ಭಾರತದಲ್ಲಿ 14.96 ಕೋಟಿ ಕ್ಯಾನ್ಸರ್ ರೋಗಿಗಳು: ಮಿಮ್ಸ್ ನಿರ್ದೇಶಕ ಡಾ.ನರಸಿಂಹಸ್ವಾಮಿ

| Published : Feb 05 2025, 12:33 AM IST

ಭಾರತದಲ್ಲಿ 14.96 ಕೋಟಿ ಕ್ಯಾನ್ಸರ್ ರೋಗಿಗಳು: ಮಿಮ್ಸ್ ನಿರ್ದೇಶಕ ಡಾ.ನರಸಿಂಹಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಭಾರತದಲ್ಲಿ 14.96 ಕೋಟಿ ಜನರು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದಾರೆ. 2040ರ ವೇಳೆಗೆ ಭಾರತದಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ದ್ವಿಗುಣಗೊಳ್ಳುವ ಆತಂಕ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಜಾಗೃತಿ ಮೂಡಿಸುವ ಕಾರ್ಯಕ್ರಮಗಳ ಜೊತೆಗೆ ಚಿಕಿತ್ಸೆ ಮತ್ತು ನಿಯಂತ್ರಣಕ್ಕಾಗಿ ಸಂಯೋಜಿತ ಪ್ರಯತ್ನ ಉತ್ತೇಜಿಸಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಮನುಷ್ಯರಲ್ಲಿ ಇತ್ತೀಚೆಗೆ ಆಹಾರ ಪದ್ಧತಿ ಮತ್ತು ಜೀವನ ಶೈಲಿಯಲ್ಲಿನ ಬದಲಾವಣೆ ಹಾಗೂ ತಂಬಾಕು ಸೇವೆಯಿಂದ ಹಲವಾರು ಮಂದಿ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದಾರೆ ಎಂದು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನಿರ್ದೇಶಕ ಡಾ.ನರಸಿಂಹಸ್ವಾಮಿ ತಿಳಿಸಿದರು.

ನಗರದ ಮಿಮ್ಸ್ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಸಂಘ, ಮಿಮ್ಸ್ ಶಸ್ತ್ರ ಚಿಕಿತ್ಸಾ ವಿಭಾಗದಿಂದ ನಡೆದ ವಿಶ್ವ ಕ್ಯಾನ್ಸರ್ ರೋಗದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರತಿ ವರ್ಷ ಫೆ.4ರಂದು ವಿಶ್ವದಾದ್ಯಂತ ಕ್ಯಾನ್ಸರ್ ದಿನಾಚರಣೆ ಆಚರಿಸಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಜನಸಾಮಾನ್ಯರಲ್ಲಿ ಕ್ಯಾನ್ಸರ್ ರೋಗ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಭಾರತದಲ್ಲಿ 14.96 ಕೋಟಿ ಜನರು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದಾರೆ. 2040ರ ವೇಳೆಗೆ ಭಾರತದಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ದ್ವಿಗುಣಗೊಳ್ಳುವ ಆತಂಕ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಜಾಗೃತಿ ಮೂಡಿಸುವ ಕಾರ್ಯಕ್ರಮಗಳ ಜೊತೆಗೆ ಚಿಕಿತ್ಸೆ ಮತ್ತು ನಿಯಂತ್ರಣಕ್ಕಾಗಿ ಸಂಯೋಜಿತ ಪ್ರಯತ್ನಗಳನ್ನು ಉತ್ತೇಜಿಸಲಾಗುತ್ತಿದೆ ಎಂದರು.

