ಸಾರಾಂಶ
ಕನ್ನಡಪ್ರಭ ವಾರ್ತೆ ಕೋಲಾರ೨೦೨೪-೨೫ನೇ ಸಾಲಿಗೆ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನಕ್ಕೆ ಸಂಬಂಧಿಸಿದಂತೆ ಆಯಾ ಇಲಾಖೆಗಳು ಕ್ರಿಯಾಯೋಜನೆ, ಟೆಂಡರ್ ಪ್ರಕ್ರಿಯೆ, ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಳಿಸುವ ಮೂಲಕ ಶೇ.೧೦೦ರಷ್ಟು ಅನುದಾನ ಸದ್ಬಳಕೆ ಮಾಡುವಂತೆ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಹಾಗೂ ಕೋಲಾರ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿ ಡಾ.ಏಕ್‌ರೂಪ್ ಕೌರ್ ಹೇಳಿದರು. ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ಇಲಾಖೆಗಳಿಗೆ ಬಿಡುಗಡೆಯಾದ ಹಣವನ್ನು ಸಂಪೂರ್ಣವಾಗಿ ಖರ್ಚು ಮಾಡಬೇಕು. ಮಾರ್ಚ್ ಅಂತ್ಯದವರೆಗೆ ಕಾಯದೆ ತ್ವರಿತವಾಗಿ ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಿ ಡಿಸೆಂಬರ್ ಅಂತ್ಯ ಅಥವಾ ಜನವರಿ ಮಾಹೆಯೊಳಗೆ ಶೇ.೧೦೦ರಷ್ಟು ಆರ್ಥಿಕ ಮತ್ತು ಭೌತಿಕ ಪ್ರಗತಿ ಸಾಧಿಸುವಂತೆ ಸೂಚಿಸಿದರು.
ಅನುದಾನ ಸದ್ಬಳಕೆಯಾಗಲಿನರೇಗಾ ಯೋಜನೆಯ ಸದ್ಬಳಕೆ ಆಗಬೇಕು. ನರೇಗಾ ಯೋಜನೆಯಡಿ ಹಲವು ಇಲಾಖೆಗಳಿಗೆ ಅನುದಾನ ಬಿಡುಗಡೆ ಆಗುತ್ತದೆ. ಅನುದಾನ ಸದ್ಬಳಕೆಯಾಗಬೇಕು. ಅರಣ್ಯ ಇಲಾಖೆಯಲ್ಲಿ ನರೇಗಾ ಯೋಜನೆಯಡಿ ಗಿಡ ನೆಡುವ ಅರಣ್ಯೀಕರಣ ಕಾರ್ಯಕ್ರಮ ಒಂದು ಉತ್ತಮ ಯೋಜನೆಯಾಗಿದೆ. ಸಾಮಾಜಿಕ ಮತ್ತು ಪ್ರಾದೇಶಿಕ ಅರಣ್ಯ ವಿಭಾಗವು ಹೆಚ್ಚು ಹೆಚ್ಚು ಸಸಿಗಳನ್ನು ನಾಟಿ ಮಾಡಿ ಬೇಡಿಕೆ ಅನುಗುಣವಾಗಿ ರೈತರಿಗೆ, ಸಾರ್ವಜನಿಕರಿಗೆ ವಿತರಿಸಬೇಕು ಎಂದರು.
