ಶಿವಕುಮಾರ ಶ್ರೀಗಳ ಸಂಭ್ರಮದ 117ನೇ ಜನ್ಮದಿನಾಚರಣೆ

| Published : Apr 02 2024, 01:02 AM IST

ಶಿವಕುಮಾರ ಶ್ರೀಗಳ ಸಂಭ್ರಮದ 117ನೇ ಜನ್ಮದಿನಾಚರಣೆ
Share this Article
  • FB
  • TW
  • Linkdin
  • Email

ಸಾರಾಂಶ

ನಾಡಿನ ಭಕ್ತಾದಿಗಳ ಮನ ಮನೆಗಳ ದೈವೀ ಪ್ರಭೆಯಾಗಿದ್ದ ಲಿಂ.ಡಾ.ಶಿವಕುಮಾರ ಸ್ವಾಮೀಜಿಯವರ 117ನೇ ಜನ್ಮದಿನೋತ್ಸವದ ಅಂಗವಾಗಿ ಅವರು ಐಕ್ಯರಾಗಿರುವ ಶಿವಯೋಗಿ ಮಂದಿರದ ಗದ್ದುಗೆಯಲ್ಲಿ ಮುಂಜಾನೆಯಿಂದಲೇ ಧಾರ್ಮಿಕ ವಿಧಿ ವಿಧಾನಗಳು, ಅಭಿಷೇಕ, ಅಷ್ಟೋತ್ತರ, ಮಹಾಮಂಗಳಾರತಿ, ಭಜನಾ ಮಂತ್ರ ಘೋಷಗಳು ಮೊಳಗಿದವು.

ಕನ್ನಡಪ್ರಭ ವಾರ್ತೆ ತುಮಕೂರುನಾಡಿನ ಭಕ್ತಾದಿಗಳ ಮನ ಮನೆಗಳ ದೈವೀ ಪ್ರಭೆಯಾಗಿದ್ದ ಲಿಂ.ಡಾ.ಶಿವಕುಮಾರ ಸ್ವಾಮೀಜಿಯವರ 117ನೇ ಜನ್ಮದಿನೋತ್ಸವದ ಅಂಗವಾಗಿ ಅವರು ಐಕ್ಯರಾಗಿರುವ ಶಿವಯೋಗಿ ಮಂದಿರದ ಗದ್ದುಗೆಯಲ್ಲಿ ಮುಂಜಾನೆಯಿಂದಲೇ ಧಾರ್ಮಿಕ ವಿಧಿ ವಿಧಾನಗಳು, ಅಭಿಷೇಕ, ಅಷ್ಟೋತ್ತರ, ಮಹಾಮಂಗಳಾರತಿ, ಭಜನಾ ಮಂತ್ರ ಘೋಷಗಳು ಮೊಳಗಿದವು.ಶ್ರೀಗಳ ಗದ್ದುಗೆಗೆ ಮಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿಯವರ ನೇತೃತ್ವದಲ್ಲಿ ಹರಗುರುಚರಮೂರ್ತಿಗಳ ಸಮ್ಮುಖದಲ್ಲಿ ರುದ್ರಾಭಿಷೇಕ, 108 ಅಷ್ಟೋತ್ತರ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯ, ಮಹಾಮಂಗಳಾರತಿ ನೆರವೇರಿತು.ಮಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿಯವರು ಪರಮಪೂಜ್ಯರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸುವ ಮೂಲಕ ಆಶೀರ್ವಾದ ಪಡೆದರು. ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರು ವಿವಿಧ ಬಗೆಯ ಹಣ್ಣುಗಳು, ಪುಷ್ಪಗಳಿಂದ ಅಲಂಕರಿ ಸಿದ್ದ ಗದ್ದುಗೆಗೆ ಪುಷ್ಪ ನಮನ ಸಲ್ಲಿಸಿ ಭಕ್ತಿ ಸಮರ್ಪಿಸಿದರು. ಪುತ್ಥಳಿ ಮೆರವಣಿಗೆಗದ್ದುಗೆ ಮಂದಿರದ ಮುಂಭಾಗದಿಂದ ಆರಂಭವಾದ ಶ್ರೀಗಳ ಕಂಚಿನ ಪುತ್ಥಳಿ ಹೊತ್ತ ರುದ್ರಾಕ್ಷಿ ಮಂಟಪದ ಮೆರವಣಿಗೆಗೆ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಚಾಲನೆ ನೀಡಿದರು. ಮೆರವಣಿಗೆಯುದ್ಧಕ್ಕೂ ನಂದಿಧ್ವಜ ಕುಣಿತ, ಕರಡಿ ವಾದ್ಯ, ಡೋಲು ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳ ಪ್ರದರ್ಶನ ನೋಡುಗರ ಗಮನ ಸೆಳೆದವು. ಶ್ರೀಮಠದ ಆವರಣದಲ್ಲಿ ಮೆರವಣಿಗೆಯುದ್ದಕ್ಕೂ ಪೂರ್ಣಕುಂಭ ಕಳಸ ಹೊತ್ತ ಸುಮಂಗಲಿಯರು, ಹರಗುರುಚರಮೂರ್ತಿಗಳು, ಭಕ್ತಾದಿಗಳು ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು.

