾಗೂ ಕಿವಿ ಕೇಳಿಸದ 31 ಮಕ್ಕಳಿಗೆ ಶಸ್ತ್ರ ಚಿಕಿತ್ಸೆ ಮಾಡಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಹಾಲಸಿದ್ದಪ್ಪ ಪೂಜೇರಿ, ಮುಖ್ಯ ಯೋಜನಾಧಿಕಾರಿ ಸಣ್ಣ ಮಸಿಯಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಡಿ.ಎನ್. ಮಂಜುನಾಥ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಅಸ್ಗರ್ ಬೇಗ್, ಮಲೇರಿಯಾ ಅಧಿಕಾರಿ ಡಾ. ಚಂದ್ರಶೇಖರ್, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು, ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದ ಆರೋಗ್ಯ ಅಧಿಕಾರಿಗಳು, ಹಿರಿಯ ನಾಗರಿಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.