ಜಿಲ್ಲೆಯಲ್ಲಿ ಪ್ರಸ್ತುತ ರಸಗೊಬ್ಬರ ಕೊರತೆ ಇಲ್ಲ. ಸೆಪ್ಟೆಂಬರ್ ಮಾಹೆಯಲ್ಲಿ ಮಳೆ ಕೊರತೆ ಆಗಿದೆ. ಆದರೆ ಪ್ರಸಕ್ತ ಮಾಹೆಯಲ್ಲಿ ಸಾಕಷ್ಟು ಮಳೆಯಾಗಿದೆ ಎಂದು ಕೃಷಿ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಿ
ಎಸ್.ಎಸ್.ಎಲ್.ಸಿ, ಪಿಯುಸಿಯಲ್ಲಿ ಈ ವರ್ಷ ಉತ್ತಮ ಫಲಿತಾಂಶ ಬರಲು ಯೋಜನೆ ರೂಪಿಸಿ. ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸರ್ಕಾರಿ ಶಾಲೆಗಳನ್ನು ದತ್ತು ನೀಡಿ. ಶಾಲಾ ಕಾಲೇಜು ಶಿಕ್ಷಕರಿಗೆ, ಮುಖ್ಯೋಪಾಧ್ಯಾಯರಾಗಿ, ಪ್ರಾಂಶುಪಾಲರಿಗೆ ಸೂಕ್ತ ತರಬೇತಿ, ಮಾರ್ಗಸೂಚಿಗಳನ್ನು ನೀಡಿ, ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು. ಮಕ್ಕಳಿಗೆ ಆಟದ ಪರಿಕರಗಳನ್ನು ಒದಗಿಸಲು ಕ್ರಮ ವಹಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.ಹೊರಗುತ್ತಿಗೆ ಮೂಲಕ ವೈದ್ಯರ ನೇಮಕ
ಆರೋಗ್ಯ ಇಲಾಖೆಯಲ್ಲಿ ೧೮ ವೈದ್ಯರ ಕೊರತೆ ಇರುವುದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಸಭೆಗೆ ತಿಳಿಸಿದರು. ಅದಕ್ಕೆ ಕಾರ್ಯದರ್ಶಿಗಳು ಹೊರಗುತ್ತಿಗೆ ಮೂಲಕ ತುಂಬಲು ಕ್ರಮ ವಹಿಸಲು ಸೂಚಿಸಿದರು. ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳು ಗಣನಿಯವಾಗಿ ಕಡಿಮೆಯಾಗಿರುವುದಕ್ಕೆ ಅಭಿನಂದಿಸಿದರು.ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಜೂನ್ ೨೦೨೪ರವರೆಗೆ ಪಾವತಿ ಮಾಡಲಾಗಿದೆ. ಅದರಲ್ಲಿ ೩೧೯೦ ವಿಫಲ ಪ್ರಕಾರಣಗಳಿದ್ದು ಅವುಗಳನ್ನು ಶೀಘ್ರದಲ್ಲೇ ಸರಿಪಡಿಸಿ ಪಾವತಿಮಾಡಲು ಕ್ರಮ ವಹಿಸಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಸಮಾಜಕಲ್ಯಾಣ ಇಲಾಖೆ ಹಾಸ್ಟೆಲಗಳಲ್ಲಿ ಆಟದ ಪರಿಕರಗಳನ್ನು ಇತರೆ ಕೆಲಸಗಳಿಗಾಗಿ ಬಳಸಲಾಗುತ್ತಿದೆ. ಅಂತಹ ಪ್ರಕರಣ ಕಂಡುಬಂದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಅನ್ನದಾನ ಅನುದಾನ ಬಾಕಿಆಹಾರ ಇಲಾಖೆಯ ಅನ್ನಭಾಗ್ಯ ಯೋಜನೆಯಡಿಯಲ್ಲಿ ಜುಲೈ ವರೆಗೆ ಅನುದಾನ ಬಿಡುಗಡೆಯಗಿದ್ದು, ೧೦೭೫ಕೋಟಿ ಮೊತ್ತದ ಅನುದಾನ ಫಲಾನುಭವಿಗಳಿಗೆ ವಿತರಣೆ ಮಾಡಲಾಗಿದೆ ಎಂದು ಸಂಬಂಧಿಸಿದ ಅಧಿಕಾರಿಗಳು ಸಭೆಗೆ ತಿಳಿಸಿದರು. ಖಾತ್ರಿ ಯೋಜನೆ ಪೋಸ್ಟರ್
ಇದೇ ಸಂದರ್ಭದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಸದರಿ ಯೋಜನೆಗೆ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುವುದರಿಂದ ಆಯ್ಕೆಯಾಗುವವರೆಗಿನ ಸಮಸ್ತ ಪ್ರಕ್ರಿಯೆ ಆನ್ ಲೈನ್ ನಲ್ಲಿ ಆಗಲಿದೆ. ಇದರ ಸದುಪಯೋಗ ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ, ಜಿಪಂ ಉಪಕಾರ್ಯದರ್ಶಿ ಶಿವಕುಮಾರ್ ಇದ್ದರು.