ರಾಮನಗರ: ರಾಜ್ಯದಲ್ಲಿ 1325 ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳನ್ನು ಮುಂದಿನ ಒಂದೂವರೆ ತಿಂಗಳಲ್ಲಿ ಪ್ರಾರಂಭಿಸಲಾಗುವುದು. ಈ ನಿಟ್ಟಿನಲ್ಲಿ 18 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು

ರಾಮನಗರ: ರಾಜ್ಯದಲ್ಲಿ 1325 ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳನ್ನು ಮುಂದಿನ ಒಂದೂವರೆ ತಿಂಗಳಲ್ಲಿ ಪ್ರಾರಂಭಿಸಲಾಗುವುದು. ಈ ನಿಟ್ಟಿನಲ್ಲಿ 18 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

ಮಾಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಯರೇಹಳ್ಳಿ ಗ್ರಾಮದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಕ್ಕಳಿಗೆ ಒಂದೇ ಸೂರಿನಡಿ ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಗುಣಮಟ್ಟದ ಶಿಕ್ಷಣ ದೊರಕಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಅದರಂತೆ ಸುಮಾರು 4300 ಕೋಟಿ ರುಪಾಯಿ ವೆಚ್ಚದಲ್ಲಿ 1325 ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳು ನಿರ್ಮಾಣಗೊಂಡಿದ್ದು, ಅವುಗಳನ್ನು ಲೋಕಾರ್ಪಣೆ ಮಾಡಲಾಗುವುದು. ಇದರ ಜೊತೆಗೆ 18 ಸಾವಿರ ಶಿಕ್ಷಕರ ನೇಮಕಾತಿಯೂ ನಡೆಯಲಿದೆ ಎಂದು ತಿಳಿಸಿದರು.

ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳ ಮಕ್ಕಳಿಗೆ ಸಾರಿಗೆ ವ್ಯವಸ್ಥೆಯನ್ನು ಶಿಕ್ಷಣ ಇಲಾಖೆಯೇ ಮಾಡಲಿದೆ. ಶಾಲಾ ಮಕ್ಕಳು ಶಕ್ತಿ ಯೋಜನೆಯಡಿ ಸಾರಿಗೆ ಬಸ್ಸುಗಳಲ್ಲಿ ಬರುವುದೇ ಬೇಡ. ಈ ಬಗ್ಗೆ ಸಿದ್ಧತೆಗಳು ನಡೆದಿವೆ ಎಂದು ಮಧು ಬಂಗಾರಪ್ಪ ಹೇಳಿದರು.

ಕೆಪಿಎಸ್ ಶಾಲೆಗಳಲ್ಲಿ ಅತ್ಯಾಧುನಿಕ ಸೌಲಭ್ಯ ಕಲ್ಪಿಸುವ ಜೊತೆಗೆ ಕಂಪ್ಯೂಟರ್ ಕಲಿಕೆ, ಕೃತಕ ಬುದ್ದಿ ಮತ್ತೆ (ಎಐ) , ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು. ಪ್ರತಿ ವಿಷಯಕ್ಕೂ ಪ್ರತ್ಯೇಕ ಶಿಕ್ಷಕರು ಇರಲಿದ್ದಾರೆ. ಕೆಪಿಎಸ್ ಶಾಲೆಗಳು ನಮ್ಮ ಮುಖ್ಯಮಂತ್ರಿಗಳ ಕನಸು, ಅದನ್ನು ನನಸು ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಬಂಗಾರಪ್ಪರೊಂದಿಗೆ ಕೆಲಸ ಮಾಡುತ್ತಿರುವ ಭಾವನೆ:

