ನೀರಾವರಿ ಯೋಜನೆಗೆ ಸರ್ಕಾರದಿಂದ 200 ಕೋಟಿ ರು. ಅಧಿಕ ಅನುದಾನ ಬಿಡುಗಡೆ

| Published : Jun 26 2024, 12:43 AM IST

ಸಾರಾಂಶ

ಮದ್ದೂರು ತಾಲೂಕಿನಲ್ಲಿ ಪ್ರಸ್ತುತ ಕೈಗೊಳ್ಳಬೇಕಾದ ಕಾಮಗಾರಿಗಳ ಬಗ್ಗೆ ಮತ್ತು ಮುಂದೆ ಕೈಗೊಳ್ಳಬೇಕಾದ ನೀರಾವರಿಗೆ ಸಂಬಂಧಿಸಿದ ಅಭಿವೃದ್ಧಿ ಬಗ್ಗೆ ಸಭೆಯಲ್ಲಿ ಅಧಿಕಾರಿಗಳ ಜತೆಯಲ್ಲಿ ಚರ್ಚೆ ನಡೆಸಿದ್ದು, ಹಂತ ಹಂತವಾಗಿ ನೀರಾವರಿ ಯೋಜನೆ ಪೂರ್ಣಗೊಳಿಸುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸಲಾಗುವುದು.

ಕನ್ನಡಪ್ರಭ ವಾರ್ತೆ ಮದ್ದೂರು

ನೀರಾವರಿ ಯೋಜನೆಗಳಿಗೆ ಈಗಾಗಲೇ ಸರ್ಕಾರದಿಂದ ₹200 ಕೋಟಿಗೂ ಅಧಿಕ ಅನುದಾನ ಬಿಡುಗಡೆಯಾಗಿ ತಾಲೂಕಿನಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಕಾವೇರಿ ನೀರಾವರಿ ನಿಗಮದ ಇಲಾಖೆ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೆಮ್ಮಣ್ಣು ನಾಲೆ, ಬೈರನ್ನಾಲೆ ಸೇರಿದಂತೆ ತಾಲೂಕಿನ ಎಲ್ಲ ನಾಲೆಗಳನ್ನು ಆಧುನಿಕರಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ಕೆಆರ್‌ಎಸ್‌ನಿಂದ ನೀರು ಹರಿಸಿದಾಗ ಕೊನೆ ಭಾಗಕ್ಕೆ ಸಮರ್ಪಕವಾಗಿ ನೀರು ಹೋಗದೆ ರೈತರು ಬೆಳೆದ ಬೆಳೆಗಳಿಗೆ ತೊಂದರೆಯಾಗುತಿತ್ತು. ಮುಂದಿನ ದಿನಗಳಲ್ಲಿ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ತಾಲೂಕಿನಲ್ಲಿ ಪ್ರಸ್ತುತ ಕೈಗೊಳ್ಳಬೇಕಾದ ಕಾಮಗಾರಿಗಳ ಬಗ್ಗೆ ಮತ್ತು ಮುಂದೆ ಕೈಗೊಳ್ಳಬೇಕಾದ ನೀರಾವರಿಗೆ ಸಂಬಂಧಿಸಿದ ಅಭಿವೃದ್ಧಿ ಬಗ್ಗೆ ಸಭೆಯಲ್ಲಿ ಅಧಿಕಾರಿಗಳ ಜತೆಯಲ್ಲಿ ಚರ್ಚೆ ನಡೆಸಿದ್ದು, ಹಂತ ಹಂತವಾಗಿ ನೀರಾವರಿ ಯೋಜನೆ ಪೂರ್ಣಗೊಳಿಸುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು.

ತಾಲೂಕಿನಲ್ಲಿರುವ ಕೆರೆಗಳ ಒತ್ತುವರಿ ತೆರವುಗೊಳಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಶ್ರೀಮದ್ದೂರಮ್ಮನ ಕೆರೆ, ತೈಲೂರು, ರುದ್ರಾಕ್ಷಿಪುರ ಹಾಗೂ ಕದಲೂರು ಕೆರೆ ಅಭಿವೃದ್ಧಿಪಡಿಸಿ ಪ್ರವಾಸಿ ತಾಣವನ್ನಾಗಿ ಮಾಡಲು ಯೋಜನೆ ರೂಪಿಸಲಾಗಿದೆ ಎಂದರು.

ತಾಲೂಕಿನ ಕೆಲವು ಕೆರೆಗಳಲ್ಲಿ ಅವೈಜ್ಞಾನಿಕ ಮಣ್ಣನ್ನು ತುಂಬುತ್ತಿರುವ ಬಗ್ಗೆ ದೂರು ಬಂದಿವೆ. ಮುಂದೆ ಕೆರೆಗಳಲ್ಲಿ ಅವೈಜ್ಞಾನಿಕವಾಗಿ ಮಣ್ಣು ತುಂಬದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೆಮ್ಮಣ್ಣುನಾಲೆ ₹90 ಕೋಟಿ, ಬೈರನ್ ನಾಲೆ ₹50 ಕೋಟಿ ವೆಚ್ಚದಲ್ಲಿ ಆಧುನಿಕರಣ ಮಾಡಲು ಕ್ರಮ ಕೈಗೊಂಡಿದ್ದು, ಶೀಘ್ರವಾಗಿ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗುವುದು ಎಂದರು.

ನೀರಾವರಿ ಇಲಾಖೆ ಅಧಿಕಾರಿಗಳು ನಾಲೆಗಳ ಮೇಲೆ ಹೋಗಿ ವೀಕ್ಷಣೆ ಮಾಡುತ್ತಿಲ್ಲ. ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂಬ ದೂರು ಕೇಳಿ ಬರುತ್ತಿದೆ. ಮುಂದೆ ರೈತರಿಂದ ದೂರು ಬಾರದಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸೂಚಿಸಿದರು.

ಪಟ್ಟಣದ ಪುರಸಭಾ ವ್ಯಾಪ್ತಿಯಲ್ಲಿ ಒಳಚರಂಡಿ ನೀರು ಕೆಮ್ಮಣ್ಣು ನಾಲೆ ಮತ್ತು ಶಿಂಷಾ ನದಿಗೆ ಸೇರದಂತೆ ಮಾಡಲು ವಿಶೇಷ ಯೋಜನೆ ರೂಪಿಸಲಾಗಿದೆ ಎಂದರು. ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ಅಧೀಕ್ಷಕ ಇಂಜಿನಿಯರ್ ರಘುರಾಮ್, ಮುಖ್ಯ ಎಂಜಿನಿಯರ್ ಚನ್ನಕೇಶವ, ಕಾರ್ಯಪಾಲಕ ಅಭಿಯಂತರ ನಂಜುಂಡೇಗೌಡ ಇದ್ದರು.