ನಾಡಿದ್ದಿಂದ 2 ದಿನ ದಕ್ಷಿಣ ಭಾರತ ಉತ್ಸವ: ಎಚ್.ಕೆ ಪಾಟೀಲ್‌

| Published : Jun 13 2024, 12:46 AM IST

ನಾಡಿದ್ದಿಂದ 2 ದಿನ ದಕ್ಷಿಣ ಭಾರತ ಉತ್ಸವ: ಎಚ್.ಕೆ ಪಾಟೀಲ್‌
Share this Article
  • FB
  • TW
  • Linkdin
  • Email

ಸಾರಾಂಶ

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ಹೆಚ್ಚಿನ ಉತ್ತೇಜನ ಮತ್ತು ಉದ್ಯೋಗ ಸೃಷ್ಟಿಗೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ಇದೇ 15 ಮತ್ತು 16ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತ ಉತ್ಸವ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ್‌ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ಹೆಚ್ಚಿನ ಉತ್ತೇಜನ ಮತ್ತು ಉದ್ಯೋಗ ಸೃಷ್ಟಿಗೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ಇದೇ 15 ಮತ್ತು 16ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತ ಉತ್ಸವ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ್‌ ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಅರಮನೆ ಮೈದಾನದಲ್ಲಿ ಎಫ್‌ಕೆಸಿಸಿಐ ಸಹಯೋಗದೊಂದಿಗೆ ಉತ್ಸವ ಹಮ್ಮಿಕೊಳ್ಳಲಾಗಿದೆ. ದಕ್ಷಿಣ ಭಾರತದ ಎಲ್ಲಾ ರಾಜ್ಯಗಳು ಮತ್ತು ಉತ್ತರ ಭಾರತದ ಹಲವು ರಾಜ್ಯಗಳು ಸಮಾವೇಶದಲ್ಲಿ ಭಾಗವಹಿಸಲಿವೆ. ಪ್ರವಾಸೋದ್ಯಮದೊಳಗೆ ಪಾಲುದಾರರನ್ನು ತೊಡಗಿಸಿಕೊಳ್ಳಲು ಉತ್ಸವ ಸಹಕಾರಿಯಾಗಲಿದೆ. ಎರಡು ದಿನಗಳ ಉತ್ಸವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಉದ್ಘಾಟಿಸಲಿದ್ದು, ಹಲವು ಸಚಿವರು, ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹಲವು ಪಾಲುದಾರರು ಹೂಡಿಕೆ ಚಟುವಟಿಕೆಗಳನ್ನು ಪ್ರಾರಂಭಿಸಲು ಸರ್ಕಾರದೊಂದಿಗೆ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಲು ಆಸಕ್ತಿ ವ್ಯಕ್ತಪಡಿಸಿದ್ದಾರೆ. ಈಗಾಗಲೇ ರೋಡ್ ಶೋ ವೇಳೆ ಬಂಡವಾಳ ಹೂಡಿಕೆ ಮಾಡಲು ಆಸಕ್ತಿ ವ್ಯಕ್ತಪಡಿಸಿದವರಿಂದ ಆಸಕ್ತಿ ಪತ್ರವನ್ನು ಸ್ವೀಕರಿಸಲಾಗಿದೆ. ಈಗಾಗಲೇ ಸುಮಾರು 500 ಕೋಟಿ ರು. ಹೂಡಿಕೆ ಆಸಕ್ತಿ ಪತ್ರವನ್ನು ಸ್ವೀಕರಿಸಲಾಗಿದೆ. ಅಲ್ಲದೇ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಂದ ಈ ಸಮಾವೇಶದ ಮೂಲಕ ಇನ್ನೂ 500 ಕೋಟಿ ರು. ಹೂಡಿಕೆಯನ್ನು ನಿರೀಕ್ಷಿಸಲಾಗಿದೆ ಎಂದರು.