ಗದ್ದುಗೆ ದರ್ಶನ ಪಡೆದ ಗಣ್ಯರು...ಬೆಳಿಗ್ಗೆಯಿಂದಲೇ ಶ್ರೀಮಠಕ್ಕೆ ಭಕ್ತರು, ಗಣ್ಯರ ದಂಡು ಹರಿದು ಬರುತ್ತಿದ್ದು, ಹರಿದ್ವಾರ ಪತಂಜಲಿ ಯೋಗಪೀಠದ ಸ್ವಾಮಿ ರಾಮ್‌ದೇವ್ ಜೀ, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಮಾಜಿ ಸಚಿವ ವಿ. ಸೋಮಣ್ಣ, ಸಂಸದ ಜಿ.ಎಸ್. ಬಸವರಾಜು, ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ, ಡಾ. ಮಂಜುನಾಥ್, ರುದ್ರೇಶ್, ಡಾ. ಪರಮೇಶ್ ಸೇರಿದಂತೆ ವಿವಿಧ ಮಠಾಧೀಶರುಗಳು ಶ್ರೀಗಳ ಗದ್ದುಗೆ ದರ್ಶನ ಪಡೆದು ಭಕ್ತಿ ಸಮರ್ಪಿಸಿದರು.

ಬಾಕ್ಸ್‌...

117 ಮಕ್ಕಳಿಗೆ ನಾಮಕರಣಡಾ.ಶ್ರೀ ಶಿವಕುಮಾರ ಮಹಾಸ್ವಾಮೀಜಿ ಅನ್ನದಾನ ಸೇವಾ ಟ್ರಸ್ಟ್ ವತಿಯಿಂದ ನಡೆದಾಡುವ ದೇವರು, ತ್ರಿವಿಧ ದಾಸೋಹಮೂರ್ತಿ, ಪದ್ಮಭೂಷಣ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 117 ನೇ ಜಯಂತ್ಯುತ್ಸವದ ಅಂಗವಾಗಿ 117 ಮಕ್ಕಳಿಗೆ "ಶಿ " ಅಕ್ಷರದಿಂದ ಪ್ರಾರಂಭವಾಗುವ ಹೆಸರುಗಳನ್ನು ನಾಮಕರಣ ಮಾಡಲಾಯಿತು. ಈ ಉಚಿತ ನಾಮಕರಣ ಮಹೋತ್ಸವದಲ್ಲಿ ಪಾಲ್ಗೊಂಡಿದ್ದವರಿಗೆ ಹೊಸ ತೊಟ್ಟಿಲು, ತೊಟ್ಟಿಲ ಹಾಸಿಗೆ, ತೊಟ್ಟಿಲ ದಿಂಬು ಹಾಗೂ ಶ್ರೀಗಳ ಭಾವಚಿತ್ರವನ್ನು ಉಚಿತವಾಗಿ ನೀಡಲಾಯಿತು.

ಬೆಳಗ್ಗೆ 7 ಗಂಟೆಯಿಂದ ಶ್ರೀಮಠದಲ್ಲಿ ದಾಸೋಹ ಆರಂಭವಾಗಿದ್ದು, ರಾತ್ರಿ 11 ಗಂಟೆಯವರೆಗೂ ದಾಸೋಹ ನಡೆಯಿತು. ಶ್ರೀಗಳ 117ನೇ ಜಯಂತಿ ಪ್ರಯುಕ್ತ ತುಮಕೂರು ನಗರದಾದ್ಯಂತ ಭಕ್ತವೃಂದ ಪೆಂಡಾಲ್‌ಗಳನ್ನು ಹಾಕಿ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅನ್ನದಾಸೋಹ ಏರ್ಪಡಿಸುವ ಮೂಲಕ ಭಕ್ತಿ ಸಮರ್ಪಿಸಿದರು. ಪಾಯಸ, ಬೂಂದಿ, ಕಾರಾ ಬೂಂದಿ, ಪಲ್ಯ, ಚಿತ್ರಾನ್ನ, ಅನ್ನ ಸಾಂಬಾರ್, ಮಜ್ಜಿಗೆ ವಿವಿಧ ಭಕ್ಷ್ಯಗಳನ್ನು ಭಕ್ತಾದಿಗಳಿಗೆ ಬಡಿಸಲಾಯಿತು.