ಸಾರಾಂಶ
ವಾಲ್ಮೀಕಿ ನಿಗಮದ 187 ಕೋಟಿ ರುಪಾಯಿ ಹಣವನ್ನು ದುರ್ಬಳಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕರ್ನಾಟಕ ಬಿಜೆಪಿ ನೇತೃತ್ವದಲ್ಲಿ ಜು.18ರಂದು ಬೃಹತ್ ಪ್ರತಿಭಟನೆ ನಡೆಯಲಿದೆ. ಬೃಹತ್ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಉಡುಪಿ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ ವಾಲ್ಮೀಕಿ ನಿಗಮದ 187 ಕೋಟಿ ರುಪಾಯಿ ಹಣವನ್ನು ದುರ್ಬಳಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕರ್ನಾಟಕ ಬಿಜೆಪಿ ನೇತೃತ್ವದಲ್ಲಿ ಜು.18ರಂದು ಬೆಳಗ್ಗೆ 9.30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆ, ಪಾದಯಾತ್ರೆ ಹಾಗೂ ವಿಧಾನಸೌಧಕ್ಕೆ ಮುತ್ತಿಗೆ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲೆಯಿಂದ 1,000 ಮಂದಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ದಿನಕರ ಬಾಬು ತಿಳಿಸಿದ್ದಾರೆ.ಈಗಾಗಲೇ ಸಿಬಿಐ, ಇಡಿ ಹಾಗೂ ಎಸ್ಐಟಿ ತನಿಖೆ ಪ್ರಗತಿಯಲ್ಲಿದ್ದು, ವಾಲ್ಮೀಕಿ ನಿಗಮದ ಭ್ರಷ್ಟಾಚಾರ ಪ್ರಕರಣವನ್ನು ಶೀಘ್ರ ಬೇಧಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಕ್ಕೆ ನ್ಯಾಯ ಒದಗಿಸಿಕೊಡುವ ನಿಟ್ಟಿನಲ್ಲಿ ತನಿಖೆಯನ್ನು ತೀವ್ರ ಗೊಳಿಸುವಂತೆ ಒತ್ತಾಯಿಸುವ ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸುವ ಈ ಮಹತ್ವದ ಪ್ರತಿಭಟನೆ, ಪಾದಯಾತ್ರೆ ಮತ್ತು ವಿಧಾನಸೌಧ ಮುತ್ತಿಗೆ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲ ಸಂಘಟನಾತ್ಮಕ ಜಿಲ್ಲೆಗಳಿಂದ ಪಕ್ಷದ ಮುಖಂಡರು, ಎಸ್.ಸಿ. ಮೋರ್ಚಾ ಮತ್ತು ಎಸ್.ಟಿ. ಮೋರ್ಚಾ ಸಹಿತ ಜಿಲ್ಲಾ, ಮೋರ್ಚಾ, ಮಂಡಲಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು ಗರಿಷ್ಠ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ದಿನಕರ ಬಾಬು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.