ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಇದೇ ಅ. 17 ರಂದು ಅರ್ಥಪೂರ್ಣವಾಗಿ ಆಯೋಜಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಆರಂಭದಲ್ಲಿ ಮಾತನಾಡಿದ ವಾಲ್ಮೀಕಿ ಸಮಾಜದ ಮುಖಂಡರಾದ ಅಶೋಕ್ ಅವರು ಕಳೆದ ಬಾರಿಯಂತೆ ಈ ಬಾರಿಯೂ ಸಹ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಕೋರಿದರು.
ಕಳೆದ ಭಾರಿ ಗಾಂಧಿ ಮೈದಾನದಿಂದ ಕಾವೇರಿ ಕಲಾಕ್ಷೇತ್ರದವರೆಗೆ ವಾಲ್ಮೀಕಿ ಭಾವಚಿತ್ರದೊಂದಿಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು, ಈ ಬಾರಿಯು ಮೆರವಣಿಗೆಗೆ ಅವಕಾಶ ಮಾಡಬೇಕು ಎಂದು ಕೋರಿದರು.ರೈತರು, ಪೌರಕಾರ್ಮಿಕರು, ಮತ್ತು ಮಾಜಿ ಸೈನಿಕರನ್ನು ಸನ್ಮಾನಿಸುವಂತಾಗಬೇಕು ಎಂದು ಅಶೋಕ್ ಅವರು ಸಲಹೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ ಅವರು ಅಕ್ಟೋಬರ್, 17 ರಂದು ನಾಡಿನ ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ ಸಂಭವಿಸಲಿದೆ. ಹಾಗಾಗಿ ಮೆರವಣಿಗೆ ಇರುವುದಿಲ್ಲ ಎಂದು ಹೇಳಿದರು.ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚು ಅಂಕ ಪಡೆದವರನ್ನು ಗುರುತಿಸುವುದರ ಜೊತೆಗೆ ಕೆಪಿಎಸ್‌ಸಿ, ಯುಪಿಎಸ್‌ಸಿ ಮತ್ತಿತರ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ವಿವಿಧ ಹುದ್ದೆಗೆ ಆಯ್ಕೆಯಾದವರನ್ನು ಗೌರವಿಸುವಂತಾಗಬೇಕು ಎಂದು ಸಲಹೆ ಮಾಡಿದರು.
ಪ್ರಮುಖರಾದ ಗಂಗಾಧರ ಅವರು ಮಾತನಾಡಿ, ಮಕ್ಕಳಲ್ಲಿ ಸ್ಪೂರ್ತಿ ಉಂಟುಮಾಡುವಂತಹ ಕಾರ್ಯಕ್ರಮವನ್ನು ಆಯೋಜಿಸಬೇಕು ಎಂದು ಸಲಹೆ ಮಾಡಿದರು.ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸಮಾಜವು ಅಂತರ್ಜಾಲ ಯುಗದಲ್ಲಿ ಬದುಕುತ್ತಿದ್ದು, ವಿದ್ಯಾರ್ಥಿಗಳ ಪ್ರತಿಭೆಗೆ ಅವಕಾಶ ಕಲ್ಪಿಸುವುದು ಅತ್ಯಗತ್ಯವಾಗಿದೆ ಎಂದರು.
ಪ್ರಮುಖರಾದ ಚಂದನ್ ಅವರು ಮಾತನಾಡಿ, ವಾಲ್ಮೀಕಿ ಜಯಂತಿ ಕಾರ್ಯಕ್ರಮ ಸಂಬಂಧಿಸಿದಂತೆ ಆಯಾಯ ತಾಲೂಕಿನಲ್ಲಿ ನಡೆಯುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತಾಗಲು ಪಿಡಿಒಗಳಿಗೆ ಮಾಹಿತಿ ನೀಡುವಂತಾಗಬೇಕು ಎಂದು ಮನವಿ ಮಾಡಿದರು.ಪ್ರಮುಖರಾದ ಕುಡಿಯರ ಮುತ್ತಪ್ಪ ಅವರು ಮಾತನಾಡಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಸಂದರ್ಭದಲ್ಲಿ ಆದಿವಾಸಿ ಜನರಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸುವಂತಾಗಬೇಕು ಎಂದು ಅವರು ಕೋರಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ, ಡಿವೈಎಸ್‌ಪಿ ಮಹೇಶ್ ಕುಮಾರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಪಂಚಾಯತ್ ರಾಜ್ ಇಇ ಜಿ.ಕೆ.ನಾಯ್ಕ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ, ಲೋಕೋಪಯೋಗಿ ಇಲಾಖೆ ಎಇಇ ಗಿರೀಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಆರ್.ಕೃಷ್ಣಮೂರ್ತಿ ಇತರರು ಇದ್ದರು.