ಬಂಗಾರಪ್ಪನವರು ಡಿ.ಕೆ.ಶಿವಕುಮಾರ್ ಅವರನ್ನು 27ನೇ ವರ್ಷಕ್ಕೆ ಸಚಿವರನ್ನಾಗಿ ಮಾಡಿದ್ದರು. ಈಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ನನ್ನನ್ನು ಮಂತ್ರಿ ಮಾಡಿದ್ದಾರೆ. ಬಂಗಾರಪ್ಪ ಅವರು ಬದುಕಿದ್ದಾಗ ನಾನು ಶಾಸಕ, ಸಚಿವನಾಗಲು ಸಾಧ್ಯವಾಗಲಿಲ್ಲ. ಆದರೆ, ಬಂಗಾರಪ್ಪರವರ ಅಡಿಯಲ್ಲಿ ಡಿ.ಕೆ.ಶಿವಕುಮಾರ್ ಕೆಲಸ ಮಾಡಿದ ರೀತಿಯಲ್ಲಿಯೇ ಇಂದು ನಾನು ಡಿ.ಕೆ.ಶಿವಕುಮಾರ್ ರವರ ಅಡಿಯಲ್ಲಿ ಕೆಲಸ ಮಾಡುತ್ತಿರುವುದು ಹೆಮ್ಮೆ ತಂದಿದೆ. ನಾನು ಬಂಗಾರಪ್ಪರವರ ಅಡಿಯಲ್ಲಿಯೇ ಕೆಲಸ ಮಾಡುತ್ತಿರುವ ಭಾವನೆ ಮೂಡಿದೆ ಎಂದರು.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಚಿವ ಸಂಪುಟ ರಚನೆ ವೇಳೆ ನನಗೆ ಬೇರೆ ಖಾತೆ ಬೇಕೇ ಎಂದು ಕೇಳಿದ್ದರು. ಆಗ ನಾನು ದೇವರನ್ನು ಎರಡನೇ ಸ್ಥಾನದಲ್ಲಿ, ಮಕ್ಕಳನ್ನು ದೇವರ ಸ್ಥಾನದಲ್ಲಿ ಕೂರಿಸಿದ್ದೇನೆ. ನನಗೆ ಮತ್ತೆ ಮಕ್ಕಳ ಸೇವೆ ಮಾಡುವ ಅವಕಾಶ ಕೊಡುವಂತೆ ಕೇಳಿಕೊಂಡೆ. ಅದರಂತೆ ಅವಕಾಶ ನೀಡಿದ್ದಾರೆ ಎಂದು ಹೇಳಿ ಮಧು ಬಂಗಾರಪ್ಪ ಕೃತಜ್ಞತೆ ಸಲ್ಲಿಸಿದರು.

ಪೌರಾಡಳಿತ ಸಚಿವ ಎಚ್.ಸಿ.ಬಾಲಕೃಷ್ಣ, ಪಶು ಸಂಗೋಪನಾ ಸಚಿವ ಪುಟ್ಟರಂಗಶೆಟ್ಟಿ, ಬಮೂಲ ಅಧ್ಯಕ್ಷ ಡಿ.ಕೆ.ಸುರೇಶ್, ವಿಧಾನ ಪರಿಷತ್ ಸದಸ್ಯ ಎಸ್.ರವಿ, ಮಾಜಿ ಶಾಸಕ ಸಿ.ಎಂ.ಲಿಂಗಪ್ಪ, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಕೆ.ರಾಜು, ಕೆಎಂಎಫ್ ಮಾಜಿ ಅಧ್ಯಕ್ಷ ಪಿ.ನಾಗರಾಜು, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಶೋಕ್ , ನಿರ್ದೇಶಕ ಯರೇಹಳ್ಳಿ ಮಂಜು, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಲ್.ಚಂದ್ರಶೇಖರ್, ಜಿಪಂ ಮಾಜಿ ಅಧ್ಯಕ್ಷ ಕೆ.ರಮೇಶ್ , ತಾಪಂ ಮಾಜಿ ಅಧ್ಯಕ್ಷರಾದ ಜಗದೀಶ್ , ಡಿ.ಎಂ.ಮಹದೇವಯ್ಯ, ಬಿಡದಿ - ಕೂಟಗಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರೇಹಳ್ಳಿ ಗಂಗಾಧರ್ , ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಜಿಪಂ ಸಿಇಒ ಅನ್ಮೋಲ್ ಜೈನ್ , ತಹಸೀಲ್ದಾರ್ ನರಸಿಂಹಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

23ಕೆಆರ್ ಎಂಎನ್ 2.ಜೆಪಿಜಿ

ಮಾಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯರೇಹಳ್ಳಿಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ನಿರ್ಮಾಣಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೂಮಿಪೂಜೆ ನೆರವೇರಿಸಿದರು.