ನವೆಂಬರ್ ೧೫ ಮತ್ತು ೧೬ರಂದು ಕಾರಟಗಿ ಪಟ್ಟಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಲಿರುವ ಹಿನ್ನೆಲೆಯಲ್ಲಿ ತಹಸೀಲ್ದಾರ್ ಎಂ. ಕುಮಾರಸ್ವಾಮಿ ಅವರು ಸ್ಥಾನಿಕ ಕಚೇರಿ ಉದ್ಘಾಟಿಸಿದರು.
ಕಾರಟಗಿ: ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆ ಉಳಿಸಿ - ಬೆಳೆಸುವಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ತಹಸೀಲ್ದಾರ್ ಎಂ. ಕುಮಾರಸ್ವಾಮಿ ಹೇಳಿದರು.
ನವೆಂಬರ್ ೧೫ ಮತ್ತು ೧೬ರಂದು ಪಟ್ಟಣದಲ್ಲಿ ಜರುಗಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಸ್ಥಾನಿಕ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.ಜಿಲ್ಲಾ ಸಮ್ಮೇಳನ ಯಶಸ್ವಿಗೊಳಿಸುವುದು ಎಲ್ಲ ಕನ್ನಡಾಭಿಮಾನಿಗಳ ಜವಾಬ್ದಾರಿ, ಸಮ್ಮೇಳನದಲ್ಲಿ ಜಿಲ್ಲೆಯ ಸಾಹಿತಿಗಳು, ಕವಿಗಳು, ಕಲಾವಿದರು ಹಾಗೂ ಕನ್ನಡಾಭಿಮಾನಿಗಳು ಭಾಗವಹಿಸಬೇಕು ಎಂದರು.
ಸಮ್ಮೇಳನಾಧ್ಯಕ್ಷರಾಗಿ ಜಿಲ್ಲೆಯ ಇತಿಹಾಸ ಸಂಶೋಧಕ, ಚಿಂತಕ ಪ್ರಾಚಾರ್ಯ ಡಾ. ಶರಣಬಸಪ್ಪ ಕೋಲ್ಕಾರ್ ಅಧ್ಯಕ್ಷತೆಯಲ್ಲಿ ವಿವಿಧ ಗೋಷ್ಠಿಗಳು, ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸ್ಮರಣ ಸಂಚಿಕೆ ಬಿಡುಗಡೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸಲು ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಇದಕ್ಕೆಲ್ಲ ಒತ್ತಾಸೆಯಾಗಿ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ನೇತೃತ್ವದಲ್ಲಿ ಎಲ್ಲ ಕಾರ್ಯಕ್ರಮಗಳು ಜರುಗಲಿದ್ದು, ತಾಲೂಕಾಡಳಿತ ಸೇರಿದಂತೆ ತಾಪಂ, ಪುರಸಭೆ ಹೀಗೆ ಎಲ್ಲ ಇಲಾಖೆಗಳು ಸಮ್ಮೇಳನದ ಯಶಸ್ಸಿಗೆ ಸಹಕರಿಸಲಿವೆ. ಕನ್ನಡ ಸಾಹಿತ್ಯಾಭಿಮಾನಿಗಳು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.ತಾಪಂ ಇಒ ಲಕ್ಷ್ಮೀದೇವಿ ಯಾದವ ಮಾತನಾಡಿ, ೧೫ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ವ್ಯವಸ್ಥಿತವಾಗಿ ಸಂಘಟಿಸುವ ನಿಟ್ಟಿನಲ್ಲಿ ಕೆಪಿಎಸ್ ಪ್ರೌಢಶಾಲಾ ವಿಭಾಗದ ಸಿದ್ದೇಶ್ವರ ರಂಗಮಂದಿರದ ಬಳಿ ಸಾಹಿತ್ಯ ಸಮ್ಮೇಳನ ಕಚೇರಿ ಲೋಕಾರ್ಪಣೆಗೊಳಿಸಲಾಗಿದೆ ಎಂದರು.
ಕಸಾಪ ಜಿಲ್ಲಾಧ್ಯಕ್ಷ ಶರಣೇಗೌಡ ಪೊಲೀಸ್ಪಾಟೀಲ್ ಹಾಗೂ ತಾಲೂಕು ಅಧ್ಯಕ್ಷ ಶರಣಪ್ಪ ಕೋಟ್ಯಾಳ ಮಾತನಾಡಿದರು.ಗ್ಯಾರಂಟಿ ಯೋಜನೆ ಜಿಲ್ಲಾ ಉಪಾಧ್ಯಕ್ಷ ನಾಗರಾಜ ಅರಳಿ, ದಲಾಲಿ ವರ್ತಕರ ಸಂಘದ ಅಧ್ಯಕ್ಷ ಬಸವರಾಜ ಪಗಡದಿನ್ನಿ, ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಮರೇಶ ಮೈಲಾಪುರ, ನೌಕರರ ಸಂಘದ ಅಧ್ಯಕ್ಷ ಹನುಮಂತಪ್ಪ ತೊಂಡಿಹಾಳ, ಪ್ರಹ್ಲಾದ ಜೋಷಿ, ಮರಿಯಪ್ಪ ಸಾಲೋಣಿ, ಭೀರಪ್ಪ, ಶರಣಪ್ಪ ಸಂಗಟಿ, ಮಂಜುನಾಥ ಚಿಕೇನಕೊಪ್ಪ, ವೆಂಕೋಬ ಚಲುವಾದಿ, ಮಲ್ಲಿಕಾರ್ಜುನ ಯತ್ನಟ್ಟಿ, ಅಲಿ ಹುಸೇನ್, ಶಿವಲೀಲಾ ಅಯೋಧ್ಯಾ ಇದ್ದರು.