ಕ್ಯಾನ್ಸರ್ ಕೇವಲ ಚಿಕಿತ್ಸೆಯಿಂದ ಮಾತ್ರವಲ್ಲ. ಜನರ ಬೆಂಬಲದಿಂದ ಗೆಲ್ಲಬಹುದು. ಅದನ್ನು ಬೇರುಗಳಿಂದಲೇ ನಿರ್ಮೂಲನೆ ಮಾಡಬೇಕು. ಕ್ಯಾನ್ಸರ್ ಒಂದು ಕಾಯಿಲೆ. ಇದನ್ನು ಮೊದಲೇ ಪತ್ತೆ ಹಚ್ಚಿದರೆ ಅದನ್ನು ಗುಣಪಡಿಸಬಹುದು. ಆದರೆ, ಹೆಚ್ಚಿನ ಸಂದರ್ಭಗಳಲ್ಲಿ ಜನರಿಗೆ ಕ್ಯಾನ್ಸರ್‌ನ ಲಕ್ಷಣಗಳ ಬಗ್ಗೆ ತಿಳಿದಿರುವುದಿಲ್ಲ. ಇದರಿಂದಾಗಿ ರೋಗವು ಮುಂದುವರಿದ ಹಂತವನ್ನು ತಲುಪುತ್ತದೆ ಮತ್ತು ಚಿಕಿತ್ಸೆಯು ಕಷ್ಟಕರವಾಗುತ್ತದೆ. ಆದ್ದರಿಂದ, ಕ್ಯಾನ್ಸರ್ ಜಾಗೃತಿ ಮೂಡಿಸುವುದು ಬಹಳ ಮುಖ್ಯ ಎಂದು ಅಭಿಪ್ರಾಯಿಸಿದರು.

ತಂಬಾಕು ಮತ್ತು ಮದ್ಯ ಸೇವನೆಯು ಕ್ಯಾನ್ಸರ್‌ಗೆ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ಇವುಗಳಿಂದ ದೂರವಿರುವುದರಿಂದ ಕ್ಯಾನ್ಸರ್ ಅಪಾಯವನ್ನು ಬಹಳ ಮಟ್ಟಿಗೆ ಕಡಿಮೆ ಮಾಡಬಹುದು. ಹಣ್ಣುಗಳು, ತರಕಾರಿಗಳು ಮತ್ತು ಧಾನ್ಯಗಳು ಸಮೃದ್ಧವಾಗಿರುವ ಆಹಾರವನ್ನು ಸೇವಿಸುವುದು ಅಗತ್ಯ ಎಂದು ಪ್ರತಿಪಾದಿಸಿದರು.

ದೈಹಿಕ ಚಟುವಟಿಕೆಯಲ್ಲಿ ನಿಯಮಿತ ವ್ಯಾಯಾಮವು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು, ಚರ್ಮದ ಕ್ಯಾನ್ಸರ್ ತಪ್ಪಿಸಲು, ಬಿಸಿಲಿನಲ್ಲಿ ಹೊರಗೆ ಹೋಗುವಾಗ ಸನ್‌ಸ್ಕ್ರೀನ್ ಬಳಸಬೇಕು ಎಂದರು.

ಜಾಗೃತಿ ಒಂದು ದಿನಕ್ಕೆ ಸೀಮಿತವಾಗದೆ ಮುಂದುವರಿಯಬೇಕು. ರೋಗಿಗಳಿಗೆ ಆಗಾಗ್ಗೆ ತಿಳುವಳಿಕೆ ನೀಡಬೇಕು. ಅಗತ್ಯವಿರುವ ಕಡೆಗಳಲ್ಲಿ ಭಿತ್ತಿಪತ್ರಗಳನ್ನು ಅಳವಡಿಸಬೇಕು. ಇದರಿಂದ ಸ್ವಲ್ಪ ಮಟ್ಟಿಗೆ ಕ್ಯಾನ್ಸರ್ ರೋಗ ತಡೆಯಬಹುದು ಎಂದರು.

ಜಾಥಾದಲ್ಲಿ ಪ್ರಸೂತಿ ಮತ್ತು ಸ್ತ್ರೀರೋಗ, ಶಸ್ತ್ರ ಚಿಕಿತ್ಸಾ ವಿಭಾಗದ ವೈದ್ಯರು, ನರ್ಸಿಂಗ್ ವಿದ್ಯಾರ್ಥಿಗಳು ನಗರದ ಪ್ರಮುಖ ಬೀದಿಗಳಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಜಾಥಾ ನಡೆಸಿದರು. ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞ ವೈದ್ಯರ ಸಂಘದ ಅಧ್ಯಕ್ಷ ಡಾ.ಮನೋಹರ್ ಇತರರು ಪಾಲ್ಗೊಂಡಿದ್ದರು.