15ರಂದು ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ

| Published : Sep 13 2024, 01:33 AM IST

ಸಾರಾಂಶ

ಶ್ರೀ ಭುವನೇಂದ್ರ ಕಾಲೇಜಿನ ಸಭಾಂಗಣದಲ್ಲಿ ಸೆ. 15ರಂದು ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ. ಸಾಧಕ ಪ್ರಾಧ್ಯಾಪಕರ ಶೈಕ್ಷಣಿಕ ಸಾಧನೆ ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಕಾರ್ಕಳ

ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ, ಮಂಗಳೂರು ವಿಶ್ವವಿದ್ಯಾಲಯ ವಿಭಾಗ ವತಿಯಿಂದ ಶ್ರೀ ಭುವನೇಂದ್ರ ಕಾಲೇಜಿನ ಸಭಾಂಗಣದಲ್ಲಿ ಸೆ. 15ರಂದು 2024ರ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಮಡಿಕೇರಿ ಈ ಮೂರು ಜಿಲ್ಲೆಗಳ ಸಾಧಕ ಪ್ರಾಧ್ಯಾಪಕರು ಶೈಕ್ಷಣಿಕ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ನವದೆಹಲಿಯ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿಯ ಅಧ್ಯಕ್ಷ ಪ್ರೊ. ಅನಿಲ್ ಸಹಸ್ರಬುದ್ದೆ ಇವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಮೋಹನ್ ಪಡಿವಾಳ್ ಹೇಳಿದರು.

ಅವರು ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು

2023 ನೇ ಸಾಲಿನಿಂದ ಆರಂಭವಾದ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಶ್ವವಿದ್ಯಾಲಯ ಘಟಕವು ಶಿಕ್ಷಣ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗೈದ ಪ್ರಾಧ್ಯಾಪಕರನ್ನು ಗುರುತಿಸಿ ಬೇರೆ ಬೇರೆ ವಿಭಾಗಗಳಲ್ಲಿ ಪ್ರಶಸ್ತಿಯನ್ನು ನೀಡುತ್ತಿದೆ. ಅಂತೆಯೇ ಈ ಬಾರಿ ಜೀವಮಾನದ ಸಾಧನೆಗಾಗಿ ಮಂಗಳೂರಿನ ಶಾರದ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ ಬಿ ಪುರಾಣಿಕ್ ಹಾಗೂ ಶಿಕ್ಷಣ ತಜ್ಞ ಹಾಗೂ ಬರಹಗಾರ ಡಾ. ಶಂಕರ್ ರಾವ್ ಅವರನ್ನು ಆಯ್ಕೆ ಮಾಡಲಾಗಿದೆ.

ಕಾಲೇಜು ಆಡಳಿತ ನಿರ್ವಹಣೆಯಲ್ಲಿನ ಅತ್ಯುತ್ತಮ ಆಡಳಿತ ನಿರ್ವಾಹಕರಾಗಿ ಸಾಧನೆಗಾಗಿ ಮಂಗಳೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ. ಜಗದೀಶ್ ಬಾಳ ಹಾಗೂ ಉಜಿರೆ ಎಸ್ ಡಿ ಎಮ್ ಸ್ವಾಯತ್ತ ಕಾಲೇಜು ಪ್ರಾಂಶುಪಾಲ ಡಾ. ಬಿ.ಎ ಕುಮಾರ ಹೆಗ್ಡೆ ಅವರನ್ನು ಆಯ್ಕೆ ಮಾಡಲಾಗಿದೆ.

ಸಂಶೋಧನ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗೈದ ಶಿಕ್ಷಕರನ್ನು ಗುರುತಿಸುವ ನಿಟ್ಟಿನಲ್ಲಿ ಈ ಬಾರಿ ಅತ್ಯುತ್ತಮ ಸಂಶೋಧಕ ಪ್ರಶಸ್ತಿಗೆ ಮಂಗಳೂರು ವಿಶ್ವವಿದ್ಯಾಲಯದ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿರುವ ಪ್ರೊ ವಿಶಾಲಾಕ್ಷಿ ಅವರನ್ನು ಆಯ್ಕೆ ಮಾಡಲಾಗಿದೆ.

ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗಾಗಿ ಶ್ರೀ ಭುವನೇಂದ್ರ ಕಾಲೇಜು ಪ್ರಾಂಶುಪಾಲ ಡಾ. ಮಂಜುನಾಥ್ ಕೋಟ್ಯಾನ್ ಹಾಗೂ ಕಾವೇರಿ ಕಾಲೇಜು ವಿರಾಜಪೇಟೆ ನಿವೃತ್ತ ಪ್ರಾಂಶುಪಾಲ ಡಾ. ಆನಂದ ಕಾರ್ಲಾ ಅವರನ್ನು ಆಯ್ಕೆ ಮಾಡಲಾಗಿದೆ.

ಇನ್ನು ಅತ್ಯುತ್ತಮ ಗ್ರಂಥಪಾಲಕ ವಿಭಾಗದಲ್ಲಿ, ಮಂಗಳೂರಿನ ಬೆಸೆಂಟ್ ಸಂಧ್ಯಾ ಕಾಲೇಜು ಗ್ರಂಥಪಾಲಕರು ಡಾ ವಾಸಪ್ಪ ಗೌಡ, ಹಾಗೂ ಅತ್ಯುತ್ತಮ ದೈಹಿಕ ಶಿಕ್ಷಣ ಶಿಕ್ಷಕರು ಪ್ರಶಸ್ತಿಗಾಗಿ ಕುಂದಾಪುರದ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ದೈ.ಶಿಕ್ಷಕ ಕೆ. ಶಂಕರನಾರಾಯಣ ಕುಂದಾಪುರ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಸಂದರ್ಭ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಸ್ಥಾಪಕ ಅಧ್ಯಕ್ಷರಾದ ಡಾ. ರಘು ಅಕ್ಕಮಂಚಿ ಅವರನ್ನು ಸನ್ಮಾನಿಸಲಾಗುವುದು.

ಕಾರ್ಯಕ್ರಮದಲ್ಲಿ 2024ನೇ ಸಾಲಿನಲ್ಲಿ ಪಿಎಚ್‌ಡಿ ಪದವಿ ಪಡೆದ ಸಂಶೋಧನಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಹೆ ಮಣಿಪಾಲದ ಸಹ ಕುಲಾಧಿಪತಿಗಳು ಡಾ. ಎಚ್. ಎಸ್. ಬಲ್ಲಾಳ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ ಎಲ್ ಧರ್ಮ, ತುಮಕೂರು ಯೂನಿವರ್ಸಿಟಿ ಮಾಜಿ ಸಿಂಡಿಕೇಟ್ ಸದಸ್ಯ ಸುವೃತ್ ಕುಮಾರ್, ಭುವನೇಂದ್ರ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಿಎ ಶಿವಾನಂದ ಪೈ, ಬೆಂಗಳೂರು ಕೆ ಆರ್ ಎಸ್ ಎಸ್ ಎಸ್ ಅಧ್ಯಕ್ಷ ಡಾ. ಗುರುನಾಥ್ ಬಡಿಗೇರ್, ಕೆ ಆರ್ ಎಸ್ ಎಸ್ ಪ್ರಧಾನ ಕಾರ್ಯದರ್ಶಿ

ಪ್ರೊ. ರೋಹಿಣಿ ಕುಮಾರ್ ಹಿಲ್ಲಿ ಕಲಬುರ್ಗಿ, ರಾಜ್ಯ ಜಂಟಿ ಕಾರ್ಯದರ್ಶಿ , ಡಾ. ಮಾಧವ ಎಂ. ಕೆ. ಮುಂತಾದವರು ಉಪಸ್ಥಿತರಿರುವರು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಮೋಹನ್ ಪಡಿವಾಳ್, ಪ್ರಾಚಾರ್ಯರಾಗಿ ಮಂಜುನಾಥ ಕೋಟ್ಯಾನ್, ಸ್ವಾಗತ ಸಮಿತಿ ಪ್ರೊ. ಸುರೇಂದ್ರ ಶೆಟ್ಟಿ, ಮಂಗಳೂರು ವಿಶ್ವವಿದ್ಯಾಲಯದ ವಾಣಿ ಯು ಎಸ್ , ಉಡುಪಿ ಅಧ್ಯಾಪಕ ಸಂಘಟನೆ ಯಶವಂತ ಕುದ್ರೋಳಿ ಮೊದಲಾದವರು ಉಪಸ್ಥಿತರಿದ್ದರು.