ಭಕ್ತ ಸಮೂಹದ ನಡುವೆ ಸಿದ್ಧಗಂಗಾ ಶ್ರೀಗಳ 118ನೇ ಜಯಂತಿ

| Published : Apr 02 2025, 01:01 AM IST

ಸಾರಾಂಶ

ತುಮಕೂರಿನ ಸಿದ್ದಗಂಗಾ ಮಠದ ಶಿವೈಕ್ಯ ತ್ರಿವಿಧ ದಾಸೋಹಿ, ಕರ್ನಾಟಕ ರತ್ನ, ನಡೆದಾಡುವ ದೇವರು ಡಾ.ಶಿವಕುಮಾರ ಸ್ವಾಮೀಜಿ ಅವರ 118ನೇ ಜನ್ಮದಿನ ಹಾಗೂ ಗುರುವಂದನಾ ಮಹೋತ್ಸವ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಡಗರ ಸಂಭ್ರಮದಿಂದ ನೆರವೇರಿತು.

ಕನ್ನಡಪ್ರಭ ವಾರ್ತೆ ತುಮಕೂರು

ತುಮಕೂರಿನ ಸಿದ್ದಗಂಗಾ ಮಠದ ಶಿವೈಕ್ಯ ತ್ರಿವಿಧ ದಾಸೋಹಿ, ಕರ್ನಾಟಕ ರತ್ನ, ನಡೆದಾಡುವ ದೇವರು ಡಾ.ಶಿವಕುಮಾರ ಸ್ವಾಮೀಜಿ ಅವರ 118ನೇ ಜನ್ಮದಿನ ಹಾಗೂ ಗುರುವಂದನಾ ಮಹೋತ್ಸವ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಡಗರ ಸಂಭ್ರಮದಿಂದ ನೆರವೇರಿತು.

ಶ್ರೀಗಳ ಜಯಂತಿಗೆ ವಿವಿಧ ಮಠಾಧೀಶರು, ಹರಗುರುಚರಮೂರ್ತಿಗಳು, ಗಣ್ಯಾತಿ ಗಣ್ಯರು ಹಾಗೂ ಸಹಸ್ರಾರು ಭಕ್ತರು ಸಾಕ್ಷಿಯಾದರು. ಬೆಳಗ್ಗೆಯಿಂದಲೇ ಮಠಕ್ಕೆ ಭಕ್ತರು, ಗಣ್ಯರ ದಂಡು ಹರಿದು ಬಂದಿತ್ತು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ವಿವಿಧ ಮಠಾಧೀಶರುಗಳು ಶ್ರೀಗಳ ಗದ್ದುಗೆ ದರ್ಶನ ಪಡೆದು ಭಕ್ತಿ ಸಮರ್ಪಿಸಿದರು.

ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರ ಶಿವಯೋಗಿ ಮಂದಿರದ ಗದ್ದುಗೆಯಲ್ಲಿ ಮುಂಜಾನೆಯಿಂದಲೇ ಧಾರ್ಮಿಕ ವಿಧಿ ವಿಧಾನಗಳು, ಅಭಿಷೇಕ, ಅಷ್ಟೋತ್ತರ, ಮಹಾಮಂಗಳಾರತಿ, ಭಜನಾಮಂತ್ರ, ಘೋಷಗಳು ಮೊಳಗಿದವು. ಶ್ರೀಗಳ ಗದ್ದುಗೆಗೆ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರ ನೇತೃತ್ವದಲ್ಲಿ ರುದ್ರಾಭಿಷೇಕ, 108 ಅಷ್ಟೋತ್ತರ ಸೇರಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯ, ಮಹಾಮಂಗಳಾರತಿ ನೆರವೇರಿಸಲಾಯಿತು.

118 ಮಕ್ಕಳಿಗೆ ನಾಮಕರಣ: ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ 118ನೇ ಜಯಂತ್ಯೋತ್ಸವದ ಅಂಗವಾಗಿ 118 ಮಕ್ಕಳಿಗೆ ‘ಶಿ’ ಅಕ್ಷರದಿಂದ ಪ್ರಾರಂಭವಾಗುವ ಹೆಸರುಗಳನ್ನು ನಾಮಕರಣ ಮಾಡಲಾಯಿತು. ಈ ಉಚಿತ ನಾಮಕರಣ ಮಹೋತ್ಸವದಲ್ಲಿ ಪಾಲ್ಗೊಂಡಿದ್ದವರಿಗೆ ಹೊಸ ತೊಟ್ಟಿಲು, ತೊಟ್ಟಿಲ ಹಾಸಿಗೆ, ತೊಟ್ಟಿಲ ದಿಂಬು ಹಾಗೂ ಶ್ರೀಗಳ ಭಾವಚಿತ್ರವನ್ನು ಉಚಿತವಾಗಿ ನೀಡಲಾಯಿತು.