ದಕ್ಷಿಣ ಭಾರತದಲ್ಲಿನ ಪ್ರವಾಸೋದ್ಯಮ ಪದ್ಧತಿಗಳು, ಸಂರಕ್ಷಣಾ ಪ್ರಯತ್ನಗಳು ಮತ್ತು ಸಮುದಾಯ ಆಧಾರಿತ ಪ್ರವಾಸೋದ್ಯಮ ಉಪಕ್ರಮಗಳ ಮಹತ್ವದ ಬಗ್ಗೆ ಪ್ರತಿನಿಧಿಗಳಿಗೆ ವಿಚಾರಗೋಷ್ಠಿಗಳು, ಕಾರ್ಯಾಗಾರಗಳು ಮತ್ತು ಸಂವಾದ ಮೂಲಕ ತಿಳಿಸುವ ಪ್ರಯತ್ನ ಮಾಡಲಾಗುತ್ತದೆ. ದಕ್ಷಿಣ ಭಾರತ ಉತ್ಸವ ಹಿನ್ನೆಲೆಯಲ್ಲಿ ರಾಜ್ಯದ ಚಿಕ್ಕಮಗಳೂರು, ಮೈಸೂರು, ಉಡುಪಿ ಜಿಲ್ಲೆಗಳಲ್ಲಿ ಹಾಗೂ ನೆರೆಯ ರಾಜ್ಯದ ಹೈದರಾಬಾದ್, ಚೆನ್ನೈ, ವಿಜಯವಾಡ ಮತ್ತು ಕೊಚ್ಚಿಯಲ್ಲಿ ಹಲವು ರೋಡ್ ಶೋಗಳನ್ನು ನಡೆಸಿ ಅಲ್ಲಿನ ಹೂಡಿಕೆದಾರರೊಂದಿಗೆ ಸಭೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.

8 ದತ್ತು ಯೋಜನೆಗಳಿಗೆ ಒಪ್ಪಂದ:

ರಾಜ್ಯದ ಸ್ಮಾರಕಗಳ ಸಂರಕ್ಷಣೆ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಿ ಸ್ಮಾರಕಗಳನ್ನು ಅಭಿವೃದ್ಧಿಪಡಿಸಲು ದತ್ತು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈಗಾಗಲೇ ಎಂಟು ದತ್ತು ಯೋಜನೆಗಳ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಯೋಜನೆಯಡಿ 272 ಸ್ಮಾರಕಗಳ ಸ್ವೀಕಾರಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ. ರಾಜ್ಯದಲ್ಲಿ ಪ್ರವಾಸೋದ್ಯಮ ಉತ್ತೇಜಿಸಲು ಹಂಪಿ, ಬಾದಾಮಿ, ಐಹೊಳೆ, ಪಟ್ಟದಕಲ್ಲು, ವಿಜಯಪುರ, ಶ್ರೀರಂಗಪಟ್ಟಣ, ಬೇಲೂರು, ಹಳೇಬೀಡು ಸೇರಿದಂತೆ ರಾಜ್ಯದ ವಿವಿಧೆಡೆ 388 ಎಕರೆ ಜಮೀನುಗಳಲ್ಲಿ ಪ್ರವಾಸಿಗರಿಗೆ ಅಗತ್ಯ ಇರುವ ಸೌಲಭ್ಯಗಳನ್ನು 595 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಸಾಹಸ ಪ್ರವಾಸೋದ್ಯಮವನ್ನು ಉತ್ತೇಜಿಸುವ ಸಲುವಾಗಿ ಸಾಹಸ ಪ್ರವಾಸಿ ಚಟುವಟಿಕೆಗಳನ್ನು ಕೈಗೊಳ್ಳಲು ಪಿಪಿಪಿ ಮಾದರಿಯಲ್ಲಿ 16 ಜಿಲ್ಲೆಯ 18 ಜಲಾಶಯಗಳಲ್ಲಿ ಯೋಜನೆಯನ್ನು ಸಿದ್ಧಪಡಿಸಲಾಗಿದೆ ಎಂದರು.