ಸಾರಾಂಶ
ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಿ.ಯು.ಸಿ. ಪರೀಕ್ಷೆಯ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು. ಉಡುಪಿ ಜಿಲ್ಲೆಯಲ್ಲಿ ಒಟ್ಟು 16,060 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ತಿಳಿಸಿದರು.
ಕನ್ನಡಪ್ರಭ ವಾರ್ತೆ ಮಣಿಪಾಲದ್ವಿತೀಯ ಪಿ.ಯು.ಸಿ. ಪರೀಕ್ಷೆಯು ಮಾ.1ರಿಂದ 22ರ ವರೆಗೆ ನಡೆಯಲಿದ್ದು, ಉಡುಪಿ ಜಿಲ್ಲೆಯಲ್ಲಿ ಒಟ್ಟು 16,060 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು.
ಅವರು ಗುರುವಾರ ಇಲ್ಲಿನ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಿ.ಯು.ಸಿ. ಪರೀಕ್ಷೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಪರೀಕ್ಷೆಗಳು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ಜಿಲ್ಲೆಯ 28 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಹೊಸದಾಗಿ 15,413 ಮಂದಿ, ಖಾಸಗಿಯಾಗಿ 433 ಮಂದಿ ಹಾಗೂ 214 ಮಂದಿ ಮರು ಪರೀಕ್ಷೆ ಬರೆಯಲಿದ್ದಾರೆ. ವಿಜ್ಞಾನ ವಿಭಾಗದಲ್ಲಿ 7745 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 6564 ವಿದ್ಯಾರ್ಥಿಗಳು ಹಾಗೂ ಕಲಾ ವಿಭಾಗದಲ್ಲಿ 1054 ವಿದ್ಯಾರ್ಥಿಗಳು ಹೊಸದಾಗಿ ಪರೀಕ್ಷೆ ಬರೆಯಲಿದ್ದಾರೆ ಎಂದರು.
ವಿದ್ಯಾರ್ಥಿಗಳು ಪರೀಕ್ಷಾ ತರಗತಿಗಳಲ್ಲಿ ಸುಲಲಿತವಾಗಿ ಪರೀಕ್ಷೆಯನ್ನು ಬರೆಯಲು ಪೂರಕ ವಾತಾವರಣ ಕಲ್ಪಿಸಲು ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತದೆ. ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಸಕಾಲದಲ್ಲಿ ಹಾಜರಾಗಲು ಸಾರಿಗೆ ಇಲಾಖೆಯ ಅಧಿಕಾರಿಗಳು ಬಸ್ಸಿನ ವ್ಯವಸ್ಥೆಯನ್ನು ಮಾಡಲಿದ್ದಾರೆ ಎಂದರು.ಪ್ರಶ್ನೆ ಪತ್ರಿಕೆ ಸೋರಿಕೆ ಇತ್ಯಾದಿ ವದಂತಿ ಹರಡುವುದು, ಸಾಮಾಜಿಕ ಜಾಲತಾಣಗಳಲ್ಲಿ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಅಥವಾ ಕೈಬರಹ ಪ್ರಶ್ನೆಗಳನ್ನು ರವಾನಿಸಿ, ವದಂತಿಗಳನ್ನು ಹಬ್ಬಿಸಿ, ವಿದ್ಯಾರ್ಥಿ, ಪೋಷಕರಲ್ಲಿ ಗೊಂದಲ ಸೃಷ್ಠಿಸುವುದು, ಅಕ್ರಮಕ್ಕೆ ಪ್ರೇರೇಪಿಸುವುದು ಮತ್ತು ಪ್ರೋತ್ಸಾಹಿಸುವುದು ಕಂಡುಬಂದಲ್ಲಿ ಅವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಲಾಗುವುದು. ಯಾರೊಬ್ಬರೂ ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಎಎಸ್ಪಿ ಸಿದ್ದಲಿಂಗಪ್ಪ, ಸಹಾಯಕ ಕಮೀಷನರ್ ರಶ್ಮಿ ಎಸ್., ಪಪೂ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಡಿಡಿಪಿಐ ಗಣಪತಿ ಕೆ. ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ತಹಸೀಲ್ದಾರರು, ವಿವಿಧ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.