ಸಾರಾಂಶ
ಬೆಂಗಳೂರು : ಜಿದ್ದಾಜಿದ್ದಿಗೆ ಸಾಕ್ಷಿಯಾಗಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುಕ್ರವಾರ ಮುಕ್ತಾಯಗೊಂಡಿದೆ. ಒಟ್ಟು 121 ನಾಮಪತ್ರಗಳು ಸಲ್ಲಿಕೆಯಾಗಿವೆ.
ಸಂಡೂರು, ಶಿಗ್ಗಾವಿ ಮತ್ತು ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ನ.13ರಂದು ನಡೆಯಲಿದ್ದು, ನ.23ರಂದು ಮತ ಎಣಿಕೆ ನಡೆಯಲಿದೆ. ಈ ತಿಂಗಳ 28ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, 30ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ.
ಮೂರು ಕ್ಷೇತ್ರಗಳಲ್ಲಿ ಆಡಳಿತಾರೂಢ ಕಾಂಗ್ರೆಸ್‌ನಿಂದ 11, ಬಿಜೆಪಿಯಿಂದ 9, ಜೆಡಿಎಸ್‌ನಿಂದ 4, ಪಕ್ಷೇತರರು 72 ಮತ್ತು ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳಿಂದ 25 ನಾಮಪತ್ರಗಳು ಸಲ್ಲಿಕೆಯಾಗಿವೆ.
ಸಂಡೂರು ಕ್ಷೇತ್ರದಲ್ಲಿ 7 ಅಭ್ಯರ್ಥಿಗಳಿಂದ 13 ನಾಮಪತ್ರಗಳು, ಶಿಗ್ಗಾವಿ ಕ್ಷೇತ್ರದಲ್ಲಿ 26 ಅಭ್ಯರ್ಥಿಗಳಿಂದ 46 ನಾಮಪತ್ರಗಳು ಮತ್ತು ಚನ್ನಪಟ್ಟಣ ಕ್ಷೇತ್ರದಲ್ಲಿ 50 ಅಭ್ಯರ್ಥಿಗಳಿಂದ 62 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಚುನಾವಣಾ ಆಯೋಗ ಮಹಿತಿ ನೀಡಿದೆ.
ಸಂಡೂರಿನಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಬಂಗಾರು ಹನುಮಂತು, ಕಾಂಗ್ರೆಸ್ ಅಭ್ಯರ್ಥಿಯಾಗಿ ಅನ್ನಪೂರ್ಣ ನಾಮಪತ್ರ ಸಲ್ಲಿಸಿದ್ದಾರೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್, ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ಶಿಗ್ಗಾವಿ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ ಅಹ್ಮದ್ ಖಾನ್ ಪಠಾಣ್ ನಾಮಪತ್ರ ಸಲ್ಲಿಸಿದ್ದಾರೆ. ನಿಖಿಲ್, ಭರತ್ ಬೊಮ್ಮಾಯಿ, ಬಂಗಾರು ಹನುಮಂತು ಶುಕ್ರವಾರ ಭರ್ಜರಿ ಶಕ್ತಿ ಪ್ರದರ್ಶನದೊಂದಿಗೆ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ಚನ್ನಪಟ್ಟಣ, ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ಶಿಗ್ಗಾವಿ ಮತ್ತು ಇ.ತುಕಾರಾಂ ರಾಜೀನಾಮೆಯಿಂದ ಸಂಡೂರು ವಿಧಾನಸಭಾ ಕ್ಷೇತ್ರ ತೆರವಾಗಿತ್ತು. ಈ ಹಿನ್ನೆಲೆಯಲ್ಲಿ ಉಪಚುನಾವಣೆ ಜರುಗಲಿದೆ.-